ಚಾಮರಾಜನಗರ: ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳಿಗಾಗಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಎಸ್‌ಇಪಿ/ಟಿಎಸ್‌ಪಿ ಅನುದಾನ ದುರ್ಬಳಕೆ ಮಾಡಿಕೊಂಡಿರುವುದನ್ನು ಖಂಡಿಸಿ ಆ.7ರಂದು ನಗರದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ ತಿಳಿಸಿದರು.
ಆ.7ರಂದು ಬೆಳಗ್ಗೆ 10.30ಕ್ಕೆ ಚಾಮರಾಜೇಶ್ವರ ದೇಗುಲದ ಮುಂಭಾಗ ಕಾರ್ಯಕರ್ತರು ಗುಂಪುಗೂಡಲಿದ್ದೇವೆ. ಬಳಿಕ ಮೆರವಣಿಗೆ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಪ್ರತಿಭಟನೆ ನಡೆಸಲಾಗುವುದು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಪ್ರತಿಭಟನೆಯಲ್ಲಿ ವಿಧಾನ ಪರಿಷತ್ತಿನ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವ ಬಿ.ಶ್ರೀರಾಮುಲು, ಎಸ್ಟಿ ಮೋರ್ಚಾದ ಅಧ್ಯಕ್ಷ ಬಂಗಾರು ಹನುಮಂತು, ಎಸ್ಸಿ ಮೋರ್ಚಾದ ಅಧ್ಯಕ್ಷ ಸಿಮೆಂಟ್ ಮಂಜು, ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್, ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನ್‌ಕುಮಾರ್ ಮತ್ತು ಮುಖಂಡರು ಭಾಗವಹಿಸುವರು ಎಂದು ಮಾಹಿತಿ ನೀಡಿದರು.
ಎಸ್ಸಿ/ಎಸ್ಟಿ ಎಸ್‌ಇಪಿ ಮತ್ತು ಟಿಎಸ್‌ಪಿ ಅನುದಾನವನ್ನು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ದುರ್ಬಳಕೆ ಮಾಡಿಕೊಂಡಿದೆ. ಈ ಮೂಲಕ ಎಸ್ಸಿ/ಎಸ್ಟಿ ಜನಾಂಗಕ್ಕೆ ಅನ್ಯಾಯ ಮಾಡಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎಸ್ಸಿ/ಎಸ್ಟಿ ಸಮುದಾಯದವರಿಗೆ ಯಾವುದೇ ಸೌಲಭ್ಯ ಸಿಗುತ್ತಿಲ್ಲ. ಸರ್ಕಾರದ ವಿರುದ್ಧ ನಡೆಯುವ ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಒತ್ತಾಯ ಮಾಡಿದರು.
ಗೋಷ್ಠಿಯಲ್ಲಿ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಆರ್.ಸುಂದರ್, ನಗರಸಭೆ ಸದಸ್ಯ ಶಿವರಾಜ್, ಎಸ್ಸಿ ಮೊರ್ಚಾ ಜಿಲ್ಲಾಧ್ಯಕ್ಷ ಮೂರ್ತಿ, ಎಸ್ಟಿ ಮೋರ್ಚಾ ಜಿಲ್ಲಾಧ್ಯಕ್ಷ ಚಂದ್ರಶೇಖರ್, ಮುಖಂಡ ಜಯಸುಂದರ್ ಇದ್ದರು.