ಅಭಿವೃದ್ಧಿಗೆ ಮೊದಲ ಆದ್ಯತೆ

IMG-20230526-WA0210
Published on

ಆಲೂರು: ಅಭಿವೃದ್ಧಿ ಕೆಲಸಗಳಿಗೆ ಮೊದಲ ಆದ್ಯತೆ ನೀಡುವೆ ಎಂದು ಆಲೂರು-ಸಕಲೇಶಪುರ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ಹೇಳಿದರು.


ತಾಲೂಕಿನ ಕಾರ್ಜುವಳ್ಳಿ ಗ್ರಾಮದ ಶ್ರೀಮದ್ ರಂಭಾಪುರಿ ವೀರಸಿಂಹಾಸನ ಶಾಖಾ ಸಂಸ್ಥಾನ ಹಿರೇಮಠದ ಪೀಠಾಧ್ಯಕ್ಷ ಶ್ರೀ ಸದಾಶಿವ ಶಿವಾಚಾರ್ಯ ಸ್ವಾಮೀಜಿ ಭೇಟಿ ಮಾಡಿ ಆಶೀರ್ವಾದ ಪಡೆದ ನಂತರ ಅವರು ಮಾತನಾಡಿದರು.
ಆಲೂರು, ಸಕಲೇಶಪುರ ಮತ್ತು ಕಟ್ಟಾಯ ಭಾಗದ ಅಭಿವೃದ್ಧಿಗಾಗಿ ಕೈಗೊಳ್ಳಬೇಕಾದ ಕಾಮಗಾರಿ ಬಗ್ಗೆ ಪ್ರಸ್ತಾಪಿಸಿದ ಅವರು, ಶ್ರೀಗಳ ಮಾರ್ಗದರ್ಶನ, ಸಲಹೆ ಪಡೆಯುವುದಾಗಿ ಹೇಳಿದರು.


ಸ್ವಾತಂತ್ರ್ಯ ಪೂರ್ವದಿಂದಲೂ ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ ಅಭಿವೃದ್ಧಿಗೆ ಮಠ ಮಾನ್ಯಗಳು ಸಾಕಷ್ಟು ಕೊಡುಗೆ ನೀಡಿವೆ. ಸನಾತನ ಧರ್ಮದ ತತ್ವಾದರ್ಶಗಳ ನೆಲೆಗಟ್ಟಿನಲ್ಲಿ ವೀರಶೈವ ಮಠಗಳು ಇಂದಿಗೂ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ದೊಡ್ಡ ಕೊಡುಗೆ ನೀಡುತ್ತಿವೆ. ಸರ್ವ ಜನಾಂಗದವರ ಪರಸ್ಪರ ಪ್ರೀತಿ, ವಿಶ್ವಾಸದಿಂದ ಸುಭದ್ರ ಸಮಾಜದ ನಿರ್ಮಾಣಕ್ಕೆ ವೈವಿಧ್ಯಮಯ ಕಾರ್ಯಕ್ರಮಗಳನ್ನು ಸಂಘಟನಾತ್ಮಕ ಮಾಡುತ್ತಿವೆ. ಹಾಗಾಗಿ ಮಠ, ಪೀಠಗಳ ಆಶೀರ್ವಾದ, ಸಲಹೆ ಪಡೆದು ಕ್ಷೇತ್ರದ ಅಭಿವೃದ್ಧಿ ಮಾಡುವೆ ಎಂದರು.


ಶಾಸಕರಿಂದ ಗೌರವ ಸ್ವೀಕರಿಸಿ ಆಶೀರ್ವಚನ ನೀಡಿದ ಶ್ರೀಗಳು, ಕ್ಷೇತ್ರದ ಅಭಿವೃದ್ಧಿಯಾಗಲಿ ಎಂದು ಹಾರೈಸಿದರು. ಆಲೂರು-ಸಕಲೇಶಪುರ ತಾಲೂಕಿನ ಪಕ್ಷದ ಮುಖಂಡರು, ಕಾರ್ಯಕರ್ತರು ಇದ್ದರು. ನಂತರ ಸಂಕ್ಲಾಪುರ ಮಠಕ್ಕೆ ಶುಕ್ರವಾರ ಭೇಟಿ ನೀಡಿದ ಶಾಸಕ ಸಿಮೆಂಟ್ ಮಂಜು, ಶ್ರೀ ಧರ್ಮರಾಜೇಂದ್ರ ಸ್ವಾಮೀಜಿ ಆಶೀರ್ವಾದ ಪಡೆದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net