ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ASHA2-----
Published on

ಚಿತ್ರದುರ್ಗ: ಆಶಾ ಕಾರ್ಯಕರ್ತೆಯರಿಗೆ ಮಾಸಿಕ 15 ಸಾವಿರ ರೂ. ನಿಶ್ಚಿತ ಗೌರವಧನ ನೀಡುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಸಮಿತಿ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿತು.

ನಗರದ ಪ್ರವಾಸಿ ಮಂದಿರದಿಂದ ಮೆರವಣಿಗೆ ಹೊರಟ ಕಾರ್ಯಕರ್ತೆಯರು ಘೋಷಣೆ ಕೂಗುತ್ತ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

ಆಶಾ ಕಾರ್ಯಕರ್ತೆಯರು ಬಡವರಿಗೆ ಆರೋಗ್ಯ ಸೇವೆ ಒದಗಿಸಲು ಹಗಲಿರುಳು ಶ್ರಮಿಸುತ್ತಿದ್ದಾರೆ. ನಿರ್ವಹಿಸಿದ ಕೆಲಸಗಳು ಆಶಾನಿಧಿ ಪೋರ್ಟಲ್‌ನಲ್ಲಿ ದಾಖಲಾಗದೆ ಕಳೆದ 8 ವರ್ಷಗಳಿಂದ ಪ್ರೋತ್ಸಾಹಧನ ಸಿಗುತ್ತಿಲ್ಲ. ಹಲವು ಸಮಸ್ಯೆಗಳಿಂದ ಕಾರ್ಯಕರ್ತೆಯರಿಗೆ ಅನ್ಯಾಯವಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.

ಕಳೆದ ವರ್ಷ ಬೆಂಗಳೂರಿನಲ್ಲಿ ಹೋರಾಟ ನಡೆಸಿದ ಸಂದರ್ಭದಲ್ಲಿ ಸರ್ಕಾರ ನೀಡಿದ ಭರವಸೆ ಹುಸಿಯಾಗಿದೆ. ಸಮಸ್ಯೆಗಳ ನಿವಾರಣೆಗೆ ನಿರಂತರ ಮನವಿ ಸಲ್ಲಿಸಿದರೂ ಸರ್ಕಾರ ಮತ್ತು ಇಲಾಖೆ ಸಂಪೂರ್ಣ ನಿರ್ಲಕ್ಷೃ ವಹಿಸಿವೆ. ಆದ್ದರಿಂದ ಜ.7 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯಮಟ್ಟದ ಅನಿರ್ದಿಷ್ಟಾವಧಿ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಆಶಾ ಕಾರ್ಯಕರ್ತೆಯರ ಹೆಚ್ಚುವರಿ ಕೆಲಸ ಹಾಗೂ ನಗರ ಜೀವನದ ದುಬಾರಿ ಖರ್ಚು ವೆಚ್ಚಗಳಿಗೆ ಅನುಗುಣವಾಗಿ ಕನಿಷ್ಠ 2 ಸಾವಿರ ರೂ. ಗೌರವಧನ ಹೆಚ್ಚಿಸಬೇಕು. 2-3 ತಿಂಗಳಿಂದ ಬಾಕಿ ಇರುವ ಪ್ರೋತ್ಸಾಹಧನ ಕೂಡಲೇ ಬಿಡುಗಡೆ ಮಾಡಬೇಕು. ಸೇವಾ ನಿವೃತ್ತಿ ಪಡೆಯುವ ಕಾರ್ಯಕರ್ತೆಯರಿಗೆ ಪಶ್ಚಿಮ ಬಂಗಾಳದಲ್ಲಿ ಇರುವಂತೆ 5 ಲಕ್ಷ ರೂ. ನೀಡಬೇಕು ಎಂದು ಒತ್ತಾಯಿಸಿದರು.

ಕಾರ್ಯಕರ್ತೆಯರಿಗೆ ಪ್ರತಿವರ್ಷ ಆರೋಗ್ಯ ತಪಾಸಣೆ ಮಾಡಬೇಕು. ತೀವ್ರ ಕಾಯಿಲೆಗಳಿದ್ದಲ್ಲಿ ಉಚಿತ ಚಿಕಿತ್ಸೆ ನೀಡಬೇಕು. ಕಾರ್ಮಿಕರೆಂದು ಪರಿಗಣಿಸಿ ಕನಿಷ್ಠ ವೇತನ, ಗ್ರಾೃಚುಟಿ, ಪಿಎಫ್, ಇಎಸ್‌ಐ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಎಐಯುಟಿಯುಸಿ ಸಂಚಾಲಕ ಎಚ್. ರವಿಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ 1400 ಜನ ಆಶಾ ಕಾರ್ಯಕರ್ತೆಯರು ಆರೋಗ್ಯ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದು, ಗ್ರಾಮೀಣ ಜನರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ. ಸರ್ಕಾರ ಮೀನಮೇಷ ಎಣಿಸದೆ ಬೇಡಿಕೆ ಪರಿಗಣಿಸಬೇಕು ಎಂದು ಒತ್ತಾಯಿಸಿದರು.

ಸಂಘದ ಜಿಲ್ಲಾಧ್ಯಕ್ಷೆ ಗಿರಿಜಮ್ಮ, ಗುರುಶಾಂತಾ, ಲಕ್ಷ್ಮಿ, ಮಂಜುಳಾ, ಮೀನಾಕ್ಷಮ್ಮ, ನಾಗವೇಣಿ ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net