ಅವಘಡ ತಡೆಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಿ

21 (1)
Published on

ಮೈಸೂರು: ಜಿಲ್ಲೆಯಲ್ಲಿ ಮಳೆಯಿಂದ ಯಾವುದೇ ರೀತಿ ಅವಘಡಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ ಸೂಚಿಸಿದರು.


ತಮ್ಮ ಕಚೇರಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಗುರುವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದರು.
ಜಿಲ್ಲೆಯಲ್ಲಿ ಮುಂಗಾರು ಮಳೆಯ ಕಾರಣ ಜೀವಹಾನಿ, ಬೆಳೆಹಾನಿ ಉಂಟಾಗುವ ಸಂಬಂಧ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಸರ್ಕಾರಿ ಶಾಲೆ ಮತ್ತು ಅಂಗನವಾಡಿ ಕಟ್ಟಡಗಳ ತುರ್ತು ದುರಸ್ತಿ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.


ಕೇರಳದ ವಯನಾಡು ಜಿಲ್ಲೆಯಲ್ಲಿ ಈಗಲೂ ಅಧಿಕ ಮಳೆಯಾಗುತ್ತಿದ್ದು, ಕಬಿನಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಜಲಾಶಯದಿಂದ ಹೊರಹರಿವು ಹೆಚ್ಚಿಸಲಾಗಿದೆ. ಆದ್ದರಿಂದ ಯಾವುದೇ ರೀತಿ ಹಾನಿ ಉಂಟಾಗದಂತೆ ಅಗತ್ಯ ಕ್ರಮ ಅನುಸರಿಸಬೇಕು. ಪರಿಹಾರ ಕೇಂದ್ರಗಳನ್ನು ಸ್ಥಾಪಿಸಬೇಕು. ತಗ್ಗು ಪ್ರದೇಶಗಳಲ್ಲಿ ಜನರಿಗೆ ನಿರಂತರವಾಗಿ ಎಚ್ಚರಿಕೆ ನೀಡಿ ಅವಘಡಗಳು ಸಂಭವಿಸಿದಂತೆ ನೋಡಿಕೊಳ್ಳಬೇಕು ಎಂದರು.


ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸುವ ಮುನ್ನ ಅಲ್ಲಿನ ಮಳೆ ಪರಿಸ್ಥಿತಿಯನ್ನು ಅವಲೋಕಿಸಿ ನಂತರ ಸೂಕ್ತ ಕ್ರಮ ವಹಿಸಬೇಕು. ವಿದ್ಯಾರ್ಥಿನಿಲಯಗಳಲ್ಲಿ ಶುದ್ಧ ಕುಡಿಯುವ ನೀರಿನ ಪೂರೈಕೆಯಾಗಬೇಕು. ಮೇಲಿಂದ ಮೇಲೆ ನೀರಿನ ಗುಣಮಟ್ಟವನ್ನು ಪರೀಕ್ಷಿಸುವಂತೆ ಹಾಸ್ಟೆಲ್ ವಾರ್ಡನ್‌ಗಳಿಗೆ ಸೂಚನೆ ನೀಡಿದರು.


ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ.ಗಾಯತ್ರಿ, ಆಹಾರ ಹಾಗೂ ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕಿ ಕುಮುದಾ ಶರತ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net