

ಬಾಗಲಕೋಟೆ: ಸಾಮಾಜಿಕ ನ್ಯಾಯದ ಹರಿಕಾರ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸುರವರ ಆದರ್ಶಗಳನ್ನು ಇಂದಿನ ಯುವ ಜನಾಂಗ ಪಾಲಿಸುವ ಅಗತ್ಯವಿದೆ ಎಂದು ಶಾಸಕ ಎಚ್.ವಾಯ್.ಮೇಟಿ ಹೇಳಿದರು.
ನವನಗರದ ಡಾ.ಬಿ.ಆರ್.ಅಂಬೇಡ್ಕರ ಭವನದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಡಿ.ದೇವರಾಜ ಅರಸುರವರ 108ನೇ ಜನ್ಮದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಪರಿಣಾಮಕಾರಿಯಾದ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಹೊಸ ಪೀಳಿಗೆಯ ಬಾಳಿನಲ್ಲಿ ಬೆಳಕನ್ನು ತರುವ ಜೊತೆಗೆ ಭೂಸುಧಾರಣಾ ಕಾಯ್ದೆ ಮೂಲಕ ರೈತರ ಬದುಕನ್ನು ಸುಧಾರಿಸಲು ನೆರವಾದರು ಎಂದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ ಜೀತಪದ್ಧತಿ ನಿರ್ಮೂಲನೆ, ಮಲ ಹೊರುವ ಪದ್ಧತಿ ನಿರ್ಮೂಲನೆ, ಭೂ ಒಡೆತನ, ಋಣಮುಕ್ತ ಸೇರಿದಂತೆ ಹಲವು ಕ್ರಾಂತಿಕಾರಕ ಸುಧಾರಣಾ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮೂಲಕ ಆಡಳಿತದಲ್ಲಿ ಬದಲಾವಣೆ ತರುವ ಕೆಲಸವನ್ನು ದೇವರಾಜ ಅರಸುರವರು ಮಾಡಿದ್ದಾರೆ ಎಂದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಕೆ.ಎಂ.ಜಾನಕಿ ಅವರು ನೋಂದವರಿಗೆ ಮಾತ್ರ ನೋವಿನ ಸಂಕಟ ಗೊತ್ತಾಗುತ್ತದೆ ಎಂಬುದು ವಾಡಿಕೆ ಮಾತು, ಅದಕ್ಕೆ ಅಪವಾದ ಎಂಬಂತೆ ಅರಸು ಮನೆತನದಲ್ಲಿ ಹುಟ್ಟಿ ಎಲ್ಲ ಸೌಲಭ್ಯಗಳು ಇದ್ದರೂ ಸಾಮಾನ್ಯ, ಕಟ್ಟಕಡೆಯ ವ್ಯಕ್ತಿಯ ನೋವಿಗೆ ಸ್ಪಂಧಿಸಿದ ನಾಯಕ ದೇವರಾಜ ಅರಸುವರು. ರಾಜಕೀಯ ಎಂದರೆ ಜಾತಿ, ಹಣ ಮೇಲುಗೈ ಸಾಧಿಸುತ್ತೆ ಅಂತ ಕೇಳುತ್ತೇವೆ. ಇವೆರಡು ಕೂಡಾ ಇಲ್ಲದ ಮನುಷ್ಯ ತನ್ನ ಸ್ವಂತ ಬಲದಿಂದ ರಾಜ್ಯದ ಮುಖ್ಯಮಂತ್ರಿಯಾಗಿ ಎಲ್ಲ ವರ್ಗದವರಿಗೂ ನ್ಯಾಯವನ್ನು ಒದಗಿಸಬಲ್ಲ ಶಕ್ತಿಯನ್ನು ಪಡೆದುಕೊಂಡು ಮುಖ್ಯಮಂತ್ರಿ ಹುದ್ದೆಯ ಘನತೆಯನ್ನು ಹೆಚ್ಚಿಸಿದ್ದಾರೆ ಎಂದರು.
ಅತಿಥಿ ಉಪನ್ಯಾಸಕರಾಗಿ ಆಗಮಿಸಿದ್ದ ಕಲಾದಗಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾದ್ಯಾಪಕ ಸಂಪತ್ ಲಮಾಣಿ ಮಾತನಾಡಿ ದೇವರಾಜ ಅರಸುರವರು ಹಲವು ಜನರ ಗುಣಗಳನ್ನು ಹೊಂದಿದವರು. ರಾಣಾ ಪ್ರತಾಪ ಸಿಂಗ್‍ರವರ ರಾಜರ ಗುಣ, ಮೆಕವಲ್ಲಿ ಚಿಂತಕರ ಗುಣ, ಕಾರ್ಲಮಾಕ್ಸ್‍ನ ಸಮತಾವಾದ, ಡಾ.ಬಿ.ಆರ್.ಅಂಬೇಡ್ಕರ ಹಾಗೂ ಬಸವಣ್ಣನವರ ಗುಣಗಳನ್ನು ಒಟ್ಟಾಗಿ ಹೊಂದಿದವರು ದೇವರಾಜ ಅರಸು ಎಂದರು.
ಈ ಸಂದರ್ಭದಲ್ಲಿ 2022-23ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಅಲ್ಲದೇ ದೇವರಾಜ ಅರಸುರವರ ಜನ್ಮ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಪ್ರಬಂಧ ಸ್ಪರ್ಧೆ, ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದ ಹಾಗೂ ವಿಶೇಷ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಜಿ.ಪಂ ಉಪಕಾರ್ಯದರ್ಶಿ ಎನ್.ವಾಯ್.ಬಸರಿಗಿಡದ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ನಂದಾ ಹಣಮರಟ್ಟಿ, ಅಲ್ಪಸಂಖ್ಯಾತರ ಇಲಾಖೆಯ ಜಿಲ್ಲಾ ಅಧಿಕಾರಿ ಶಿವಾನಂದ ಪಟ್ಟಣಶೆಟ್ಟಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಅನೀಲ ಭಗಟಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಮೇಶ ಚವ್ಹಾನ, ಕಚೇರಿಯ ವ್ಯವಸ್ಥಾಪಕ ಶಿವು ದರಗಾದ ಸೇರಿದಂತೆ ಇತರರು ಉಪಸ್ಥಿತರಿದ್ದರು. ಸಂಜೀವ ನಡುವಿನಮನಿ ಕಾರ್ಯಕ್ರಮ ನಿರೂಪಿಸಿದರು.
ಪ್ರಾರಂಭದಲ್ಲಿ ಜಿಲ್ಲಾಡಳಿತ ಭವನದ ಆವರಣದಲ್ಲಿ ಡಿ.ದೇವರಾಜ ಅರಸು ಅವರ ಭಾವಚಿತ್ರದ ಮೆರವಣಿಗೆಗೆ ಚಾಲನೆ ನೀಡಲಾಯಿತು.
ಮೆರವಣಿಗೆ ಜಿಲ್ಲಾಡಳಿತ ಭವನದಿಂದ ಪ್ರಾರಂಭವಾಗಿ ಬಸ್ ನಿಲ್ದಾಣದ ಮಾರ್ಗವಾಗಿ ಡಾ.ಬಿ.ಆರ್.ಅಂಬೇಡ್ಕರ ಭವನಕ್ಕೆ ಮುಕ್ತಾಯವಾಯಿತು. ಮೆರವಣಿಗೆಯಲ್ಲಿ ವಿವಿಧ ಜಾನಪದ ಕಲಾತಂಡಗಳು ಭಾಗವಹಿಸಿದ್ದವು.