ಅರಣ್ಯವಾಸಿಗಳ ಹಕ್ಕುಪತ್ರ ಸಮಸ್ಯೆಗೆ ಶೀಘ್ರವೇ ಪರಿಹಾರ

khandre
Published on

ಮೈಸೂರು: ಅರಣ್ಯ ಮತ್ತು ಕಂದಾಯ ಭೂಮಿಯ ಜಂಟಿ ಸಮೀಕ್ಷೆ ನಡೆಸುವ ಮೂಲಕ ಕಾನೂನು ವ್ಯಾಪ್ತಿಯಲ್ಲಿ ಹಕ್ಕುಪತ್ರದ ಸಮಸ್ಯೆಯನ್ನು ಪರಿಹರಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದರು.


ಎಚ್.ಡಿ.ಕೋಟೆಯ ಕಬಿನಿ ಜಂಗಲ್ ಲಾಡ್ಜ್‌ನಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಈ ಸಮಸ್ಯೆ ಕುರಿತು ಕಂದಾಯ ಸಚಿವರೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದರು.


ಡಿ.ಬಿ.ಕುಪ್ಪೆ ವ್ಯಾಪ್ತಿಯಲ್ಲಿ 12 ಕುಟುಂಬಗಳು ಅರಣ್ಯ ವಾಸಿಗಳೋ ಅಲ್ಲವೋ ಎಂಬ ಬಗ್ಗೆ ಇರುವ ಗೊಂದಲದ ಕುರಿತಂತೆ ಪರಿಶೀಲನೆ ಮಾಡಲಾಗುವುದು. ಬಳಿಕ ಸೂಕ್ತ ಪರಿಹಾರ ಒದಗಿಸಲು ಶೀಘ್ರವೇ ಬೆಂಗಳೂರಿನಲ್ಲಿ ರಾಜ್ಯಮಟ್ಟದ ಸಭೆ ನಡೆಸಲಾಗುವುದು. ಇಂತಹ ಸಮಸ್ಯೆ ಇರುವ ರಾಜ್ಯದ ಎಲ್ಲ ಹಾಡಿ, ಮುಳುಗಡೆ ಪ್ರದೇಶದ ಸಂತ್ರಸ್ತರ ಜಮೀನುಗಳ ಕುರಿತಂತೆ ಆಲೋಚಿಸುವುದಾಗಿ ಸಚಿವರು ತಿಳಿಸಿದರು.


ಶಾಸಕ ಅನಿಲ್ ಚಿಕ್ಕಮಾದು ಮಾತನಾಡಿ, ಎಚ್.ಡಿ.ಕೋಟೆ ಕ್ಷೇತ್ರದಲ್ಲಿ ಆನೆಗಳ ಹಾವಳಿ ಇದ್ದು, ಕನಿಷ್ಠ 72 ಕಿ.ಮೀ. ರೈಲ್ವೆ ಬ್ಯಾರಿಕೇಡ್ ನಿರ್ಮಿಸುವಂತೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಸಚಿವರು, ಒಂದೇ ವರ್ಷದಲ್ಲಿ 72 ಕಿ.ಮೀ. ಒಂದೇ ಭಾಗದಲ್ಲಿ ನಿರ್ಮಿಸಲು ಸಾಧ್ಯವಿಲ್ಲ. ಆದರೆ, ಆನೆಗಳ ಹಾವಳಿ ಹೆಚ್ಚಿರುವ ಪ್ರದೇಶಗಳಲ್ಲಿ ಆದ್ಯತೆಯ ಮೇರೆಗೆ ರೈಲ್ವೆ ಬ್ಯಾರಿಕೇಡ್ ನಿರ್ಮಿಸಲು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸುವುದಾಗಿ ತಿಳಿಸಿದರು.


ಕಬಿನಿ ವ್ಯಾಪ್ತಿಯ ಅಂತರಸಂತೆ ಅರಣ್ಯ ಪ್ರದೇಶದಲ್ಲಿ ಸೌರಬೇಲಿ ಹೇಗೆ ಕಾರ್ಯ ನಿರ್ವಹಿಸುತ್ತದೆ ಎಂಬುದನ್ನು ಪರಿಶೀಲಿಸಿದ್ದು, ಅರಣ್ಯದಲ್ಲೇ ವಾಸಿಸುವ ಆದಿವಾಸಿಗಳ ಸಮಸ್ಯೆಯನ್ನು ಆಲಿಸಲಾಗಿದೆ ಎಂದರು.


ಅರಣ್ಯಹಕ್ಕು ಕಾಯ್ದೆ ಅಡಿಯಲ್ಲಿ ಆದಿವಾಸಿಗಳಿಗೆ ಸಲ್ಲಬೇಕಾದ ಸೌಲಭ್ಯಗಳನ್ನು ನಿಯಮಾನುಸಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು.


ಇದೇ ಸಂದರ್ಭದಲ್ಲಿ ಅರಣ್ಯ ಭೂಮಿಗೆ ಪರ್ಯಾಯವಾಗಿ ಹಕ್ಕುಪತ್ರ ವಿತರಣೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಬಂದ ಅಹವಾಲುಗಳನ್ನು ಪರಿಶೀಲಿಸಿದ ಸಚಿವರು, 3 ಎಕರೆಗಿಂತ ಕಡಿಮೆ ಪ್ರದೇಶದಲ್ಲಿ 1980ಕ್ಕಿಂತ ಮೊದಲು ಉಳಿಮೆ ಮಾಡುತ್ತಿರುವ ಮತ್ತು ಮನೆ ಕಟ್ಟಿಕೊಂಡು ಮೂರು ತಲೆಮಾರಿನಿಂದ ವಾಸಿಸುತ್ತಿರುವರಿಗೆ ಮಾತ್ರ ಪರಿಹಾರ ಒದಗಿಸುವ ಸಂಬಂಧ ನಿಗದಿತ ಅವಧಿಯಲ್ಲಿ ಅರ್ಜಿ ಸಲ್ಲಿಸಿದ್ದರೆ ಪರಿಶೀಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಮಾಜಿ ಎಂಎಲ್ಸಿ ಸಂದೇಶ್ ನಾಗರಾಜ್ ಅವರು ಅರಣ್ಯಹಕ್ಕು ಕಾಯ್ದೆಯ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ವಿವರಿಸಿದರು. ಹಿರಿಯ ಐಎಸ್‌ಎಫ್ ಅಧಿಕಾರಿಗಳಾದ ರಂಗರಾವ್, ಕುಮಾರ್ ಪುಷ್ಕರ್, ರಮೇಶ್‌ಕುಮಾರ್, ಹರ್ಷಕುಮಾರ್ ಸೇರಿದಂತೆ ಇನ್ನಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net