

ಮೈಸೂರು: ಕೇಂದ್ರ ಗೃಹ ಸಚಿವ ಅಮಿತ್ ಷಾ ಮೈಸೂರು ಭೇಟಿ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಭಾನುವಾರ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ವೃತ್ತದ ಬಳಿ ಪ್ರತಿಭಟನೆ ನಡೆಸಿದರು.
ತಲೆಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಅಮಿತ್ ಷಾ ವಿರುದ್ಧದ ಪೋಸ್ಟರ್‌ಗಳನ್ನು ಗೋಡೆಗಳಿಗೆ ಅಂಟಿಸುವ ಮೂಲಕ ಪ್ರತಿಭಟನೆ ನಡೆಸಲಾಯಿತು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ನಡೆಸುತ್ತಿದೆ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರ ಅನುದಾನ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ. ರಾಜ್ಯ ಬರಗಾಲದಿಂದ ನಲುಗುತ್ತಿದ್ದರೂ ಕೇಂದ್ರ ಸರ್ಕಾರ ನಯಾಪೈಸೆ ಅನುದಾನ ನೀಡಿಲ್ಲ. ರಾಜ್ಯದಲ್ಲಿ ಬರದಿಂದ 35,162 ಕೋಟಿ ರೂ. ನಷ್ಟವಾಗಿದ್ದು, ಎನ್‌ಡಿಆರ್‌ಎಫ್ ಮಾರ್ಗಸೂಚಿ ಪ್ರಕಾರ ರಾಜ್ಯದ 18,171 ಕೋಟಿ ರೂ. ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರ ಕೋರಿಕೊಂಡರೂ ಕೇಂದ್ರ ಸರ್ಕಾರ ಇದುವರೆಗೆ ಅನುದಾನ ಬಿಡುಗಡೆ ಮಾಡಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಅಮಿತ್ ಷಾ ರಾಜ್ಯಕ್ಕೆ ಬರಿಗೈಯಲ್ಲಿ ಆಗಮಿಸುತ್ತಿರುವುದು ಖಂಡನೀಯ ಎಂದು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಗರಾಧ್ಯಕ್ಷ ಆರ್. ಮೂರ್ತಿ, ಜಿಲ್ಲಾಧ್ಯಕ್ಷ ಡಾ.ಬಿ.ಜೆ. ವಿಜಯ ಕುಮಾರ್, ಕಾಂಗ್ರೆಸ್ ಮಹಿಳಾ ಘಟಕದ ನಗರಾಧ್ಯಕ್ಷೆ ಪುಷ್ಪಲತಾ ಚಿಕ್ಕಣ್ಣ ಹಾಗೂ ಇತರರು ಪಾಲ್ಗೊಂಡಿದ್ದರು.