

ಚಾಮರಾಜನಗರ: ಈ ಬಾರಿಯ ಬಜೆಟ್‌ನಲ್ಲಿ ಚಾಮರಾಜನಗರವನ್ನು ಕಡೆಗಣಿಸಲಾಗಿದ್ದು, ಕಾಂಗ್ರೆಸ್‌ನ ಅಸಮರ್ಥ ಶಾಸಕರು ಇದಕ್ಕೆ ಕಾರಣಕರ್ತರಾಗಿದ್ದಾರೆ ಎಂದು ಬಿಎಸ್‌ಪಿ ರಾಜ್ಯ ಕಾರ್ಯದರ್ಶಿ ಎನ್.ನಾಗಯ್ಯ ಆರೋಪಿಸಿದರು.
ಈ ಬಾರಿಯ ಬಜೆಟ್‌ನಲ್ಲಿ ಚಾಮರಾಜನಗರ ಜಿಲ್ಲೆಯನ್ನು ಕಡೆಗಣಿಸಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ, ಕೇವಲ ಮತ ಗಳಿಸುವಾಗ ಮಾತ್ರ ಜಿಲ್ಲೆಯನ್ನು ನೆನಪಿಸಿಕೊಳ್ಳುತ್ತದೆ. ಜಿಲ್ಲೆಯ ಅಭಿವೃದ್ಧಿಗೆ ಅನುದಾನ ನೀಡುವಾಗ ಇಲ್ಲಿಯ ಜನರ ಸಂಕಷ್ಟಗಳು ನೆನಪಾಗುವುದಿಲ್ಲ. ಕಳೆದ 20 ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣ, ರಸ್ತೆ ಹಾಗೂ ಒಳಚರಂಡಿ ಅಭಿವೃದ್ಧಿಗೆ ಶಾಸಕರು ವಿಶೇಷ ಅನುದಾನವನ್ನು ತರಬೇಕಿತ್ತು. ಸಿಎಂ ಸಿದ್ದರಾಮಯ್ಯ ಅವರನ್ನು ಒತ್ತಾಯ ಮಾಡುವಷ್ಟು ಧೈರ್ಯ ಶಾಸಕ ಪುಟ್ಟರಂಗಶೆಟ್ಟಿ ಅವರಿಗೆ ಇಲ್ಲ ಎಂದು ಟೀಕಿಸಿದ್ದಾರೆ.
ಜಿಲ್ಲೆಯ ಜನರ ಶಿಕ್ಷಣ,ಆರೋಗ್ಯ ಮತ್ತು ಉದ್ಯೋಗಕ್ಕೆ ಆಯವ್ಯದಲ್ಲಿ ಒತ್ತು ನೀಡದೆ, ನಿರ್ಲಕ್ಷ್ಯ ಧೋರಣೆ ಅನುಸರಿಸಿದ್ದಾರೆ. ಈ ನಿಟ್ಟಿನಲ್ಲಿ ಸಿಎಂ ಮತ್ತು ಸಚಿವರು ಜಿಲ್ಲೆಗೆ ಭೇಟಿ ನೀಡಿದಾಗ ೇರಾವ್ ಮಾಡಿ ಪ್ರತಿಭಟನೆ ನಡೆಸಲಾಗುವುದು. ಜಿಲ್ಲೆಯ ಅಭಿವೃದ್ಧಿಗೆ ಯಾವುದೇ ಅನುದಾನ ನೀಡದೆ ದ್ರೋಹ ಮಾಡಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಂದೋಲನ ರೂಪಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.