ಆಶ್ರಯ ಯೋಜನೆ ಜಮೀನು ಪ್ರಸ್ತಾವನೆಗೆ ವಾರದ ಗಡುವು

ctd asahraya.....
Published on

ಚಿತ್ರದುರ್ಗ: ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಿವೇಶನ ರಹಿತರಿಗೆ ಆಶ್ರಯ ಯೋಜನೆಯಡಿ ನಿವೇಶನ ಒದಗಿಸಲು ಸರ್ಕಾರಿ ಜಮೀನು ಗುರುತಿಸಿ ಅದರ ಮಂಜೂರಾತಿಗೆ ವಾರದೊಳಗೆ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅಧಿಕಾರಿಗಳಿಗೆ ಗಡುವು ನೀಡಿದ ರು.

ಡಿಸಿ ಕಚೇರಿಯಲ್ಲಿ ಬುಧವಾರ ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆಶ್ರಯ ಯೋಜನೆ, ಸ್ಮಶಾನ, ಅಂಗನವಾಡಿ, ಶಾಲೆಗಳಿಗೆ ಜಮೀನು ಮಂಜೂರಾತಿ ಕುರಿತ ಸಭೆಯಲ್ಲಿ ಮಾತನಾಡಿದರು.

ನಿವೇಶನ ರಹಿತ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಜತೆಗೆ ಸ್ಮಶಾನ, ಅಂಗನವಾಡಿ ಹಾಗೂ ಶಾಲೆಗಳಿಗೂ ಸಹ ಜಮೀನು ಮೀಸಲಿರಿಸಿ ಪ್ರಸ್ತಾವನೆ ಸಲ್ಲಿಸಬೇಕು. ಒಂದು ವೇಳೆ ಸರ್ಕಾರಿ ಜಮೀನು ಲಭ್ಯವಿಲ್ಲದಿದ್ದಲ್ಲಿ ಖಾಸಗಿ ಜಮೀನು ಖರೀದಿಗೆ ಸಂಬಂಧಿಸಿದಂತೆ ತಹಸೀಲ್ದಾರ್ ಹಾಗೂ ತಾಪಂ ಇಒಗೆ ಗ್ರಾಮವಾರು ಪ್ರಸ್ತಾವನೆ ಸಲ್ಲಿಸಬೇಕು. ಗ್ರಾಮಸಭೆ ಮೂಲಕ ಫಲಾನುಭವಿಗಳನ್ನು ಬಹಳ ಎಚ್ಚರಿಕೆಯಿಂದ ಆಯ್ಕೆ ಮಾಡಬೇಕು ಎಂದು ತಿಳಿಸಿದರು.

ನಿವೇಶನ ರಹಿತ ಫಲಾನುಭವಿಗಳಿಗೆ ಅನುಗುಣವಾಗಿ ಸರ್ಕಾರಿ ಜಮೀನು ಲಭ್ಯವಿದ್ದಲ್ಲಿ ತಹಸೀಲ್ದಾರ್ ಅವರು ಜಮೀನು ಮಂಜೂರಾತಿ ಆದೇಶ ಪ್ರತಿ, ಸ್ಕೆಚ್ ಹಾಗೂ ಪಹಣಿಯನ್ನು ಸಂಬಂಧಿಸಿದ ಗ್ರಾಪಂ ಪಿಡಿಒಗಳಿಗೆ ಕೊಡಬೇಕು. ಪಿಡಿಒಗಳು ಅಗತ್ಯ ದಾಖಲೆಗಳೊಂದಿಗೆ ರಾಜೀವ್‌ಗಾಂಧಿ ವಸತಿ ಯೋಜನೆಯ ಪೋರ್ಟ್‌ಲ್‌ನಲ್ಲಿ ಎಂಟ್ರಿ ಮಾಡಿ, ಹಕ್ಕುಪತ್ರ ವಿತರಿಸಲು ಕ್ರಮವಹಿಸಬೇಕು ಎಂದು ತಿಳಿಸಿದರು.

ಸರ್ಕಾರಿ ಜಮೀನು ಒತ್ತುವರಿ ತಡೆಗೆ ಸಂಬಂಧಿಸಿದ ಅಧಿಕಾರಿಗಳು ಕಾಲಕಾಲಕ್ಕೆ ಒತ್ತುವರಿ ತೆರವು ಸಮಿತಿ ಸಭೆಗಳನ್ನು ನಡೆಸಬೇಕು. ಒಂದು ವೇಳೆ ಸರ್ಕಾರಿ ಜಮೀನು ಒತ್ತುವರಿಯಾಗಿದ್ದರೆ ತಕ್ಷಣವೇ ಒತ್ತುವರಿ ತೆರವಿಗೆ ಕ್ರಮವಹಿಸಬೇಕೆಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಪಂ ಸಿಇಒ ಎಸ್.ಜೆ. ಸೋಮಶೇಖರ್, ಎಡಿಸಿ ಬಿ.ಟಿ. ಕುಮಾರಸ್ವಾಮಿ, ಎಸಿ ಮೆಹಬೂಬ್ ಜಿಲಾನಿ ಖುರೇಷಿ, ಚಳ್ಳಕೆರೆ ತಹಸೀಲ್ದಾರ್ ರೆಹಾನ್‌ಪಾಷಾ, ಚಿತ್ರದುರ್ಗ ತಹಸೀಲ್ದಾರ್ ಗೋವಿಂದರಾಜು, ಚಿತ್ರದುರ್ಗ ತಾಪಂ ಇಒ ವೈ. ರವಿಕುಮರ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net