ಆರೋಗ್ಯಯುತ ಜೀವನಕ್ಕೆ ಕ್ರೀಡೆ ಅತ್ಯಂತ ಸಹಕಾರಿ

18rajesh1
Published on

ಚಾಮರಾಜನಗರ: ಆರೋಗ್ಯಕರವಾದ ಜೀವನ ಮತ್ತು ಮಾನಸಿಕ ಸದೃಢತೆಗಾಗಿ ಕ್ರೀಡೆಗಳಲ್ಲಿ ಭಾಗವಹಿಸುವುದು ಅತ್ಯಂತ ಅವಶ್ಯಕವಾಗಿದೆ ಎಂದು ಎಂಎಸ್‌ಐಎಲ್ ಅಧ್ಯಕ್ಷ ಮತ್ತು ಶಾಸಕ ಸಿ.ಪುಟ್ಟರಂಗಶೆಟ್ಟಿ ಸಲಹೆ ನೀಡಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.

ಗ್ರಾಮೀಣ ಭಾಗದ ಯುವಕರು ಪ್ರಸ್ತುತ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಕೂಟಗಳಲ್ಲಿ ಭಾಗವಹಿಸುತ್ತಿದ್ದಾರೆ. ಖೋಖೋ, ಕಬ್ಬಡ್ಡಿ, ವಾಲಿಬಾಲ್ ಪಂದ್ಯಾವಳಿಗಳಲ್ಲಿ ಭಾಗವಹಿಸುವ ಯುವಕರಿಗೆ ದೈಹಿಕ ಸದೃಢತೆಯ ಜತೆಗೆ ಚುರುಕುತನವು ಗೊತ್ತಿರಬೇಕು. ಈ ನಿಟ್ಟಿನಲ್ಲಿ ಯುವಕರು ಓದಿನ ಜತೆಗೆ ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ಉತ್ತಮ ಆರೋಗ್ಯವನ್ನು ಕಪಾಡಿಕೊಳ್ಳಬಹುದಾಗಿದೆ ಎಂದರು.

ಕ್ರೀಡಾಕೂಟದಲ್ಲಿ ಭಾಗಿಯಾಗುವ ತೀರ್ಪುಗಾರರು ಉತ್ತಮ ರೀತಿಯಲ್ಲಿ ತೀರ್ಪು ನೀಡುವ ಮೂಲಕ ನಿಜವಾದ ಮಕ್ಕಳ ಪ್ರತಿಭೆಯನ್ನು ಬೆಂಬಲಿಸಬೇಕು. ಕ್ರೀಡಾಕೂಟದಲ್ಲಿ ಭಾಗವಹಿಸುವವರಿಗೆ ಉದ್ಯೋಗದಲ್ಲಿ ಸಾಕಷ್ಟು ಅವಕಾಶಗಳು ದೊರೆಯುತ್ತವೆ. ತಾಲೂಕು ಮಟ್ಟದಲ್ಲಿ ಜಯಗಳಿಸಿ ಯುವಕ, ಯುವತಿಯರು ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿ ಜಿಲ್ಲೆಗೆ ಉತ್ತಮ ಹೆಸರನ್ನು ತನ್ನಿ ಎಂದು ಹಾರೈಸಿದರು.

ಜಿಲ್ಲಾ ಕ್ರೀಡಾಂಗಣ ಸಮಿತಿ ಸದಸ್ಯ ವಿ.ಶ್ರೀನಿವಾಸ್‌ಪ್ರಸಾದ್ ಮಾತನಾಡಿ, ಜಿಲ್ಲೆಯ ಗ್ರಾಮೀಣ ಭಾಗದ ಕ್ರೀಡಾಪಟುಗಳಲ್ಲಿ ರಾಷ್ಟ್ರ ಮಟ್ಟವನ್ನು ಪ್ರತಿನಿಧಿಸುವಂತಹ ಸಾಮರ್ಥ್ಯವಿದೆ. ಅಂತಹ ಕ್ರೀಡಾಪಟುಗಳಿಗೆ ಅಗತ್ಯವಾದ ಕ್ರೀಡಾಂಗಣಗಳು ಇಲ್ಲ. ಈ ನಿಟ್ಟಿನಲ್ಲಿ ಕ್ರೀಡಾಪಟುಗಳಿಗೆ ಸುಸಜ್ಜಿತವಾದ ಕ್ರೀಡಾಂಗಣಗಳನ್ನು ನಿರ್ಮಾಣ ಮಾಡಿ, ಮೂಲ ಸೌಕರ್ಯ ಕಲ್ಪಿಸಬೇಕು ಎಂದು ಹೇಳಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಕೆ.ಸುರೇಶ್ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿರುವ ಯುವಕರ ಕ್ರೀಡಾ ಮತ್ತು ಸಾಂಸ್ಕೃತಿಕ ಪ್ರತಿಭೆಯನ್ನು ಅನಾವರಣಗೊಳಿಸುವ ಪ್ರಯತ್ನ ಇದಾಗಿದೆ. ಗ್ರಾಮೀಣ ಭಾಗದ ಯುವಕ-ಯುವತಿಯರು ಉತ್ತಮ ರೀತಿಯಲ್ಲಿ ಪ್ರದರ್ಶನ ನೀಡುವ ಮೂಲಕ ಜಿಲ್ಲೆಗೆ ಹೆಸರು ತರಬೇಕು ಎಂದು ಹಾರೈಸಿದರು.

ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಣ ಪರಿವೀಕ್ಷಕ ಬಸವರಾಜು, ತಾಲೂಕು ದೈಹಿಕ ಶಿಕ್ಷಣ ಸಂಘ ಅಧ್ಯಕ್ಷ ನಟರಾಜ್, ಗೌರವಾಧ್ಯಕ್ಷ ಮೋಹನ್ ಕುಮಾರ್, ಶಿವಮಲ್ಲು, ಜಿಲ್ಲಾ ಯುವ ಪ್ರಶಸ್ತಿ ಪುರಸ್ಕೃತ ಜಿ.ಬಂಗಾರು ಹಾಗೂ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net