

ಹಾಸನ: ರಾಷ್ಟ್ರಕವಿ ಕುವೆಂಪು ಅವರ 119ನೇ ಜಯಂತ್ಯುತ್ಸವವನ್ನು ಡಿ. 30ರ ಶನಿವಾರ ನಗರದ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಆದಿಚುಂಚನಗಿರಿ ಹಾಸನ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ ಅವರು ಹೇಳಿದರು.
ಶ್ರೀ ಮಠದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರಕವಿ ಕುವೆಂಪು ಅವರ ವಿಶ್ವಮಾನವ ಸಂದೇಶ ಎಲ್ಲರಿಗೂ ತಿಳಿಯಬೇಕೆಂಬ ಉದ್ದೇಶದಿಂದ ಹಲವು ಕಾರ್ಯಕ್ರಮ ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ 10.30ಕ್ಕೆ ಕಾರ್ಯಕ್ರಮವನ್ನು ಖ್ಯಾತ ಸಂಗೀತ ನಿರ್ದೇಶಕ ಡಾ.ಹಂಸಲೇಖ ಉದ್ಘಾಟಿಸಲಿದ್ದಾರೆ. ಆದಿಚುಂಚನಗಿರಿ ಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ.ಗೋಪಾಲಗೌಡ ಕೃತಿ ಲೋಕಾರ್ಪಣೆ ಮಾಡುವರು. ರಾಷ್ಟ್ರಕವಿ ಕುವೆಂಪು ಅವರ ಭಾವಚಿತ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಮತ್ತು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪುಷ್ಪಾರ್ಚನೆ ಮಾಡಲಿದ್ದಾರೆ. ಶಾಸಕ ಎಚ್.ಪಿ.ಸ್ವರೂಪ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಇದೇ ವೇಳೆ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಗುತ್ತಿದೆ. ವಿಜಯವಾಣಿ ದಿನಪತ್ರಿಕೆ ಸಂಪಾದಕ ಕೆ.ಎನ್.ಚನ್ನೇಗೌಡ, ನ್ಯೂಸ್ 18 ಕನ್ನಡ ಸುದ್ದಿವಾಹಿನಿ ಸಂಪಾದಕ ಹರಿಪ್ರಸಾದ್, ಸಾಹಿತಿ ಮೃತ್ಯುಂಜಯ, ಕೃಷಿಕ ಕಡಿದಾಳ್ ಪ್ರಕಾಶ್, ಸಮಾಜ ಸೇವಕ ಬಿ.ಇ.ಶಿವರಾಮೇಗೌಡ, ಚಿತ್ರನಟಿ ರಿತನ್ಯಾ ಹೂವಣ್ಣಗೌಡ, ಸಾಮಾಜಿಕ ಕಾರ್ಯಕರ್ತ ಸೈಯದ್ ಸಜ್ಜಾದ್ ಪಾಷ ಹಾಗು ಕ್ರೀಡಾ ಸಾಧಕ ಎಚ್.ಎನ್.ಶಿವಕುಮಾರ್ ಅವರನ್ನು ಸನ್ಮಾನಿಸಲಾಗುತ್ತಿದೆ ಎಂದರು.
ಮಧ್ಯಾಹ್ನ 2.30ಕ್ಕೆ ‘ಕುವೆಂಪು ಅಜ್ಜನ ನೆನಪು’ ಗೋಷ್ಠಿ ನಡೆಯಲಿದ್ದು, ಸಾಹಿತಿ ಬೇಲೂರು ರಘುನಂದನ್ ಅಧ್ಯಕ್ಷತೆ ವಹಿಸುವರು. ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಅಧ್ಯಕ್ಷ ಚ.ನಾ.ಅಶೋಕ್ ಅವರು ಆಶಯ ನುಡಿಗಳನ್ನಾಡುವರು. 2017ರ ಜಿಲ್ಲಾ ಪ್ರಥಮ ಮಕ್ಕಳ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆ ಎಚ್.ವಿ.ಚಂದನಾ ಗೋಷ್ಠಿಯನ್ನು ಉದ್ಘಾಟಿಸಲಿದ್ದಾರೆ. ವಿಶೇಷವಾಗಿ ನಾಲ್ಕು ಗೋಷ್ಠಿಗಳು ನಡೆಯಲಿವೆ. ಸಂಜೆ 6 ಗಂಟೆಗೆ ಗುರು ತೋರಿದ ತಿಂಗಳ ಮಾಮನ ತೇರು 111ನೇ ಹುಣ್ಣಿಮೆ ಕಾರ್ಯಕ್ರಮದ ಅಂಗವಾಗಿ ಕುವೆಂಪು ಅವರ ‘ಜಲಗಾರ’ ನಾಟಕ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಈ ನಾಟಕವನ್ನು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಎಚ್.ಎಲ್.ಮಲ್ಲೇಶಗೌಡ ನಿರ್ದೇಶಿಸಿದ್ದಾರೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಜೆ.ಎಲ್.ಮುದ್ದೇಗೌಡ, ರಾಜ್ಯ ಸಂಘದ ನಿರ್ದೇಶಕ ಎಸ್.ಎಸ್.ರಘುಗೌಡ, ಕಸಾಪ ಜಿಲ್ಲಾಧ್ಯಕ್ಷ ಡಾ.ಎಚ್.ಎಲ್.ಮಲ್ಲೇಶ್ ಗೌಡ ಇದ್ದರು.