ಆಯುಷ್ ಆಸ್ಪತ್ರೆ ಶೀಘ್ರವೇ ಲೋಕಾರ್ಪಣೆ- ಶಾಸಕ ಶಾಮನೂರು ಶಿವಶಂಕರಪ್ಪ

SS.jpg
Published on

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಿರುವ ಆಯುಷ್ ಆಸ್ಪತ್ರೆಯನ್ನು ಶೀಘ್ರದಲ್ಲೇ ನಾಗರೀಕರ ಸೇವೆಗೆ ಸಮರ್ಪಿಸಲಾಗುವುದು ಎಂದು ಶಾಸಕ ಡಾ. ಶಾಮನೂರು ಶಿವಶಂಕರಪ್ಪ ತಿಳಿಸಿದರು.

ಆಯುಷ್ ಇಲಾಖೆ ವತಿಯಿಂದ ಜಿಲ್ಲಾ ಪಂಚಾಯತ್‌ರಾಜ್ ಇಂಜಿನಿಯರಿಂಗ್ ಇಲಾಖೆ ಮೂಲಕ 1.50 ಕೋಟಿ ರೂ. ವೆಚ್ಚದಲ್ಲಿ ನಾಗಮ್ಮ ಕೇಶವಮೂರ್ತಿ ಬಡಾವಣೆಯಲ್ಲಿ ಆಯುಷ್ ಇಲಾಖೆಯ ಜಿಲ್ಲಾ ಕಚೇರಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.

ಇದೇ ಸ್ಥಳದಲ್ಲಿ ಆಯುಷ್ ಆಸ್ಪತ್ರೆ ನಿರ್ಮಾಣಕ್ಕೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಭೂಮಿಪೂಜೆ ನಡೆಸಿದ್ದರೂ ಹಣಕಾಸಿನ ವಿಳಂಬದಿಂದ ಕಾಮಗಾರಿ ತಡವಾಯಿತು. ಆಗಿನ ಆರೋಗ್ಯ ಸಚಿವರ ಜತೆ ಮಾತನಾಡಿ ಅನುದಾನ ನೀಡಲಾಗಿದೆ. ಇದೀಗ ಕಾಮಗಾರಿ ಪೂರ್ಣಗೊಂಡಿದ್ದು ಶೀಘ್ರವೇ ಆಸ್ಪತ್ರೆ ಸೇವೆ ಆರಂಭವಾಗಲಿದ್ದು, ಸಾರ್ವಜನಿಕರು ಇದರ ಲಾಭ ಪಡೆಯಬೇಕು ಎಂದರು.

ಸ್ಥಳೀಯ ನಾಗರೀಕರ ಮನವಿಗೆ ಸ್ಪಂದಿಸಿದ ಶಾಸಕರು ನಾಗನೂರು ಗ್ರಾಮದಲ್ಲಿ ಅಪೂರ್ಣಗೊಂಡಿರುವ ಒಳಚರಂಡಿ ವ್ಯವಸ್ಥೆ ಹಾಗೂ ನಾಗಮ್ಮ ಕೇಶವಮೂರ್ತಿ ಬಡಾವಣೆಯಲ್ಲಿ ಸೂರು ಇಲ್ಲದವರಿಗೆ ವಸತಿ ಕಲ್ಪಿಸಲು ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಶಿರಮಗೊಂಡನಹಳ್ಳಿ ಗ್ರಾಪಂ ಅಧ್ಯಕ್ಷೆ ಲೀಲಾ ನಾಗರಾಜಪ್ಪ, ಗ್ರಾಪಂ ಉಪಾಧ್ಯಕ್ಷೆ ಲಲಿತಮ್ಮ, ಸದಸ್ಯ ಎನ್.ಎಂ.ಮಲ್ಲಿಕಾರ್ಜುನ್, ಮಾಜಿ ಸದಸ್ಯರಾದ ಶಿರಮನಹಳ್ಳಿ ರುದ್ರೇಶ್, ನಾಗಮ್ಮ ಕೇಶವಮೂರ್ತಿ ಬಡಾವಣೆಯ ಮಲ್ಲಿಕಾರ್ಜುನ್, ಜಿಲ್ಲಾ ಆಯುಷ್ ಇಲಾಖೆಯ ಅಧಿಕಾರಿ ಡಾ. ಶಂಕರಗೌಡ, ಪಂಚಾಯತ್‌ರಾಜ್ ಇಂಜಿನಿಯರಿಂಗ್ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಪುಟ್ಟಸ್ವಾಮಿ, ಮುಖಂಡರಾದ ಶಶಿಕುಮಾರ್, ಗ್ರಾಪಂ ಸದಸ್ಯರು, ಗ್ರಾಮಸ್ಥರು ಇದ್ದರು.

--

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net