ಅಲ್ಪಸಂಖ್ಯಾತರಿಗಿಲ್ಲ ಸರ್ಕಾರದ ರಕ್ಷಣೆ:ಮಾಜಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ ಆರೋಪ

09 GUDI 01
Published on

ಗುಡಿಬಂಡೆ: ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ನಿರುದ್ಯೋಗ ಹೆಚ್ಚಾಗಿದ್ದು, ಅಲ್ಪಸಂಖ್ಯಾತರಿಗೆ ರಕ್ಷಣೆಯಿಲ್ಲದಂತಾಗಿದೆ ಎಂದು ಮಾಜಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ ಆರೋಪಿಸಿದರು. ತಾಲೂಕಿನ ದೊಡ್ಡನಂಚರ್ಲು, ಕಾಲುವಗಡ್ಡಹಳ್ಳಿ ಹಾಗೂ ಮದ್ದಗಿರಿಹಳ್ಳಿ ಗ್ರಾಮಸ್ಥರ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ನಾಗದೇವತೆಗಳ ಪ್ರತಿಷ್ಠಾಪನೆ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ದೇಶಕ್ಕಾಗಿ ಎಲ್ಲರೂ ಜಾತ್ಯತೀತವಾಗಿ ಹೋರಾಟ ಮಾಡಿದ್ದಾರೆ. ಆದರೆ ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತರಿಗೆ ರಕ್ಷಣೆ ಇಲ್ಲದಂತಾಗಿದೆ. ಕಟ್ಟಡ ಕಾರ್ಮಿಕರಿಗೆ ಉದ್ಯೋಗವಿಲ್ಲ, ರೈತರು ಬೆಳೆಗಳಿಗೆ ಬೆಲೆ ಇಲ್ಲದೇ ಬೀದಿ ಪಾಲಾಗುತ್ತಿದ್ದಾರೆ ಎಂದು ದೂರಿಸಿದರು.

ಎತ್ತಿನಹೊಳೆ ಮತ್ತು ಕೆ.ಸಿ.ವ್ಯಾಲಿ ಪ್ರಾರಂಭಿಸಿದ್ದು ಕಾಂಗ್ರೆಸ್ ಸರ್ಕಾರ. ಮೇಕೆದಾಟು ಯೋಜನೆಗೆ 9 ಸಾವಿರ ಕೋಟಿ ಬೇಕಾಗಿದ್ದು, ಸರ್ಕಾರ ಕೇವಲ ಒಂದು ಸಾವಿರ ಕೋಟಿ ಮಾತ್ರ ಬಿಡುಗಡೆ ಮಾಡಿದೆ. ಮಂದಿನ ದಿನಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದೇ ಬರುತ್ತದೆ. ಆಗ ಕೋಲಾರ, ಚಿಕ್ಕಬಳ್ಳಾಪುರ ಭಾಗಗಳಿಗೆ 10 ಟಿಎಂಸಿ ನೀರನ್ನು ತಂದು ಮೇಕೆದಾಟು ಯೋಜನೆ ಅನುಷ್ಠಾನಗೊಳಿಸಲಾಗುವುದು ಎಂದರು.

ಆದಿಚುಂಚನಗಿರಿ ಶಾಖಾ ಮಠದ ಶ್ರೀ ಮಂಗಳನಾಥ ಸ್ವಾಮೀಜಿ ಮಾತನಾಡಿ, ಕೊಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಸಮಸ್ಯೆ ವ್ಯಾಪಕವಾಗಿದ್ದು, ಸರ್ಕಾರ ನೀರನ್ನು ಒದಗಿಸಲು ಮುಂದಾಗಬೇಕು ಎಂದು ಒತ್ತಾಯಿಸಿದರು.ಈ ಭಾಗದ ಬಡ ವಿದ್ಯಾರ್ಥಿಗಳು ವಿದ್ಯಾಭ್ಯಾಸದಿಂದ ವಂಚಿತರಾಗಿದ್ದರೆ. ಅಂತಹ ವಿದ್ಯಾರ್ಥಿಗಳನ್ನು ನಮ್ಮ ಮಠಕ್ಕೆ ಕಳುಹಿಸಿಕೊಟ್ಟರೆ ಅವರಿಗೆ ಉಚಿತ ವಿದ್ಯಾಭ್ಯಾಸ ನೀಡಲಾಗುವುದು ಎಂದು ತಿಳಿಸಿದರು.

ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಮಾತನಾಡಿ, ಗ್ರಾಮದಲ್ಲಿ ದೇವರ ಕಾರ್ಯ ಮಾಡುವಾಗ ಪಕ್ಷಗಳನ್ನು ಮರೆತು ಎಲ್ಲರೂ ಒಗ್ಗಟಿನಿಂದ ಕಾರ್ಯ ನಡೆಸಬೇಕು. ದೇವರ ಕಾರ್ಯಕ್ಕೆ ರಾಜಕೀಯ ಬೇರೆಸಬೇಡಿ ಎಂದು ಸಲಹೆ ನೀಡಿದರು.

ತಿರುಮಣಿ ಗ್ರಾಪಂ ಅಧ್ಯಕ್ಷೆ ಇಂದಿರಾ ಅಶ್ವತ್ಥರೆಡ್ಡಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಎನ್.ಕೇಶವರೆಡ್ಡಿ, ಜಿಪಂ ಮಾಜಿ ಅಧ್ಯಕ್ಷ ಎಂ.ವಿ ಕೃಷ್ಣಪ್ಪ, ತಾಪಂ ಮಾಜಿ ಅಧ್ಯಕ್ಷೆ ವರಲಕ್ಷ್ಮೀ ಕೃಷ್ಣೆಗೌಡ, ಮಾಜಿ ಉಪಾಧ್ಯಕ್ಷ ಬೈರಾರೆಡ್ಡಿ, ಭಾರತೀಯ ಭೂ ಸೇನೆ ಸೈನಿಕ ಅಂಜಿನಪ್ಪ, ಬೀಚಗಾನಹಳ್ಳಿ ಗ್ರಾಪಂ ಅಧ್ಯಕ್ಷ ವೆಂಕಟನರಸಪ್ಪ, ತಿರುಮಣಿ ಗ್ರಾಪಂ ಪಿಡಿಒ ಸುಭಾನ್, ಕಸಾಪ ತಾಲೂಕು ಅಧ್ಯಕ್ಷ ಪ್ರೇಸ್ ಸುಬ್ಬರಾಯಪ್ಪ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net