ಆನೆ ಹಾವಳಿಗೆ ಶಾಶ್ವತ ಕಡಿವಾಣಕ್ಕೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆಯಿಂದ ಪ್ರತಿಭಟನೆ

11_HSN_04
Published on

ಹಾಸನ: ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ನಗರದ ಹೇಮಾವತಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸುತ್ತಿದ್ದು, ಧರಣಿ ಮೂರನೇ ದಿನಕ್ಕೆ ಕಾಲಿಟ್ಟಿದೆ.

ಮಂಗಳವಾರ ಬೇಲೂರಿನ ಬಿಕ್ಕೋಡಿನಿಂದ ನೂರಾರು ಜನ ಜಯ ಕರ್ನಾಟಕ ಸಂಘಟನೆಯ ಕಾರ್ಯಕರ್ತರು, ಜಿಲ್ಲಾಧ್ಯಕ್ಷ ಸೋಮಶೇಖರ್ ಅವರ ನೇತೃತ್ವದಲ್ಲಿ ಬೈಕ್ ರ‌್ಯಾಲಿ ಮೂಲಕ ನಗರಕ್ಕೆ ಆಗಮಿಸಿ ಹೇಮಾವತಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದ್ದರು. ಬುಧವಾರ ಪ್ರತಿಭಟನೆಯನ್ನು ಮುಂದುವರಿಸಲಾಗಿದ್ದು, ಇಂದಿನಿಂದ ಐದು ದಿನಗಳ ಕಾಲ ಧರಣಿ ಮುಂದುವರಿಯಲಿದೆ.

ಬೇಲೂರು ತಾಲೂಕಿನ ಅರೇಹಳ್ಳಿ, ಬಿಕ್ಕೋಡು ಸೇರಿದಂತೆ ಸುತ್ತಮುತ್ತಲಿನ ಗ್ರಾಮದಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟಿದ್ದು, ಪ್ರತಿನಿತ್ಯ ಆ ಭಾಗದ ಜನರು ಜೀವಭಯದಲ್ಲಿ ಬದುಕಬೇಕಾಗಿದೆ. ಈಗಾಗಲೇ ಕಾಡಾನೆ ದಾಳಿಗೆ ಹಲವು ಮಂದಿ ಮೃತಪಟ್ಟು, ಇನ್ನು ಕೆಲವರು ಗಾಯಗೊಂಡಿದ್ದಾರೆ. ಪ್ರತಿನಿತ್ಯ ಬೆಳೆ ನಷ್ಟವಾಗುತ್ತಿದ್ದು, ನಮ್ಮನ್ನಾಳುವ ಸರ್ಕಾರ ಕಣ್ಮುಚ್ಚಿ ಕುಳಿತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಯ ಕರ್ನಾಟಕ ಸಂಘಟನೆ ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕೆಂದು ಒತ್ತಾಯಿಸಿ ನಡೆಸುತ್ತಿರುವ ಹೋರಾಟಕ್ಕೆ ಸಂಘ-ಸಂಸ್ಥೆಗಳು, ರೈತ ಸಂಘಟನೆಗಳು ಮತ್ತು ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ ಎಂದು ಮನವಿ ಮಾಡಿದರು.

ಇದೆ ವೇಳೆ ಕಸಾಪ ಮಾಜಿ ಗೌರವಾಧ್ಯಕ್ಷ ರವಿ ನಾಕಲಗೂಡು ಮಾತನಾಡಿ, ಮಾನವ ಮತ್ತು ಕಾಡಾನೆಗಳ ಸಂಘರ್ಷ ಹಲವು ದಶಕಗಳಿಂದ ನಡೆಯುತ್ತಲೇ ಬಂದಿದ್ದರೂ ಕೂಡ ಶಾಶ್ವತ ಪರಿಹಾರ ಎಂಬುದು ಮರೀಚಿಕೆಯಾಗಿದೆ. ನಮ್ಮನ್ನಾಳುವ ಜನಪ್ರತಿನಿಧಿಗಳು ಮತ್ತು ಸರ್ಕಾರ ಇದಕ್ಕೆ ಶಾಶ್ವತ ಪರಿಹಾರ ಕಂಡು ಹಿಡಿಯುವಲ್ಲಿ ವಿಫಲರಾಗಿದ್ದಾರೆ. ಸಂಘ-ಸಂಸ್ಥೆಗಳು, ಪ್ರತಿನಿತ್ಯ ಹೋರಾಟ ಮಾಡುತ್ತಲೇ ಇದ್ದರೂ ಕೂಡ ಗಮನ ಹರಿಸಬೇಕಾದವರು ಜಾಣಕುರುಡು ಪ್ರದರ್ಶಿಸುತ್ತಿದ್ದಾರೆ. ಜಯ ಕರ್ನಾಟಕ ಸಂಘಟನೆ ನಡೆಸುತ್ತಿರುವ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ಸೂಚಿಸುವುದರ ಜತೆಗೆ ಶಾಶ್ವತ ಪರಿಹಾರಕ್ಕೆ ಸರ್ಕಾರವನ್ನು ಒತ್ತಾಯಿಸಲಾಗುವುದು. ಅದೇ ರೀತಿ ಸಾರ್ವಜನಿಕರು ಮತ್ತು ಸಂಘ-ಸಂಸ್ಥೆಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಇದೊಂದು ಜನಾಂದೋಲನವಾಗಿ ಸರ್ಕಾರದ ಕಣ್ಣು ತೆರೆಸುವ ಕೆಲಸವಾಗಬೇಕು. ಆಗ ಮಾತ್ರ ಸರ್ಕಾರ ಇದರ ಬಗ್ಗೆ ಎಚ್ಚೆತ್ತುಕೊಳ್ಳಲಿದೆ ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಇತ್ತೀಚೆಗೆ ನಿಧನರಾದ ಐಪಿಎಸ್ ಪ್ರೊಬೆಷನರಿ ಅಧಿಕಾರಿ ಹರ್ಷಬರ್ದನ್ ಮತ್ತು ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನಿಧನಕ್ಕೆ ಪ್ರತಿಭಟನಾನಿರತರು ಶ್ರದ್ಧಾಂಜಲಿ ಸಲ್ಲಿಸುವ ಮೂಲಕ ಸಂತಾಪವನ್ನು ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಜಯಕರ್ನಾಟಕ ಜಿಲ್ಲಾಧ್ಯಕ್ಷ ಎಂ.ಕೆ.ಆರ್. ಸೋಮೇಶ್, ರಾಜ್ಯ ಕಾರ್ಯಾಧ್ಯಕ್ಷ ರಾಮಚಂದ್ರಯ್ಯ, ಉಪಾಧ್ಯಕ್ಷ ಮುನಿಸ್ವಾಮಿ, ಪ್ರಧಾನ ಕಾರ್ಯದರ್ಶಿ ಗಗನ್ ರಾಜು, ಮಹಿಳಾ ಸಂಘಟನಾ ಕಾರ್ಯದರ್ಶಿ ದಿವ್ಯಾ ಸೋಮಶೇಖರ್, ಬೇಲೂರು ತಾಲೂಕು ಅಧ್ಯಕ್ಷ ರಾಜು, ಆಲೂರು ಸಂದೇಶ್, ರಾಜ್ಯ ಸಂಘಟನಾ ಕಾರ್ಯದರ್ಶಿ ವಾಸು, ಸಂಗಮ್ ಜಿಲ್ಲಾ ಕಾರ್ಯಾಧ್ಯಕ್ಷ, ಅದ್ಧೂರಿ ಕುಮಾರ್, ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ರಾಜ್ಯ ಸಮಿತಿ ಸದಸ್ಯ ಮಲ್ಲೇಶ್ ಅಂಬೂಗ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net