

ಚಾಮರಾಜನಗರ: ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಳ ಸಂಬಂಧ ಕೂಡಲೇ ಆದೇಶವನ್ನು ನೀಡಬೇಕು ಎಂದು ಆಗ್ರಹಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಶುಕ್ರವಾರ ಜಮಾಯಿಸಿದ ಪ್ರತಿಭಟನಾಕಾರರು, ಕೆಲಕಾಲ ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷೆ ಕವಿತಾ ಮಾತನಾಡಿ, ಆಶಾ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಳ ಮಾಡುವಂತೆ ಜ.7 ರಿಂದ 10 ರವರೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಹೋರಾಟವನ್ನು ನಡೆಸಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಭರವಸೆ ನೀಡಿದ್ದರು. ಅದರಂತೆ ಏಪ್ರಿಲ್ ತಿಂಗಳಿಂದ ಎಲ್ಲಾ ಆಶಾ ಕಾರ್ಯಕರ್ತೆಯರಿಗೂ ಪ್ರೋತ್ಸಾಹ ಧನ ಸೇರಿಸಿ ಕನಿಷ್ಟ 10,000 ರೂ, ಗೌರವಧನವನ್ನು ನೀಡುವ ಕುರಿತು ಆದೇಶವನ್ನು ನೀಡಬೇಕು ಎಂದು ಒತ್ತಾಯಿಸಿದರು.
ಹೆಚ್ಚುವರಿ ಕೆಲಸದ ಆಧಾರದ ಮೇಲೆ ಹೆಚ್ಚುವರಿ ಇನ್ಸೆಂಟಿವ್ ಕೂಡ ನೀಡಬೇಕು. ಒಂದು ವೇಳೆ ಯಾರಿಗಾದರೂ ಕೊಂಪೋನೆಂಟ್ಸ್ ಕಡಿಮೆ ಮೊತ್ತದ ಪ್ರೋತ್ಸಾಹ ಧನ ಬಂದಿದ್ದಲ್ಲಿ, ಅಂತಹ ಆಶಾ ಕಾರ್ಯಕರ್ತೆಯರಿಗೆ ಸರ್ಕಾರವೇ ವ್ಯತ್ಯಾಸದ ಹಣವನ್ನು ಪಾವತಿಸಿ, 10,000 ರೂ, ಗ್ಯಾರಂಟಿ ದೊರೆಯುವಂತೆ ಕ್ರಮಕೈಗೊಳ್ಳಬೇಕು. ರಾಜ್ಯದ ಸುಮಾರು 2,50,000 ಅಂಗನವಾಡಿ-ಬಿಸಿಯೂಟ ಕಾರ್ಯಕರ್ತೆಯರಿಗೆ 1000 ರೂ, ಹೆಚ್ಚಿಸಿದಂತೆ 42000 ಆಶಾ ಕಾರ್ಯಕರ್ತೆಯರಿಗೂ 1000 ರೂ, ಹೆಚ್ಚಳ ಮಾಡಿ ಆದೇಶಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಉಪಾಧ್ಯಕ್ಷೆ ಉಮಾದೇವಿ, ಜಿಲ್ಲಾ ಕಾರ್ಯದರ್ಶಿ ಚೆನ್ನಂಜಮ್ಮ, ಭಾಗ್ಯ, ಮಂಜುಳಾ, ನಂಜರಾಣಿ ಹಾಗೂ ಇತರರು ಭಾಗವಹಿಸಿದ್ದರು.