ಅರಕಲಗೂಡಿನಲ್ಲಿ ಮಾರ್ಚ್ 13ರಿಂದ 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

ಅರಕಲಗೂಡಿನಲ್ಲಿ ಮಾರ್ಚ್ 13ರಿಂದ 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ
Published on

ಹಾಸನ:ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಆಶ್ರಯದಲ್ಲಿ ಅರಕಲಗೂಡು ಪಟ್ಟಣದ ಕ್ರೀಡಾಂಗಣದಲ್ಲಿ ಮಾರ್ಚ್ 13 ಮತ್ತು 14 ರಂದು 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ ಆಗಿರುವ ಗಾನಕಲಾ ಭೂಷಣ ಡಾ. ಆರ್.ಕೆ. ಪದ್ಮನಾಭ ಅವರಿಗೆ ಪರಿಷತ್ ವತಿಯಿಂದ ಈಗಾಗಲೇ ಅಧಿಕೃತ ಆಹ್ವಾನ ನೀಡಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಡಾ. ಎಚ್.ಎಲ್. ಮಲ್ಲೇಶಗೌಡ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಸಮ್ಮೇಳನದ ಸಿದ್ಧತೆಗಳು ನಡೆಯುತ್ತಿವೆ. ಮೊದಲ ದಿನ ಫೆ.13 ರಂದು ಬೆಳಗ್ಗೆ ರಾಷ್ಟ್ರಧ್ವಜಾರೋಹಣದ ಮೂಲಕ ಸಮ್ಮೇಲನಕ್ಕೆ ಚಾಲನೆ ದೊರೆಯಲಿದೆ. ಪರಿಷತ್ತಿನ ಧ್ವಜವನ್ನು ಜಿಲ್ಲಾ ಕಸಾಪ ಅಧ್ಯಕ್ಷ ಮಲ್ಲೇಶಗೌಡ ಮತ್ತು ನಾಡಧ್ವಜವನ್ನು ಶಾಸಕ ಎ.ಟಿ. ರಾಮಸ್ವಾಮಿ ಆರೋಹಣ ಮಾಡುವರು. ಜಿಪಂ ಸಿಇಒ ಬಿ.ಆರ್. ಪೂರ್ಣಿಮಾ ಮತ್ತು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹರಿರಾಮ್ ಶಂಕರ್ ಅವರು ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ಚಾಲನೆ ನೀಡುವರು ಎಂದು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಸಮ್ಮೇಳನದ ವೇದಿಕೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಷಿ, ವಾಗ್ಮಿ ಹಿರೇಮಗಳೂರು ಕಣ್ಣನ್, ಸಾಹಿತಿ ನಾಗತಿಹಳ್ಳಿ ಚಂದ್ರಶೇಖರ್, ಸಂಸದ ಪ್ರಜ್ವಲ್ ರೇವಣ್ಣ, ಮಾಜಿ ಸಚಿವ ಎ. ಮಂಜು, ಜಾನಪದ ವಿದ್ವಾಂಸ ಡಾ. ಹಂಪನಹಳ್ಳಿ ತಿಮ್ಮೇಗೌಡ ಮತ್ತಿತರ ಗಣ್ಯರು ಭಾಗವಹಿಸುವರು ಎಂದು ವಿವರ ನೀಡಿದರು.

ಎರಡು ದಿನಗಳ ಕಾಲ ವಿವಿಧ ವಿಚಾರಗಳ ಗೋಷ್ಠಿಗಳು ಮತ್ತು ಕವಿಗೋಷ್ಠಿಗಳು ನಡೆಯಲಿವೆ. ಸಂಜೆ ವೇಳೆ ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರದರ್ಶನ ಇರುತ್ತದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮ್ಮೇಳನ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಬಿ.ಆರ್. ಬೊಮ್ಮೇಗೌಡ, ಕೋಶಾಧ್ಯಕ್ಷ ಬಿ.ಎನ್. ಜಯರಾಮ್, ಅನಿಲ್ ಗೌಡ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net