ಆರ್‌ಒ ಘಟಕಗಳ ದುರಸ್ತಿಗೆ ಡಿಸಿ ತಾಕೀತು

IMG_0063--00002
Published on

ಚಿತ್ರದುರ್ಗ: ಜಿಲ್ಲೆಯಲ್ಲಿ ಸ್ಥಗಿತಗೊಂಡಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಕೂಡಲೇ ದುರಸ್ತಿಗೊಳಿಸಿ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚಿಸಿದರು.
ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆ ಜು.8ರಿಂದ 2 ದಿನಗಳ ಕಾಲ ಬೆಂಗಳೂರಲ್ಲಿ ನಡೆಯಲಿರುವ ಡಿಸಿ, ಜಿಪಂ ಸಿಇಒಗಳ ಸಮ್ಮೇಳನ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಜಿಲ್ಲೆಯ ಜನರಿಗೆ ಶುದ್ಧ ಕುಡಿಯುವ ನೀರನ್ನು ಪೂರೈಸುವುದು ಮೊದಲ ಆದ್ಯತೆ ಆಗಬೇಕು. ಆರ್‌ಒಗಳನ್ನು ತಕ್ಷಣ ಸರಿಪಡಿಸಬೇಕು. ಕುಡಿಯುವ ನೀರಿನ ವಿತರಣಾ ಜಾಲವೂ ಸಮರ್ಪಕವಾಗಿರ ಬೇಕು. ಜಲಜೀವನ್ ಮಿಷನ್ ಯೋಜನೆಯಡಿ ಎಲ್ಲ ಶಾಲೆ, ಅಂಗನವಾಡಿ ಹಾಗೂ ವಸತಿ ನಿಲಯಗಳಿಗೆ ಕುಡಿಯುವ ನೀರು ಸಂಪರ್ಕ ಕಲ್ಪಿಸಬೇಕು ಎಂದು ಸೂಚಿಸಿದರು.
ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಎಷ್ಟು ನೀರಿನ ಸ್ಯಾಂಪಲ್ಸ್‌ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂಬುದರ ವರದಿ ಸಲ್ಲಿಸಬೇಕು. ಕವಾಡಿಗರಹಟ್ಟಿಯಲ್ಲಾದ ಕಲುಷಿತ ನೀರು ಸೇವನೆಯಂಥ ದುರ್ಘಟನೆಗಳು ಮರುಕಳಿಸಬಾರದೆಂದು ಎಚ್ಚರಿಸಿದರು.
ಡಿಎಚ್‌ಒ ಡಾ.ಜಿ.ಪಿ.ರೇಣುಪ್ರಸಾದ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಜಿಪಂ ಸಿಇಒ ಎಸ್.ಜೆ.ಸೋಮಶೇಖರ್, ಎಸಿ ಎಂ.ಕಾರ್ತಿಕ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net