

ಚಾಮರಾಜನಗರ: ಕಾರ್ಮಿಕರು ಈ ದೇಶದ ಆಸ್ತಿಯಾಗಿದ್ದು, ಸರ್ಕಾರದಿಂದ ಬರುವ ಸವಲತ್ತುಗಳನ್ನು ತಲುಪಿಸಿ ಎಂದು ಎಂಎಸ್‌ಐಎಲ್ ಅಧ್ಯಕ್ಷ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ ತಿಳಿಸಿದರು.
ನಗರದ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಕಾರ್ಮಿಕ ಇಲಾಖೆ, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಸಹಯೋಗದಲ್ಲಿ ಸೋಮವಾರ ಎಲೆಕ್ಟ್ರಿಷಿಯನ್ ವೆಲ್ಡಿಂಗ್ ಮತ್ತ್ತು ಮೇಷನ್ ಕಾರ್ಮಿಕರಿಗೆ ಟೂಲ್ ಕಿಟ್ ಹಾಗೂ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಿ ಮಾತನಾಡಿದರು.
ಕಾರ್ಮಿಕ ಇಲಾಖೆಯು ಕಟ್ಟಡ ಮತ್ತು ಇತರೆ ನಿರ್ಮಾಣ ಅಸಂಘಟಿತ ಕಾರ್ಮಿಕರಿಗೆ ನೋಂದಣಿ ಮಾಡಿಸುವ ತೆಗೆ ಇಲಾಖೆ ವತಿಯಿಂದ ಹಲವಾರು ಸೌಲಭ್ಯಗಳನ್ನು ನೀಡುತ್ತಿದೆ. ಕಾರ್ಮಿಕರು ಇದರ ಉಪಯೋಗ ಪಡೆದುಕೊಂಡು ಅಭಿವೃದ್ದಿ ಹೊಂದಬೇಕು. ಇತ್ತೀಚಿನ ದಿನಗಳಲ್ಲಿ ಸರ್ಕಾರವು ವಿವಿಧ ವಲಯಗಳನ್ನು ಅಸಂಘಟಿತ ಕಾರ್ಮಿಕರೆಂದು ಗುರುತಿಸಿದ್ದು, ನೋಂದಣಿ ಮಾಡಿಸುವ ಕಾರ್ಯ ಆರಂಭವಾಗಿದೆ. ಜಿಲ್ಲೆಯ ಎಲ್ಲಾ ಅಸಂಘಟಿತ ಕಾರ್ಮಿಕರು ಕಾರ್ಮಿಕ ಇಲಾಖೆಯಲ್ಲಿ ನೊಂದಣಿ ಮಾಡಿಸಿಕೊಳ್ಳುವಂತೆ ಹೇಳಿದರು.
ಜಿಲ್ಲಾ ಕಾರ್ಮಿಕ ಅಧಿಕಾರಿ ಡಾ. ಎಂ. ಸವಿತಾ ಮಾತನಾಡಿ, ಕಾರ್ಮಿಕರು ಯಾವುದೇ ಕಾರಣಕ್ಕೂ ಮಧ್ಯವರ್ತಿಗಳ ಮೊರೆ ಹೋಗಬಾರದು. ಎಲ್ಲ ತಾಲೂಕುಗಳಲ್ಲೂ ಕಾರ್ಮಿಕ ನಿರೀಕ್ಷಕರ ಕಚೇರಿ ಇದ್ದು, ನೇರವಾಗಿ ಇಲಾಖೆಯನ್ನು ಸಂಪರ್ಕಿಸಿ ಸೌಲಭ್ಯ ಪಡೆಯಬಹುದು ಎಂದರು.
ಕಾರ್ಯಕ್ರಮದಲ್ಲಿ ಮೇಷನ್ ಎಲೆಕ್ಟ್ರೀಷಿಯನ್ ವೆಲ್ಡಿಂಗ್ ಕಾರ್ಮಿಕರಿಗೆ ಟೂಲ್ ಕಿಟ್ ಹಾಗೂ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ವತಿಯಿಂದ ಸಿನಿ ಕಾರ್ಮಿಕರು, ಕ್ಷೌರಿಕರು, ಮೋಟಾರ್ ಸಾರಿಗೆ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಾಯಿತು.
ಹಿರಿಯ ಕಾರ್ಮಿಕ ನಿರೀಕ್ಷಕ ವಿ.ಎಲ್. ಪ್ರಸಾದ್, ಯೋಜನಾ ನಿರ್ದೇಶಕ ಮಹೇಶ್, ಕಟ್ಟಡ ಮತು ಇತರೆ ನಿರ್ಮಾಣ ಕಾರ್ಮಿಕ ಮಂಡಳಿಯ ರಾಜೇಶ್, ಅಸಂಘಟಿತ ಕಾರ್ಮಿಕ ಮಂಡಳಿಯ ಶ್ರೀಧರ್, ನಾಗರತ್ನ, ಪ್ರದೀಪ್ ಕುಮಾರ್ ಇತರರು ಹಾಜರಿದ್ದರು.