

ಸಿದ್ದಾಪುರ: ಗುಹ್ಯ ಗ್ರಾಮ ವ್ಯಾಪ್ತಿಯಲ್ಲಿ ಹಲವು ದಿನಗಳಿಂದ ಕಾಡಾನೆಗಳ ಉಪಟಳ ಮಿತಿ ಮೀರಿದ್ದು, ಇದೀಗ ಹಾಡಹಗಲೇ ಗ್ರಾಮದ ಅಲ್ಲಲ್ಲಿ ಕಾಣಿಸಿಕೊಂಡು ಆತಂಕ ಮೂಡಿಸಿವೆ.
ಗ್ರಾಮದ ಪ್ರಾಥಮಿಕ ಶಾಲೆ ಪಕ್ಕದಲ್ಲಿರುವ ಜ್ಯೋತಿ ಪೊನ್ನಪ್ಪ ಎಂಬುವರ ತೋಟದಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಕಾಡಾನೆ ಪ್ರತ್ಯಕ್ಷ ವಾಗಿದೆ. ಇಂತಹ ಘಟನೆಗಳು ಗ್ರಾಮ ವ್ಯಾಪ್ತಿಯಲ್ಲಿ ಹೆಚ್ಚುತ್ತಿದ್ದು, ಕಾರ್ಮಿಕರು ತೋಟಗಳಲ್ಲಿ ಕಾರ್ಯನಿರ್ವಹಿಸಲು ಹಿಂದೇಟು ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ.
ಕಾಡಾನೆಗಳ ಹಾವಳಿಯಿಂದ ಮಕ್ಕಳು ಶಾಲೆಗೆ ತೆರಳಲು ಆಗುತ್ತಿಲ್ಲ. ಇದರೊಂದಿಗೆ ರೈತರು ಹೊಲ-ಗದ್ದೆಗಳಲ್ಲಿ ಕೆಲಸ ಮಾಡಲು ತೊಂದರೆ ಅನುಭವಿಸುವಂತಾಗಿದೆ ಎಂದ ಸಾರ್ವಜನಿಕರು ಅಳಲು ತೋಡಿಕೊಂಡಿದ್ದಾರೆ. ಕೂಡಲೇ ಅರಣ್ಯ ಇಲಾಖೆಗಳ ಅಧಿಕಾರಿಗಳು ಆನೆಗಳನ್ನು ಕಾಡಿಗೆ ಅಟ್ಟುವ ಕೆಲಸ ಮಾಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.