ಅಪಘಾತದಲ್ಲಿ ಕಾರು ಚಾಲಕ ಸ್ಥಳದಲ್ಲೇ ಮೃತ

Published on

ಕೊಳ್ಳೇಗಾಲ: ತಾಲೂಕಿನ ಧನಗೆರೆ ಗ್ರಾಮದ ಬಳಿ ಶುಕ್ರವಾರ ಶ್ರೀ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಬಸ್ ಚಾಲಕ ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ.

ತಮಿಳುನಾಡು ಮೂಲದ ವಿಘ್ನೇಶ್ (35) ಮೃತಪಟ್ಟಿದ್ದು, ಬಸ್ ಚಾಲಕ ರಮೇಶ್ ಹಾಗೂ ಪ್ರಯಾಣಿಕ ಪಾಳ್ಯ ಗ್ರಾಮದ ಜಯರಾಮ್ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರು-ಕೊಳ್ಳೇಗಾಲ ಹೆದ್ದಾರಿಯಲ್ಲಿ ಸಿಗುವ ಧನಗೆರೆ ಬಳಿ ಕೊಳ್ಳೇಗಾಲದಿಂದ ಬೆಂಗಳೂರಿನ ಕಡೆಗೆ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಪ್ರಾಧಿಕಾರದ ಸಾರಿಗೆ ಬಸ್ ಹಾಗೂ ಬೆಂಗಳೂರಿನಿಂದ ತಮಿಳುನಾಡಿಗೆ ತೆರಳುತ್ತಿದ್ದ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಕಾರು ಚಾಲಕ ಮೃತಪಟ್ಟಿದ್ದಾನೆ. ಅಪಘಾತ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದ್ದು, ಬಸ್ ಮುಂಭಾಗ ಜಖಂಗೊಂಡಿದೆ. ಬಸ್ ಚಾಲಕ ಹಾಗೂ ಪ್ರಯಾಣಿಕ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಸುಪ್ರೀತ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಕಾರಿನೊಳಗೆ ಸಿಲುಕಿಕೊಂಡಿದ್ದ ಮೃತ ದೇಹವನ್ನು ಸ್ಥಳೀಯರ ಸಹಾಯದಿಂದ ಹೊರತೆಗೆದು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಯಿತು. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net