

ಚಿತ್ರದುರ್ಗ: ಹಿಂದುಳಿದ ವರ್ಗಗಳ ಆಶಾಕಿರಣ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 109ನೇ ಜನ್ಮದಿನವನ್ನು ಜಿಲ್ಲಾ ಕೇಂದ್ರದಲ್ಲಿ ಅರ್ಥಪೂರ್ಣ ಹಾಗೂ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಅರಸು ಅವರ ದೂರದೃಷ್ಟಿ ಹಾಗೂ ಹಿಂದುಳಿದ ವರ್ಗಗಳ ಏಳ್ಗಿ ಬಗ್ಗೆ ಅವರಿಗಿದ್ದ ಬದ್ಧತೆಯನ್ನು ಸ್ಮರಿಸಬೇಕಿದೆ ಎಂದರು.
ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಬೇಕಿದೆ. ಅಂದು ಬೆಳಗ್ಗೆ 9ಕ್ಕೆ ನಗರದ ಹೊಳಲ್ಕೆರೆ ರಸ್ತೆಯ ನೀಲಕಂಠೇಶ್ವರ ದೇವಾಲಯದಿಂದ ತರಾಸು ರಂಗ ಮಂದಿರದವರೆಗೆ ಅರಸು ಭಾವಚಿತ್ರದ ಮೆರವಣಿಗೆ, ಕಲಾತಂಡಗಳೊಂದಿಗೆ ಅದ್ದೂರಿಯಾಗಿ ನಡೆಯಲಿದೆ. ರಂಗಮಂದಿರದಲ್ಲಿ ವೇದಿಕೆ ಕಾರ‌್ಯಕ್ರಮ ಇರುತ್ತದೆ ಎಂದು ತಿಳಿಸಿದರು.
ಅರಸು ಅವರ ಜೀವನ ಸಾಧನೆ, ವ್ಯಕ್ತಿತ್ವ, ಕೊಡುಗೆ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ, ಪ್ರತಿಭಾ ಪುರಸ್ಕಾರ ಹಾಗೂ ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಆಯೋಜಿಸಬೇಕು. ತಾಲೂಕು ಮಟ್ಟದಲ್ಲೂ ಜನ್ಮ ದಿನವನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದರು.
ಎಎಸ್‌ಪಿ ಎಸ್.ಜೆ.ಕುಮಾರಸ್ವಾಮಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಸುಬ್ರಾನಾಯ್ಕಾ, ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಮಹೇಂದ್ರಕುಮಾರ್, ಅಬಕಾರಿ ಅಧೀಕ್ಷಕ ವಿಶ್ವನಾಥ್ ಮತ್ತಿತರ ಅಧಿಕಾರಿಗಳು, ವಿವಿಧ ಸಮುದಾಯಗಳ ಮುಖಂಡರು ಇದ್ದರು.