

ರಾಯಚೂರು: ರಾಜ್ಯದಲ್ಲಿ ಭೂ ಸುಧಾರಣೆ ಕಾನೂನುಗಳನ್ನು ಜಾರಿಗೆ ತರುವ ಮೂಲಕ ಉಳುವವನೇ ಭೂಮಿಯ ಒಡೆಯ ಎಂಬ ಕಾಯ್ದೆ ಜಾರಿಗೆ ತಂದ ಮಾಜಿ ಸಿಎಂ ದೇವರಾಜ ಅರಸು ಬಡವರ ಪಾಲಿನ ಆಶಾಕಿರಣವಾಗಿದ್ದಾರೆ ಎಂದು ನಗರ ಶಾಸಕ ಡಾ.ಶಿವರಾಜ ಪಾಟೀಲ್ ಹೇಳಿದರು.
ಸ್ಥಳೀಯ ಕನ್ನಡ ಭವನದಲ್ಲಿ ಜಿಲ್ಲಾಡಳಿತದಿಂದ ಭಾನುವಾರ ಏರ್ಪಡಿಸಿದ್ದ ಮಾಜಿ ಸಿಎಂ ಡಿ.ದೇವರಾಜ ಅರಸು ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಹಿಂದುಳಿದ ವರ್ಗಗಳನ್ನು ಬಲಿಷ್ಠವಾಗಿಸುವಲ್ಲಿ ಹಾಗೂ ಹಿಂದುಳಿದ ವರ್ಗಗಳಿಗೆ ಅರಸು ಧ್ವನಿಯಾಗಿದ್ದರು ಎಂದರು.
ಜಗತ್ತಿನಲ್ಲಿ ಪ್ರತಿಯೊಬ್ಬರು ಸಮಾನರಾಗಿ ಬದುಕು ನಡೆಸಬೇಕು ಎನ್ನುವ ನಿಟ್ಟಿನಲ್ಲಿ ಬಡವರ ಪರವಾದ ಕಾನೂನುಗಳನ್ನು ಜಾರಿಗೆ ತಂದ ಅರಸು, ಹಿಂದೆ ನಡೆಸಲಾಗುತ್ತಿದ್ದ ಜಾಡುಮಾಲಿ ಪದ್ಧತಿಯನ್ನು ನಿಲ್ಲಿಸಿ ಪೌರ ಕಾರ್ಮಿಕರನ್ನು ನೇಮಕ ಮಾಡಿದ್ದರು.
ನಗರದಲ್ಲಿ ಹಿಂದುಳಿದ ವರ್ಗದವರಿಗೆ ಸಮುದಾಯ ಭವನವಿಲ್ಲ. ಭವನ ನಿರ್ಮಾಣಕ್ಕೆ 25 ಲಕ್ಷ ರೂ. ಅನುದಾನ ನೀಡಲಾಗುವುದು. ಜತೆಗೆ ಸರ್ಕಾರದಿಂದ ಇನ್ನೂ ಹೆಚ್ಚಿನ ಅನುದಾನ ಬಿಡುಗಡೆಗೊಳಿಸಲಾಗುವುದು. ನಗರದಲ್ಲಿ ಅರಸು ವೃತ್ತ ನಿರ್ಮಾಣಕ್ಕೆ 10 ಲಕ್ಷ ರೂ. ಅನುದಾನ ನೀಡುವುದಾಗಿ ಡಾ.ಶಿವರಾಜ ಪಾಟೀಲ್ ಭರವಸೆ ನೀಡಿದರು.
ಹಗರಿಬೊಮ್ಮನಹಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯ ಡಾ.ಕೆ.ವೆಂಕಟೇಶ ಮಾತನಾಡಿ, ಎಂಟು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದ ದೇವರಾಜ ಅರಸು ದೂರದೃಷ್ಟಿ ಹೊಂದಿದ್ದ ನಾಯಕರಾಗಿದ್ದರು. ಅವರ ತತ್ತ್ವ ಸಿದ್ಧಾಂತಗಳನ್ನು ನೆನಪಿನಲ್ಲಿಟ್ಟುಕೊಂಡು ಇಂದಿನ ಪೀಳಿಗೆ ಮುಂದುವರಿಯಬೇಕು ಎಂದು ಸಲಹೆ ನೀಡಿದರು.
ಇದಕ್ಕೂ ಮುಂಚೆ ಅಂಬೇಡ್ಕರ್ ವೃತ್ತದಿಂದ ಕನ್ನಡ ಭವನದವರೆಗೆ ವಾದ್ಯಮೇಳಗಳೊಂದಿಗೆ ದೇವರಾಜ ಅರಸು ಭಾವಚಿತ್ರ ಮೆರವಣಿಗೆ ನಡೆಸಲಾಯಿತು. ವಿವಿಧ ಕ್ಷೇತ್ರದಲ್ಲಿ ಗಣನೀಯ ಸಾಧನೆಗೈದವರನ್ನು ಸನ್ಮಾನಿಸಿ, ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಕಾರಿ ಡಾ.ಕೆ.ಆರ್.ದುರಗೇಶ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಕಾರಿ ಡಾ.ಬಿ.ವೈ.ವಾಲ್ಮೀಕಿ, ಮುಖಂಡರಾದ ಕೆ.ಶಾಂತಪ್ಪ, ವೈ.ಶ್ರೀಕಾಂತರಾವ್, ಸುರೇಖಾ, ವಿ.ಲಕ್ಷ್ಮಿರೆಡ್ಡಿ ಉಪಸ್ಥಿತರಿದ್ದರು.