ಆದಿವಾಸಿಗಳಿಗೆ ಹೆಚ್ಚಿನ ಅರಿವು ಮೂಡಿಸಿ

06Rajesh9
Published on

ಚಾಮರಾಜನಗರ: ಜಿಲ್ಲೆಯಲ್ಲಿ ಕಾಡಂಚಿನ ಪ್ರದೇಶಗಳು ಹಾಗೂ ಹಾಡಿ-ಪೋಡುಗಳು ಸಾಕಷ್ಟು ಸಂಖ್ಯೆಯಲ್ಲಿದ್ದು, ಜನನ ಹಾಗೂ ಮರಣ ನೋಂದಣಿ ಬಗ್ಗೆ ಆದಿವಾಸಿಗಳಿಗೆ ಹೆಚ್ಚಿನ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ನಾಗರಿಕ ನೋಂದಣಿ ಪದ್ಧತಿಯಡಿ ಜನನ-ಮರಣಗಳ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜನನ, ಮರಣಗಳ ಕುರಿತ ನಾಗರಿಕ ನೋಂದಣಿ ಪದ್ಧತಿಯನ್ನು ಉತ್ತಮಪಡಿಸಲು ಎಲ್ಲ ಹಂತದಲ್ಲಿ ಅಧಿಕಾರಿಗಳಿಗೆ ತರಬೇತಿ ನೀಡಬೇಕು. ನಾಗರಿಕ ನೋಂದಣಿ ಪದ್ಧತಿಯಡಿ ನೋಂದಣಿ ಪ್ರಗತಿಗಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ತರಬೇತಿ ಹಾಗೂ ಕಾರ್ಯಾಗಾರಗಳನ್ನು ಆಯೋಜಿಸಬೇಕು. ಜನನ, ಮರಣ ನೋಂದಣಿ ಕುರಿತ ಮಾರ್ಗಸೂಚಿಗಳನ್ನು ಮುದ್ರಿಸಿ, ಕಿರು ಕೈಪಿಡಿ ತಯಾರಿಸಿ ಎಲ್ಲ 130 ಗ್ರಾಮ ಪಂಚಾಯಿತಿಗಳಿಗೆ, ನಗರ, ಸ್ಥಳೀಯ ಸಂಸ್ಥೆಗಳಿಗೆ ವಿತರಿಸುವಂತೆ ನಿರ್ದೇಶನ ನೀಡಿದರು.

ಪ್ರತಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿಯವರನ್ನು ಜನನ-ಮರಣ ಉಪ ನೋಂದಣಾಧಿಕಾರಿಯನ್ನಾಗಿ ನೇಮಿಸಲಾಗಿದೆ. ಆಯಾ ಭಾಗದ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು ಜನನ-ಮರಣ ನೋಂದಣಿ ಅಧಿನಿಯಮ-1969 ರನ್ವಯ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಜರುಗುವ ಪ್ರತಿಯೊಂದು ಜನನ-ಮರಣಗಳ ಮಾಹಿತಿಯನ್ನು 21 ದಿನದೊಳಗೆ ನೋಂದಾಯಿಸುವ ಜವಾಬ್ದಾರಿಯನ್ನು ನಿಗದಿತ ಕಾಲಮಿತಿಯಲ್ಲಿ ನಿರ್ವಹಿಸಬೇಕು. ಯಾವುದೇ ವಿಳಂಬಕ್ಕೆ ಆಸ್ಪದವಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಪ್ರಸ್ತುತ ನಗರ ಪ್ರದೇಶಗಳ ವ್ಯಾಪ್ತಿಯಲ್ಲಿ ಜಿಲ್ಲಾ ಆಸ್ಪತ್ರೆ, ಸಾರ್ವಜನಿಕ ಆಸ್ಪತ್ರೆ, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳು ಮತ್ತು ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿ ಗ್ರಾಮಾಡಳಿತ ವೃತ್ತಗಳು, ಗ್ರಾಮ ಪಂಚಾಯಿತಿ, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳು ನಾಗರಿಕ ನೋಂದಣಿ ಘಟಕಗಳಾಗಿ ಕಾರ್ಯನಿರ್ವಹಿಸುತ್ತಿವೆ. ಈ ಎಲ್ಲ ಘಟಕಗಳ ಉಪ ನೋಂದಣಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಜರುಗುವ ಪ್ರತಿಯೊಂದು ಜನನ-ಮರಣ ನೋಂದಣಿಯಲ್ಲಿ ಯಾವುದೇ ವ್ಯತ್ಯಾಸಗಳಾಗದಂತೆ ನಿಗಾ ವಹಿಸುವಂತೆ ಕಟ್ಟುನಿಟ್ಟಿನ ಎಚ್ಚರಿಕೆ ವಹಿಸಬೇಕು ಎಂದರು.

ಉಪವಿಭಾಗಾಧಿಕಾರಿ ಮಹೇಶ್, ನಗರಸಭೆ ಪೌರಾಯುಕ್ತ ಎಸ್.ವಿ.ರಾಮದಾಸ್, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಪ್ರಮೋದ್‌ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಚಿದಂಬರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಮಂಜುನಾಥ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸುಧಾ, ತಹಸೀಲ್ದಾರ್ ಗಿರಿಜಾ, ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net