

ಬಾಗಲಕೋಟೆ: ಅಪೌಷ್ಟಿಕತೆ ಮತ್ತು ಬಾಲ್ಯವಿವಾಹ ನಿರ್ಮೂಲನೆಗೆ ಅಧಿಕಾರಿಗಳು ಶ್ರಮಿಸಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಶಶಿದರ ಕುರೇರ ತಿಳಿಸಿದರು.
ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಅಂಗನವಾಡಿ ಸೇವೆಗಳನ್ನು ಸಕಾಲದಲ್ಲಿ ಫಲಾನುಭವಿಗಳಿಗೆ ತಲುಪಿಸಲು ಮತ್ತು ಅಪೌಷ್ಟಿಕತೆ, ಬಾಲ್ಯವಿವಾಹಗಳನ್ನು ತಡೆಗಟ್ಟಲು ಹೆಚ್ಚಿನ ಬದ್ಧತೆಯಿಂದ ಕೆಲಸ ಮಾಡಬೇಕು. ಕರ್ತವ್ಯ ಲೋಪ ಕಂಡುಬಂದಲ್ಲಿ ಅಂತಹವರ ಮೇಲೆ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಗೆ ನೀಡಿದರು.
ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಅಂಗನವಾಡಿ ಕೇಂದ್ರಗಳಿಗೆ ಒಂದು ತಿಂಗಳಲ್ಲಿ ಸರ್ಕಾರಿ ನಿವೇಶನ ಗುರುತಿಸಿ ಹೊಸ ಕಟ್ಟಡ ನಿರ್ಮಿಸಲು ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು. ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಹಾಜರಾತಿಯನ್ನು ಹೆಚ್ಚಿಸಬೇಕು. ಮಕ್ಕಳಿಗೆ ನಿಗದಿತ ಮೆನುವಿನಂತೆ ಆಹಾರ, ಆರೋಗ್ಯ ತಪಾಸಣೆ ಮಾಡಿಸಬೇಕು. ಗಂಭೀರ ಸಮಸ್ಯೆಯಿಂದ ಬಳಲುತ್ತಿರುವ ಮಕ್ಕಳನ್ನು ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗೆ ಪೋಷಕರ ಮನವೊಲಿಸುವ ಕೆಲಸವಾಗಬೇಕು ಎಂದರು.
ಜಿಲ್ಲೆಯಲ್ಲಿ ಬಾಲ್ಯವಿವಾಹ ಪ್ರಕರಣಗಳು ಹೆಚ್ಚು ವರದಿಯಾಗುತ್ತಿದ್ದು, ಜನರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು. ಮತ್ತು ಬಾಲ್ಯವಿವಾಹ ತಡೆಗಟ್ಟಲು ಇತರೆ ಇಲಾಖೆಗಳ ಸಹಯೋಗದೊಂದಿಗೆ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು ಎಂದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಮೇಲ್ವಿಚಾರಕಿಯರು ಅಂಗನವಾಡಿ ಕೇಂದ್ರಗಳಿಗೆ ನಿಯಮಿತವಾಗಿ ಭೇಟಿ ನೀಡಬೇಕು. ಭೇಟಿಯ ಸಂದರ್ಭದಲ್ಲಿ ಕೇಂದ್ರದ ಸ್ವಚ್ಛತೆ, ದಾಖಲಾತಿಗಳ ನಿರ್ವಹಣೆ, ಮಕ್ಕಳ ಹಾಜರಾತಿ, ಮಕ್ಕಳ ಸುರಕ್ಷತೆ, ಆಹಾರ ವಿತರಣೆಯ ಬಗ್ಗೆ ಸಮಗ್ರವಾಗಿ ಪರಿಶೀಲನೆ ಮಾಡಿ ಕರ್ತವ್ಯ ನಿರ್ಲಕ್ಷ್ಯತೆ ಕಂಡುಬಂದಲ್ಲಿ ಅಂತಹ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯ ಮೇಲೆ ಶಿಸ್ತು ಕ್ರಮ ಜರುಗಿಸಲು ತಿಳಿಸಿದರು.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಅಮರೇಶ ಹೆಚ್. ಸೇರಿದಂತೆ ಜಿಲ್ಲೆಯ ಎಲ್ಲಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಹಿರಿಯ, ಮೇಲ್ವಿಚಾರಕಿಯರು ಉಪಸ್ಥಿತರಿದ್ದರು.