

ಚಿತ್ರದುರ್ಗ: ಅಲ್ಪಸಂಖ್ಯಾತರ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಅಭಿವೃದ್ಧಿಗೆ ಜಾರಿಗೊಳಿಸಿರುವ ಪ್ರಧಾನಮಂತ್ರಿ ಹೊಸ 15 ಅಂಶಗಳ ಕಾರ್ಯಕ್ರಮಗಳು ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಯೋಜನೆಗಳ ಕುರಿತು ಹೆಚ್ಚಿನ ಅರಿವು ಮೂಡಿಸಿ, ಸಮರ್ಪಕ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಡಿಸಿ ಕಚೇರಿಯಲ್ಲಿ ಶುಕ್ರವಾರ ಪ್ರಧಾನಮಂತ್ರಿ ಹೊಸ 15 ಅಂಶಗಳ ಕಾರ್ಯಕ್ರಮ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಅಲ್ಪಸಂಖ್ಯಾತರ ಕಲ್ಯಾಣ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕಾಗಿ ವಿವಿಧ ಇಲಾಖೆಗಳಿಂದ ದತ್ತಾಂಶ ಸಂಗ್ರಹಿಸಬೇಕು. ಹಲವು ಇಲಾಖೆಗಳ ಅನುದಾನದಲ್ಲಿ ಶೇ.15ನ್ನು ಅಲ್ಪಸಂಖ್ಯಾತ ಸಮುದಾಯದ ಜನರ ಅಭಿವೃದ್ಧಿಗೆ ಮೀಸಲಿರಿಸಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.
ಸರ್ಕಾರದ ಯೋಜನೆಗಳ ಬಗ್ಗೆ ಅಲ್ಪಸಂಖ್ಯಾತ ಸಮುದಾಯದಲ್ಲಿ ಅರಿವು ಮೂಡಿಸಲು ಪ್ರತಿ 3 ತಿಂಗಳಿಗೊಮ್ಮೆ ಕಾರ್ಯಾಗಾರ ಆಯೋಜಿಸಬೇಕೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಿ. ರೇಖಾ ಅವರಿಗೆ ತಾಕೀತು ಮಾಡಿದರು.
ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯದಲ್ಲೂ ಬಾಲ್ಯವಿವಾಹ ಪ್ರಕರಣಗಳು ಹೆಚ್ಚಾಗಿವೆ. ಈ ಕುರಿತು ಹೆಚ್ಚಿನ ಅರಿವು ಮೂಡಿಸಬೇಕು ಹಾಗೂ ಮಹಿಳಾ ಪೊಲೀಸ್ ಠಾಣೆಯನ್ನು ಚಿತ್ರದುರ್ಗ ನಗರದ ಒಳಗೆ ಇರಬೇಕೆಂದು ಪ್ರಧಾನ ಮಂತ್ರಿ 15 ಅಂಶಗಳ ಕಾರ್ಯಕ್ರಮ ಸಮಿತಿ ಸದಸ್ಯೆ ದಿಲ್‌ಶಾದ್‌ಉನ್ನೀಸಾ ಸಭೆ ಗಮನಕ್ಕೆ ತಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯ್‌ಕುಮಾರ್, ಜಿಲ್ಲೆಯಲ್ಲಿ ಬಾಲ್ಯವಿವಾಹ ತಡೆಗೆ ಅರಿವು ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. 14ರಿಂದ 18 ವರ್ಷದ ಮಕ್ಕಳ, ಪಾಲಕರ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ ಎಂದರು.
ಬಾಲ್ಯವಿವಾಹ ತಡೆಗಾಗಿ ವಿವಿಧ ಇಲಾಖೆಗಳೊಂದಿಗೆ ಹೆಚ್ಚಿನ ಜಾಗೃತಿ ಮೂಡಿಸಬೇಕೆಂದು ಡಿಸಿ ಸೂಚಿಸಿದರು.
ಸಮಿತಿ ಸದಸ್ಯೆ ಜಾಸ್ಮಿನ್ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಅಂಗನವಾಡಿ ಮಕ್ಕಳಿಗೆ ಹಾಗೂ ಗರ್ಭೀಣಿಯರಿಗೆ ನೀಡುವ ಆಹಾರ ಗುಣಮಟ್ಟದಿಂದ ಕೂಡಿಲ್ಲ. ಸಮರ್ಪಕವಾಗಿ ಅನುಷ್ಠಾನವಾಗುತ್ತಿಲ್ಲ ಹಾಗೂ ಅಂಗನವಾಡಿ ಕೇಂದ್ರಗಳಿಗೆ ಅಗತ್ಯ ಮೂಲ ಸೌಲಭ್ಯಗಳು ಕಲ್ಪಿಸಬೇಕೆಂದರು.
ಉರ್ದು ಶಾಲೆಗಳಿಗೆ ಶಿಕ್ಷಕರ ನೇಮಕಕ್ಕೆ ಕ್ರಮವಹಿಸಬೇಕು ಎಂದು ಸಮಿತಿ ಸದಸ್ಯರಾದ ಸೈಯದ್ ಇಸ್ಹಾಕ್, ಮೊಹಮ್ಮದ್ ನೂರುಲ್ಲಾ ತಿಳಿಸಿದರು.
ಎಸಿ ಮೆಹಬೂಬ್ ಜಿಲಾನಿ ಖುರೇಷಿ, ಎಎಸ್‌ಪಿ ಉಮೇಶ್‌ಈಶ್ವರ್ ನಾಯ್ಕ,ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಸಮಿತಿ ಸದಸ್ಯರಾದ ಎಚ್.ಆರ್. ಮೊಹಮ್ಮದ್, ಸೈಯದ್ ಅಫಾಖ್ ಅಹಮ್ಮದ್ ಇತರರು ಇದ್ದರು.