

ನೆಲಮಂಗಲ: ಪಕ್ಷಾತೀತವಾಗಿ ಪ್ರತಿಯೊಬ್ಬ ಜನಪ್ರತಿನಿಧಿ ಅಭಿವೃದ್ಧಿ ಕೆಲಸಕ್ಕೆ ಮುಂದಾದಾಗ ಮಾತ್ರ ಗ್ರಾಮೀಣ ಪ್ರದೇಶಗಳ ಪ್ರಗತಿ ಸಾಧ್ಯ ಎಂದು ಶಾಸಕ ಎಸ್.ಆರ್.ವಿಶ್ವನಾಥ್ ಅಭಿಪ್ರಾಯಪಟ್ಟರು.
ಬೆಂಗಳೂರು ಉತ್ತರ ತಾಲೂಕಿನ ಕಡಬಗೆರೆಯಲ್ಲಿ ಮಂಗಳವಾರ ಆಯೋಜಿಸಿದ್ದ ನೂತನ ಗ್ರಾಪಂ ಕಟ್ಟಡಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಗ್ರಾಪಂ ಕಟ್ಟಡದ ಜತೆಗೆ ಹಲವು ವರ್ಷಗಳಿಂದಲೂ ಹದೆಗೆಟ್ಟಿದ್ದ ಗ್ರಾಮದ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಗ್ರಾಮದ ಜನರು ಈ ಜನಪ್ರತಿನಿಧಿಗಳ ಜತೆ ಸಂಪರ್ಕ ಇರಿಸಿಕೊಂಡು ಗ್ರಾಮದ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹರಿಸಿಕೊಳ್ಳಬೇಕು ಎಂದರು.
ವಿವಿಧ ಕಾಮಗಾರಿಗೆ ಚಾಲನೆ: ದಾಸನಪುರ ಹೋಬಳಿಯ ಚಿಕ್ಕಗೊಲ್ಲರಹಟ್ಟಿಯಲ್ಲಿ 50 ಲಕ್ಷ ರೂ.ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ, 40 ಲಕ್ಷ ರೂ. ವೆಚ್ಚದಲ್ಲಿ ಕಿತ್ತನಹಳ್ಳಿ ಗ್ರಾಪಂ ನಿರ್ಮಾಣ ಹಾಗೂ 20 ಲಕ್ಷದಲ್ಲಿ ಚಾಮುಂಡಿ ನಗರದಲ್ಲಿ ಕಾಂಕ್ರೀಟ್ ರಸ್ತೆ ಅಭಿವೃದ್ಧಿ, 40 ಲಕ್ಷದಲ್ಲಿ ನಗರೂರಿನ ಟೀಚರ್ಸ್ ಕಾಲನಿಯಲ್ಲಿ ರಸ್ತೆ ಅಭಿವೃದ್ಧಿ, ಹೆಗ್ಗಡದೇವನದಲ್ಲಿ 50 ಲಕ್ಷ, ಬಿಳಿಜಾಜಿಯಲ್ಲಿ 20 ಲಕ್ಷ ರೂ. ವೆಚ್ಚದಲ್ಲಿ ಅಂಬೇಡ್ಕರ್ ಭವನ ನಿರ್ಮಾಣ, ಹೆಸರಘಟ್ಟದಲ್ಲಿ 15 ಲಕ್ಷ ರೂ. ವೆಚ್ಚದ ರಸ್ತೆ ಅಭಿವೃದ್ಧಿ, ದಾಸೇನಹಳ್ಳಿಯಲ್ಲಿ 10 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಲಾಗಿದೆ ಎಂದು ವಿಶ್ವನಾಥ್ ಮಾಹಿತಿ ನೀಡಿದರು.
ಕಿತ್ತನಹಳ್ಳಿ ಗ್ರಾಪಂ ಅಧ್ಯಕ್ಷ ನರಸೇಗೌಡ, ಬಿಜೆಪಿ ಬೆಂಗಳೂರು ನಗರ ಜಿಲ್ಲಾ ಉಪಾಧ್ಯಕ್ಷ ಜಿ.ಎನ್.ನಾರಾಯಣ್, ಪ್ರಧಾನ ಕಾರ್ಯದರ್ಶಿ ಸೋಮಶೇಖರ್ ಮತ್ತಿತರರು ಉಪಸ್ಥಿತರಿದ್ದರು.
ತೀರ್ಪು ಸ್ವಾಗತಾರ್ಹ: ಹಿಜಾಬ್ ಕುರಿತು ಹೈಕೋರ್ಟ್ ತೀರ್ಪು ಸ್ವಾಗತಾರ್ಹ. ಶಾಲಾ ಕಾಲೇಜಿನಲ್ಲಿ ವಸ್ತ್ರಸಂಹಿತೆ ಜತೆಗೆ ಕೋರ್ಟ್ ನೀಡಿರುವ ಆದೇಶವನ್ನು ಪ್ರತಿಯೊಬ್ಬರೂ ಪಾಲನೆ ಮಾಡಬೇಕಿದೆ. ಮುಂದಿನ ದಿನಗಳಲ್ಲಿ ಎಲ್ಲರೂ ಶಾಲಾ-ಕಾಲೇಜಿನಲ್ಲಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದು ಶಾಸಕ ಎಸ್.ಆರ್.ವಿಶ್ವನಾಥ್ ತಿಳಿಸಿದರು.