

ಚಿತ್ರದುರ್ಗ: ಕೋವಿಡ್-19 ಪ್ರಕರಣಗಳು ಬೇರೆಡೆ ಕಂಡು ಬರುತ್ತಿದ್ದು, ಜಿಲ್ಲೆಯಲ್ಲಿ ಉಲ್ಭಣಿಸದಂತೆ ಎಚ್ಚರವಹಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಕೋವಿಡ್-19 ಸಂಬಂಧ ಮುಂಜಾಗ್ರತಾ ಕ್ರಮ, ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಜಿಲ್ಲೆಯಲ್ಲಿ ಈಗಾಗಲೇ 14 ಮಂದಿಗೆ ಕೋವಿಡ್-19 ದೃಢಪಟ್ಟಿದ್ದು, ಯಾರೂ ಆತಂಕ ಪಡುವ ಅಗತ್ಯವಿಲ್ಲ. ಸೋಂಕು ಒಬ್ಬರಿಂದ ಮತ್ತೊಬ್ಬರಿಗೆ ಸಾಂಕ್ರಾಮಿಕವಾಗಿ ಹರಡುವುದನ್ನು ತಡೆಯಲು ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ತಾಕೀತು ಮಾಡಿದರು.
ಯಾವುದೇ ಪರಿಸ್ಥಿತಿ ಎದುರಾದರೂ ನಿಭಾಯಿಸಲು ಅಧಿಕಾರಿಗಳು ಸಿದ್ಧರಿರಬೇಕು. ಈ ಹಿಂದೆ ಕೋವಿಡ್ ಅಲೆಗೆ ಬಹಳಷ್ಟು ಜನ ಸಾವು-ನೋವು ಅನುಭವಿಸಿದರು. ಬಡವರು ಚಿಕಿತ್ಸೆಗಾಗಿ ಆಸ್ಪತ್ರೆಗಳಲ್ಲಿ ಹಾಸಿಗೆ ದೊರೆಯದೆ ಅಲೆದಾಡುವ ಪರಿಸ್ಥಿತಿ ಎದುರಿಸಿದರು. ಹೀಗಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿಯೇ ಸೂಕ್ತ ಚಿಕಿತ್ಸೆ ದೊರೆಯುವಂತಾಗಬೇಕು. ಆ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಸೂಚಿಸಿದರು.
ಸಮಾಜ ಕಲ್ಯಾಣ, ಹಿಂದುಳಿದ ವರ್ಗ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಿಂದ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ವಸತಿ ನಿಲಯಗಳಿಗೆ ಭೇಟಿ ನೀಡಿ, ನಿಯಮಿತವಾಗಿ ವಿದ್ಯಾರ್ಥಿಗಳ ಆರೋಗ್ಯ ಪರೀಕ್ಷಿಸಬೇಕು. ಈ ಕುರಿತು ಆಯಾ ತಾಲೂಕು ಆರೋಗ್ಯಾಧಿಕಾರಿ ಹೆಚ್ಚಿನ ಕಾಳಜಿ ವಹಿಸಬೇಕು. ಯಾವುದೇ ದೂರು ಬಾರದಂತೆ ಜಾಗ್ರತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಸಲಹೆ ನೀಡಿದರು.
ಜಿಲ್ಲಾಧಿಕಾರಿ ಜಿ.ಆರ್.ಜೆ.ದಿವ್ಯಾಪ್ರಭು ಮಾತನಾಡಿ, ಕೋವಿಡ್-19 ಸಂಬಂಧ ಜಿಲ್ಲೆಯಲ್ಲಿ ನಿಗದಿತ ಗುರಿಗಿಂತ ಹೆಚ್ಚು ಪರೀಕ್ಷೆ ಮಾಡಲಾಗುತ್ತಿದೆ. ದೃಢಪಟ್ಟವರ ಪೈಕಿ 12 ಮಂದಿ ಗೃಹ ಆರೈಕೆಯಲ್ಲಿದ್ದು, ಮಾರ್ಗಸೂಚಿ ಅನುಸರಿಸಲಾಗುತ್ತಿದೆ. ಇನ್ನಿಬ್ಬರಲ್ಲಿ ಒಬ್ಬರು ಜಿಲ್ಲಾಸ್ಪತ್ರೆಯಲ್ಲಿ, ಮತ್ತೊಬ್ಬರು ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲಾಸ್ಪತ್ರೆ 450, ಹೊಸ ಕಟ್ಟಡದಲ್ಲಿ 150 ಸೇರಿ ಒಟ್ಟು 600 ಹಾಸಿಗೆಗಳು ಲಭ್ಯವಿದೆ. ಪರೀಕ್ಷೆಗಾಗಿ 800 ಕಿಟ್ ಬಂದಿದ್ದು, 15ದಿನಕ್ಕೆ ಆಗುವಷ್ಟು ಇವೆ. ಚಿಕಿತ್ಸೆ ಸಂಬಂಧ ಅಗತ್ಯ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಚಂದ್ರಶೇಖರ್ ಕಂಬಾಳಿಮಠ್ ಮಾತನಾಡಿ, ಜಿಲ್ಲೆಯಲ್ಲಿ ಹೆಚ್ಚಿನ ಪರೀಕ್ಷೆ ನಡೆಸಲಾಗುತ್ತಿದೆ. 60 ವರ್ಷ ಮೇಲ್ಪಟ್ಟವರು, ದೀರ್ಘಕಾಲೀನ ಅನಾರೋಗ್ಯ ಸಮಸ್ಯೆ ಎದುರಿಸುತ್ತಿರುವವರು ಮುಂಜಾಗ್ರತಾ ಕ್ರಮವಾಗಿ ಜನನಿಬಿಡ ಪ್ರದೇಶಗಳಿಗೆ ತೆರಳದಂತೆ, ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಅರಿವು ಮೂಡಿಸಲಾಗುತ್ತಿದೆ ಎಂದರು.
ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಮಾತನಾಡಿ, ಜಿಲ್ಲಾಸ್ಪತ್ರೆಯಲ್ಲಿನ ವೈದ್ಯಕೀಯ ಆಕ್ಸಿಜನ್ 3 ಘಟಕಗಳ ಪೈಕಿ 2 ಕಾರ್ಯನಿರ್ವಹಿಸುತ್ತಿವೆ. ಇನ್ನೊಂದರ ದುರಸ್ತಿಗಾಗಿ ಅಂದಾಜು 10 ಲಕ್ಷ ರೂ. ಅನುದಾನದ ಅಗತ್ಯವಿದೆ. 234 ಜಂಬೋ ಸಿಲಿಂಡರ್ ಲಭ್ಯವಿದೆ. ಚಿಕಿತ್ಸೆ ಸಂಬಂಧ ತುರ್ತಾಗಿ 10 ಮಂದಿ ಶುಶ್ರೂಷಕರ ಅವಶ್ಯಕತೆ ಇದೆ ಎಂದರು. ಇದಕ್ಕೆ ಸ್ಪಂದಿಸಿದ ಸಚಿವರು ಅಗತ್ಯಾನುಸಾರ ನೇಮಕ ಮಾಡಿಕೊಳ್ಳುವಂತೆ ಸೂಚಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್-19 ದೃಢಪಟ್ಟಿರುವ ಪ್ರಕರಣ ಪೈಕಿ ಯಾರಲ್ಲೂ ಜೆಎನ್.1 ಸೋಂಕು ದೃಢಪಟ್ಟಿಲ್ಲ. ಆದರೂ ಸಂಗ್ರಹಿಸಿರುವ ಅವರ ಮಾದರಿಯನ್ನು ಈಗಾಗಲೇ ಜಿನೋಮ್ ಸೀಕ್ವೆನ್ಸ್ ಪರೀಕ್ಷೆಗೆ ಕಳುಹಿಸಲಾಗಿದ್ದು, ಇನ್ನೂ ವರದಿ ಬಂದಿಲ್ಲ ಎಂದರು.
ವರ್ಷಾಚರಣೆ ಮೇಲಿರಲಿ ನಿಗಾ: ಹೊಸ ವರ್ಷಾಚರಣೆ ವೇಳೆ ವಿ.ವಿ.ಸಾಗರ ಜಲಾಶಯ, ಜೋಗಿಮಟ್ಟಿ, ಚಿತ್ರದುರ್ಗ ಕೋಟೆ, ನಾಯಕನಹಟ್ಟಿ ಸೇರಿ ವಿವಿಧ ಪ್ರವಾಸಿ ತಾಣಗಳಲ್ಲಿ ಜನಸಂದಣಿ ಹೆಚ್ಚಾಗುವ ಸಾಧ್ಯತೆಗಳಿವೆ. ಹೀಗಾಗಿ ನಿಗಾ ಇರಿಸುವುದು ಸೂಕ್ತ. ಕೇರಳ ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್ ವರದಿಯಾಗುತ್ತಿದ್ದು, ಶಬರಿಮಲೆಗೆ ಹೋಗಿ ಬಂದವರ ಮೇಲೂ ನಿಗಾವಹಿಸಬೇಕು. ಸೋಂಕು ದೃಢಪಟ್ಟವರನ್ನು ಮಾತ್ರವಲ್ಲದೆ, ಪ್ರಾಥಮಿಕ ಸಂಪರ್ಕಿತರ ಪರೀಕ್ಷೆಯನ್ನೂ ಮಾಡಬೇಕು ಎಂದು ಸುಧಾಕರ್ ಸೂಚನೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂಧರ್ ಕುಮಾರ್ ಮೀನಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಡಿಎಚ್‌ಒ ಡಾ.ರೇಣುಪ್ರಸಾದ್, ಟಿಎಚ್‌ಒ ಡಾ.ಬಿ.ವಿ.ಗಿರೀಶ್ ಇತರರಿದ್ದರು.