ಅರಣ್ಯ ಭೂಮಿ ಸಾಗುವಳಿದಾರರ ಸಮಸ್ಯೆ ಕೇಳೋರಿಲ್ಲ: ತೀ.ನ.ಶ್ರೀನಿವಾಸ್ ಕಿಡಿ

SGR WEB
Published on

ಸಾಗರ: ಪಾರಂಪರಿಕ ಅರಣ್ಯ ಭೂಮಿ ಸಾಗುವಳಿದಾರರ ಸಮಸ್ಯೆ ಪರಿಹರಿಸಲು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ವಿಫಲರಾಗಿದ್ದು, ಅವರು ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಮಲೆನಾಡು ಭೂ ಹೋರಾಟ ವೇದಿಕೆ ಜಿಲ್ಲಾ ಸಂಚಾಲಕ ತೀ.ನ.ಶ್ರೀನಿವಾಸ್ ಆಗ್ರಹಿಸಿದರು.

ಜಿಲ್ಲೆಯಲ್ಲಿ 90 ಸಾವಿರಕ್ಕೂ ಹೆಚ್ಚು ಅರಣ್ಯಭೂಮಿ ಸಾಗುವಳಿದಾರರು ಅರ್ಜಿ ಸಲ್ಲಿಸಿ ಹಕ್ಕುಪತ್ರಕ್ಕಾಗಿ ಕಾಯುತ್ತಿದ್ದಾರೆ. ಇಷ್ಟು ವರ್ಷಗಳಾದರೂ ಅರಣ್ಯ ಭೂಮಿ ಸಾಗುವಳಿದಾರರ ಸಮಸ್ಯೆ ಬಗೆಹರಿಸಲು ವಿಫಲವಾಗಿರುವ ಬಿ.ವೈ.ರಾಘವೇಂದ್ರ ಅವರಿಗೆ ಆ ಸ್ಥಾನದಲ್ಲಿ ಮುಂದುವರಿಯಲು ಅರ್ಹತೆ ಇಲ್ಲ. ಈವರೆಗೂ ಪಾರಂಪರಿಕ ಅರಣ್ಯ ಹಕ್ಕು ಸಾಗುವಳಿದಾರರ ಬಗ್ಗೆ ಪರಿಣಾಮಕಾರಿ ಕ್ರಮಗಳನ್ನು ಕೇಂದ್ರ ಸರ್ಕಾರ ಕೈಗೊಂಡಿಲ್ಲ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.

ಬಿ.ಎಸ್.ಯಡಿಯೂರಪ್ಪ ಅವರು ಅರಣ್ಯಭೂಮಿ ಸಮಸ್ಯೆ ಪರಿಹರಿಸುವ ಭರವಸೆ ನೀಡಿ ಮತ ಪಡೆದಿದ್ದರು. ಆದರೆ ಅರಣ್ಯವಾಸಿಗಳ ಸಮಸ್ಯೆಗೆ ತಾರ್ಕಿಕ ಅಂತ್ಯ ಕಂಡುಕೊಳ್ಳಲು ಸಾಧ್ಯವಾಗಲಿಲ್ಲ. ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿಯೂ ಅರಣ್ಯವಾಸಿಗಳ ಸಮಸ್ಯೆ ಬಗೆಹರಿಸಲು ಗಂಭೀರ ಚಿಂತನೆ ಮಾಡಲಿಲ್ಲ ಎಂದರು.

ಎಂಎಸ್‌ಐಎಲ್ ಅಧ್ಯಕ್ಷರಾಗಿ ಮಾತ್ರ ಕಾರ್ಯನಿರ್ವಹಿಸುತ್ತಿರುವ ಹರತಾಳು ಹಾಲಪ್ಪ ಅವರನ್ನು ನೋಡಿದರೆ ಕ್ಷೇತ್ರದ ಶಾಸಕರೂ ಹೌದಾ ಎನ್ನುವ ಅನುಮಾನ ಬರುತ್ತಿದೆ. ತೀ.ನ.ಶ್ರೀನಿವಾಸ್‌ಗೆ ಭೂಮಿ ಇಲ್ಲ, ಭೂಹೀನರ ಬಗ್ಗೆ ಮಾತನಾಡುವ ಹಕ್ಕೂ ಇಲ್ಲ ಎಂದು ವ್ಯಾಖ್ಯಾನಿಸುವ ಶಾಸಕರಿಗೆ ತಮ್ಮ ಕ್ಷೇತ್ರ ವ್ಯಾಪ್ತಿಯ ಆನಂದಪುರ ಹೋಬಳಿಯ ಸಾವಿರಾರು ಅರಣ್ಯವಾಸಿಗಳಿಗೆ ನೋಟಿಸ್ ನೀಡಿ ಒಕ್ಕಲೆಬ್ಬಿಸುವ ಪ್ರಯತ್ನ ಮಾಡುತ್ತಿರುವುದು ಅರಿವಿಗೆ ಬಂದಂತೆ ಕಾಣುತ್ತಿಲ್ಲ ಎಂದು ಕಿಡಿಕಾರಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net