

ಬಳ್ಳಾರಿ : ಜಿಲ್ಲೆಯಲ್ಲಿ ಜೂ. 21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಡಿಸಿ ಪ್ರಶಾಂತ ಕುಮಾರ ಮಿಶ್ರಾ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಪೂರ್ವಸಿದ್ದತಾ ಸಭೆಯಲ್ಲಿ ಮಾತನಾಡಿದರು. ಮಳೆಗಾಲ ಹಿನ್ನಲೆಯಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯುವ ಸ್ಥಳವನ್ನು ಅಂತಿಮಗೊಳಿಸಿ ನಂತರ ಪ್ರಕಟಿಸಲಾಗುವುದು. ಬೆಳಿಗ್ಗೆ 6.30 ಗಂಟೆಯಿಂದಲೇ ಯೋಗ, ವೇದಿಕೆ ಹಾಗೂ ಯೋಗಾಸನ ಕಾರ್ಯಕ್ರಮಗಳು ನಡೆಯಲಿವೆ ಹಾಗೂ ಹೆಚ್ಚಿನ ಜನ ಆಗಮಿಸುವಂತೆ ಪ್ರಚಾರ ಕೈಗೊಳ್ಳಬೇಕು. ಪತಂಜಲಿ ಯೋಗ ಕೇಂದ್ರ, ಆರ್ಟ ಆಫ್ ಲಿವಿಂಗ್ ಸೇರಿದಂತೆ ಯೋಗ ಕೇಂದ್ರಗಳು ಅಗತ್ಯವಾಗಿ ಸಹಕಾರ ನೀಡಬೇಕು ಎಂದರು. ಶಾಲಾ-ಕಾಲೇಜು ಹಾಗೂ ಹಾಸ್ಟೆಲ್ಗಳಲ್ಲಿರುವ ವಿದ್ಯಾರ್ಥಿಗಳು ಯೋಗಾಸನ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ಕ್ರಮವಹಿಸಲು ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಸಮಾಜಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಕ್ರೀಡಾ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಲಘು ಉಪಹಾರ ಮತ್ತು ನೀರಿನ ವ್ಯವಸ್ಥೆ, ಯೋಗಾಸನ ಮಾಡಲು ಗ್ರೀನ್ ಮ್ಯಾಟ್ ಮತ್ತು ವೇದಿಕೆ ಹಾಗೂ ಧ್ವನಿವರ್ಧಕ ವ್ಯವಸ್ಥೆ ಹಾಗೂ ಆವರಣದೊಳಗೆ ಸಂಪೂರ್ಣ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದರು. ಆರೋಗ್ಯ ಇಲಾಖೆಯಿಂದ ಅಗತ್ಯ ಚಿಕಿತ್ಸಾ ವ್ಯವಸ್ಥೆ ಸೇರಿದಂತೆ ಇನ್ನಿತರ ಮುನ್ನೆಚ್ಚರಿಕಾ ಕ್ರಮ ಮತ್ತು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಪೊಲೀಸ ಬಂದೋಬಸ್ತ ಒದಗಿಸಬೇಕು. ಒಟ್ಟಾರೆ ಕಾರ್ಯಕ್ರಮ ಶಿಸ್ತುಬದ್ಧವಾಗಿ ಯಾವುದೇ ಲೋಪ ಆಗದಂತೆ ನೋಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಆಯಾ ತಾಲೂಕುಗಳಲ್ಲಿಯೂ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಆಚರಿಸಬೇಕು. ಎಲ್ಲ ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು. ಪೂರ್ವಭಾವಿ ಯೋಗಜಾಥಾ ನಡೆಸಬೇಕು ಎಂದರು.