

ರಾಣೆಬೆನ್ನೂರ: ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರು ರಾಜ್ಯಕ್ಕೆ ನೀಡಿದ ಆಡಳಿತ ಮಾದರಿಯಾಗಿದೆ. ಅವರ ತತ್ತಾ್ವದರ್ಶದಲ್ಲಿ ಎಲ್ಲರೂ ಮುನ್ನಡೆಯಬೇಕಿದೆ ಎಂದು ಶಾಸಕ ಅರುಣಕುಮಾರ ಪೂಜಾರ ಹೇಳಿದರು.
ತಾಲೂಕು ಆಡಳಿತ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಗರದ ತಾಪಂ ಸಭಾಭವನದಲ್ಲಿ ಗುರುವಾರ ಏರ್ಪಡಿಸಿದ್ದ ದಿ. ದೇವರಾಜ ಅರಸು ಅವರ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಅರಸು ಅವರು ಕೇವಲ ಒಂದು ವರ್ಗಕ್ಕೆ ಸೀಮಿತವಾಗದೆ ಹಿಂದುಳಿದ ಎಲ್ಲ ವರ್ಗಗಳ ಜನರ ಅಭಿವೃದ್ಧಿಗಾಗಿ ವಸತಿಯುತ ಶಾಲೆ ಸೇರಿ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದಾರೆ. ಅವರ ಯೋಜನೆಗಳು ಜನತೆಗೆ ಇಂದಿಗೂ ಉಪಯೋಗಕಾರಿಯಾಗಿವೆ. ಅವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ಎಲ್ಲರೂ ಮುನ್ನಡೆಯೋಣ ಎಂದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಿಸಲಾಯಿತು. ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಾಯಿತು. ತಾಪಂ ಅಧ್ಯಕ್ಷೆ ಗೀತಾ ಲಮಾಣಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಕಸ್ತೂರವ್ವ ಹೊನ್ನಾಳಿ, ಜಿಪಂ ಸದಸ್ಯೆ ಮಂಗಳಗೌರಿ ಪೂಜಾರ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚೋಳಪ್ಪ ಕಸವಾಳ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿಸ್ತರಣಾಧಿಕಾರಿ ವಿ.ಎಸ್. ಹಿರೇಮಠ, ನಗರಸಭೆ ಆಯುಕ್ತ ಡಾ. ಎನ್. ಮಹಾಂತೇಶ, ತಹಸೀಲ್ದಾರ್ ಬಸನಗೌಡ ಕೋಟೂರು, ತಾಪಂ ಇಒ ಎಸ್.ಎಂ. ಕಾಂಬಳೆ, ನೀಲಕಂಠಪ್ಪ ಕಸಗೂರ ಮತ್ತಿತರರಿದ್ದರು.