ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಗೆ ನಾಳೆ ಅರಸೀಕೆರೆಗೆ ಸಿಎಂ ಬೇಟಿ

ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಗೆ ನಾಳೆ ಅರಸೀಕೆರೆಗೆ ಸಿಎಂ ಬೇಟಿ
Published on

ಹಾಸನ: ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕು ಸ್ಥಾಪನೆ ಕಾರ್ಯಕ್ರಮಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲೆಗೆ ಎರಡನೇ ಬಾರಿಗೆ ಫೆ. 24ರಂದು ಅರಸೀಕೆರೆಯ ಬಾಣವರಕ್ಕೆ ಆಗಮಿಸಲಿದ್ದಾರೆ ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ವಕ್ತಾರ ದೇವರಾಜೇಗೌಡ ತಿಳಿಸಿದರು
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 10 ತಿಂಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದಂತೆ ನಡೆದಿದ್ದಾರೆ. ಬಾಣವರಕ್ಕೆ ಆಗಮಿಸಿ ತಾಲೂಕಿನ ಹಲವು ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಹಾಗೂ ಕ್ಷೇತ್ರದ ಶಾಸಕ ಹಾಗೂ ಗೃಹ ಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ ಸೇರಿದಂತೆ ಹಲವು ಸಚಿವರು ಮತ್ತು ಅಧಿಕಾರಿಗಳು ಆಗಮಿಸಲಿದ್ದಾರೆ ಎಂದರು.
ಇದಾದ ನಂತರ ಮಾ.1ರಂದು ಹಾಸನ ನಗರದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬೃಹತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಇಲ್ಲಿಯೂ ಕೂಡ ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗೆ ಶಂಕು ಸ್ಥಾಪನೆ ಮತ್ತು ಉದ್ಘಾಟನೆ ಮಾಡಲಿದ್ದಾರೆ.ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಆಗಬೇಕಾಗಿರುವ ಅಭಿವೃದ್ಧಿ ಕೆಲಸ ಬಗ್ಗೆ ಸಿಎಂ ಗಮನಕ್ಕೆ ತರಲಾಗುವುದು ಎಂದು ಹೇಳಿದರು
ಕೇಂದ್ರ ಸರ್ಕಾರ ರಾಜ್ಯದಲ್ಲಿ ಸ್ಥಾಪನೆಗೊಂಡಿದಂತಹ ಕೃಷಿ ಹವಮಾನ ಘಟಕವನ್ನು ರದ್ದು ಮಾಡಿರುವುದು ನಿಜಕ್ಕೂ ಖಂಡನೀಯ, ಈ ಘಟಕದಿಂದ ರೈತರಿಗೆ, ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಸಾಕಷ್ಟು ಅನುಕೂಲವಾಗುತ್ತಿತ್ತು ಮತ್ತು ಅವಘಡಗಳನ್ನ ತಪ್ಪಿಸಲು ಸಾಧ್ಯವಾಗುತ್ತಿತ್ತು ಇದನ್ನ ರದ್ದುಗೊಳಿಸಿರುವುದು ರೈತರಿಗೆ ಮಾಡಿದ ಅನ್ಯಾಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಸುಜಿತ್, ಶಿವಕುಮಾರ್, ಚಂದ್ರಶೇಖರ್,ಅಲ್ಲೀಂ ಮಹಮ್ಮದ್ ಹಾಗೂ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net