ಆಲೂರು: ಸಕಲೇಶಪುರ ಮೀಸಲು ವಿಧಾನಸಭಾ ಕ್ಷೇತ್ರಕ್ಕೆ ಸೇರಿರುವ ಆಲೂರು ತಾಲೂಕಿನಲ್ಲಿಯೂ ಕೈ ಬಲಪಡಿಸಿದರೆ ಅಭ್ಯರ್ಥಿಯ ಗೆಲುವು ಸುಲಭವಾಗುತ್ತದೆ ಎಂಬ ಕಾರಣಕ್ಕೆ ಕಾಂಗ್ರೆಸ್ ನಾಯಕರು ಈ ಭಾಗಕ್ಕೆ ಹೆಚ್ಚಿನ ಒತ್ತು ನೀಡಿದ್ದು. ಪ್ರಜಾಧ್ವನಿ ಕಾರ್ಯಕ್ರಮ ನಡೆಸಲು ಪಟ್ಟಣದಲ್ಲಿ ಬೃಹತ್ ವೇದಿಕೆ ಹಾಕಲಾಗಿದೆ.
ಫೆ.28ರಂದು ಬೆಳಗ್ಗೆ 11 ಗಂಟೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಪ್ರಜಾಧ್ವನಿ ಯಾತ್ರೆ ಬಸ್ ಪಟ್ಟಣಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕೈ ಕಾರ್ಯಕರ್ತರು ಒಟ್ಟಾಗಿ ಸೇರಿ ಕೊನೆಪೇಟೆಯ ಬಿಕ್ಕೋಡು ರಸ್ತೆಯಲ್ಲಿರುವ ಖಾಸಗಿ ವ್ಯಕ್ತಿಯ ಜಮೀನಿನಲ್ಲಿ ಸಮಾವೇಶಕ್ಕೆ ಸಕಲ ಸಿದ್ಧತೆ ಮಾಡುತ್ತಿದ್ದಾರೆ.
ಜೆಡಿಎಸ್ ಕೋಟೆಯಲ್ಲಿ ಕೈ ಬಲಪಡಿಸುವ ತಂತ್ರ ರೂಪಿಸಿರುವ ಕಾಂಗ್ರೆಸ್ ವರಿಷ್ಠರು ಈಗಾಗಲೇ ಹಲವು ಬಾರಿ ಜಿಲ್ಲೆಗೆ ಆಗಮಿಸಿ ಕಾರ್ಯಕರ್ತರು ಹಾಗೂ ಪ್ರಮುಖ ಮುಖಂಡರೊಂದಿಗೆ ಸಭೆ ನಡೆಸಿದ್ದಾರೆ. ಅಲ್ಲದೆ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಏರ್ಪಟ್ಟಿರುವ ಗೊಂದಲ ಶಮನ ಮಾಡಿ ಗೆಲ್ಲುವ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಈ ಬಾರಿ ಜಿಲ್ಲೆಯಲ್ಲಿ ಖಾತೆ ತೆರೆಯಲೇಬೇಕು ಎಂಬ ಕಾರಣಕ್ಕೆ ಸಾಕಷ್ಟು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗುತ್ತಿದೆ.
ಬಸ್ ಯಾತ್ರೆಯಲ್ಲಿ ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಮಾಜಿ ಸಚಿವ ಎಚ್.ಎಂ.ರೇವಣ್ಣ, ಸಂಸದ ಡಿ.ಕೆ. ಸುರೇಶ್, ಪಕ್ಷದ ಜಿಲ್ಲಾ ಉಸ್ತುವಾರಿ ಆರ್.ಧ್ರುವನಾರಾಯಣ ಸೇರಿದಂತೆ ಪಕ್ಷದ ಜಿಲ್ಲಾಧ್ಯಕ್ಷ ಈ.ಎಚ್.ಲಕ್ಷ್ಮಣ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಎಸ್.ಕುಮಾರಸ್ವಾಮಿ ಹಾಗೂ ತಾಲೂಕು ಕಾಂಗ್ರೆಸ್‌ನ ಹಲವು ಮುಖಂಡರು ಭಾಗಿಯಾಗಲಿದ್ದಾರೆ.