

ಬೆಳಗಾವಿ: ಪೆಟ್ರೋಲ್, ಡೀಸೆಲ್ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ಸೈಕಲ್ ರ‌್ಯಾಲಿ ನಡೆಸುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ೋಷಣೆ ಕೂಗಿದ ಕಾರ್ಯಕರ್ತರು, ಕಾಂಗ್ರೆಸ್ ಭವನದ ಆವರಣದಲ್ಲೇ ಒಲೆ ಹೂಡಿ
ಚಹಾ ತಯಾರಿಸಿ ಪ್ರತಿಭಟಿಸಿದರು.
ಸೈಕಲ್ ರ‌್ಯಾಲಿಗೆ ಚಾಲನೆ ನೀಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಮಾತನಾಡಿ, ಕೋವಿಡ್ ನಿರ್ವಹಣೆ ಹಾಗೂ ಲಸಿಕೆ ವಿತರಣೆಯಲ್ಲಿ ಉಭಯ ಸರ್ಕಾರ ವಿಲವಾಗಿವೆ. ಸ್ವತಃ ಬಿಜೆಪಿ ಶಾಸಕರೇ ಸಿಎಂ ವಿರುದ್ಧ ಆರೋಪಿಸುತ್ತಿದ್ದಾರೆ. ಬಿಜೆಪಿಯವರು ಸರ್ಕಾರ ನಡೆಸಲು ಅಸಮರ್ಥರು ಎಂಬುದು ಸಾಬೀತಾಗಿದೆ. ಕರೊನಾ ಸಂಕಷ್ಟ ಸಮಯದಲ್ಲಿ ಅಗತ್ಯ ವಸ್ತುಗಳ ಬೆಲೆ ಹೆಚ್ಚಿಸಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದನ್ನು ಖಂಡಿಸಿ ರಾಜ್ಯಾದ್ಯಂತ ಕಾಂಗ್ರೆಸ್ ವತಿಯಿಂದ ಸೈಕಲ್ ರ‌್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದರು.
ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ಬಿಜೆಪಿ ಸರ್ಕಾರ ಕಳೆದೊಂದು ವರ್ಷದಲ್ಲಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿಸಿದೆ. 3 ದಿನಗಳ ಹಿಂದಷ್ಟೇ ಅಡುಗೆ ಅನಿಲದ ಬೆಲೆ 20 ರೂ. ಏರಿಕೆಯಾಗಿದೆ. ಜನರ ಸಂಕಷ್ಟಕ್ಕೆ ಸ್ಪಂದಿಸುವುದೇ ನಮ್ಮ ಪಕ್ಷದ ನಿಲುವು. ಹೀಗಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವುದನ್ನು ಖಂಡಿಸುವುದರ ಜತೆಗೆ ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದೇವೆ ಎಂದು ಹೇಳಿದರು. ಶಾಸಕರಾದ ಡಾ.ಅಂಜಲಿ ನಿಂಬಾಳ್ಕರ್, ಮಹಾಂತೇಶ ಕೌಜಲಗಿ, ಎಐಸಿಸಿ ಗೋವಾ ವೀಕ್ಷಕ ಸುನೀಲ ಹನುಮಣ್ಣವರ, ಪಕ್ಷದ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ, ಮುಖಂಡರಾದ ರಾಜು ಸೇಠ್, ಜಯಶ್ರೀ ಮಾಳಗಿ ಇತರರಿದ್ದರು. ಕಾಂಗ್ರೆಸ್ ಭವನದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಸೈಕಲ್ ರ‌್ಯಾಲಿ ನಡೆಸಿ, ಬೆಲೆ ಇಳಿಕೆಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.