ಅಪಘಾತದಲ್ಲಿ ಮೃತಪಟ್ಟ 9 ಮಂದಿಯ ಕುಟುಂಬಕ್ಕೆ ಪರಿಹಾರ.

ಅಪಘಾತದಲ್ಲಿ ಮೃತಪಟ್ಟ 9 ಮಂದಿಯ ಕುಟುಂಬಕ್ಕೆ ಪರಿಹಾರ.
Published on

ಹಾಸನ: ಅರಸೀಕೆರೆ ತಾಲೂಕು ಬಾಣಾವರದ ಗಾಂಧಿನಗರದ ಬಳಿ ಇತ್ತೀಚೆಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟ 9 ಮಂದಿಯ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 5 ಲಕ್ಷ ರೂ. ಪರಿಹಾರವನ್ನು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಸಂಜೆ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ವಿತರಿಸಿದರು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಅಪಘಾತದಲ್ಲಿ ಮೃತಪಟ್ಟ 9 ಮಂದಿ ಕುಟುಂಬಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಂದೇ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದರು. ಸಿಎಂ ಸೂಚನೆ ಮೇರೆಗೆ ನಾನು ಗ್ರಾಮಕ್ಕೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ ನಂತರ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ನೀಡುವಂತೆ ಶಿಫಾರಸ್ಸು ಮಾಡಿದ್ದೆ. ಅದಕ್ಕೆ ಮುಖ್ಯಮಂತ್ರಿಗಳು ಒಪ್ಪಿ ಪರಿಹಾರ ಬಿಡುಗಡೆ ಮಾಡಿದ್ದು, ಮೃತರ ಕುಟುಂಬಕ್ಕೆ ಪರಿಹಾರ ವಿತರಿಸಲಾಗಿದೆ ಎಂದು ತಿಳಿಸಿದರು.

ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಹಿಮ್ಸ್ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಗಾಯಾಳುಗಳ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದಲೇ ಭರಿಸಲಾಗುವುದು ಎಂದು ಹೇಳಿದರು.

ಅರಸೀಕೆರೆ ರಾಷ್ಟ್ರೀಯ ಹೆದ್ದಾರಿ 206ರಲ್ಲಿನ ನ್ಯೂನತೆಗಳನ್ನು ಜಿಲ್ಲಾಧಿಕಾರಿ, ಸ್ಥಳೀಯ ಶಾಸಕರು ಹಾಗೂ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಪರಿಶೀಲಿಸಿ ಸರಿಪಡಿಸಲು ಕ್ರಮ ಕೈಗೊಳ್ಳಲಾಗಿದೆ. ಹಾಸನ-ಸಕಲೇಶಪುರ ಹಾಗೂ ಬೆಂಗಳೂರು-ಮೈಸೂರು ಹೆದ್ದಾರಿ ಲೋಪದೋಷಗಳಿಗೆ ಸಂಬಂಧಿಸಿದಂತೆ ಶೀಘ್ರದಲ್ಲೇ ಮುಖ್ಯಮಂತ್ರಿಯೊಂದಿಗೆ ಸಭೆ ನಡೆಸಿ ಸಮಸ್ಯೆ ಬಗೆಹರಿಸಲಾಗುವುದು ಎಂದರು.

ಇದೇ ವೇಳೆ ಸಚಿವರು ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಬೋಧಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳಾದ ಜಯಮ್ಮ, ಮಂಜುಳ, ಸಂಜು ಮತ್ತು ಹರೀಶ್ ಅವರ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು.

ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡ, ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ, ಜಿ.ಪಂ. ಸಿಇಒ ಕಾಂತರಾಜ್, ಹಿಮ್ಸ್ ನಿರ್ದೇಶಕ ರವಿಕುಮಾರ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಸತೀಶ್ ಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ಎಚ್.ಕೆ. ಸುರೇಶ್, ಬಿಜೆಪಿ ಮುಖಂಡ ಯೋಗಾರಮೇಶ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net