

ಮೈಸೂರು: ಕಡೆಯ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ರಸ್ತೆ, ವೃತ್ತಗಳಲ್ಲಿ ಚಾಮುಂಡೇಶ್ವರಿ ಭಾವಚಿತ್ರವಿರಿಸಿ, ಪೂಜೆ ಸಲ್ಲಿಸಿ, ಸಾರ್ವಜನಿಕರಿಗೆ ಪ್ರಸಾದ ವಿತರಣೆ ಮಾಡಲಾಯಿತು.ಸಿದ್ದಾರ್ಥ ಬಡಾವಣೆ, ಅಗ್ರಹಾರ, ಚಾಮುಂಡಿಪುರಂ, ವಿದ್ಯಾರಣ್ಯಪುರಂ, ಚಾಮರಾಜ ಜೋಡಿ ರಸ್ತೆ, ಎಂ.ಜಿ.ರಸ್ತೆ, ಕೆ.ಜಿ.ಕೊಪ್ಪಲು, ಕುವೆಂಪುನಗರ, ಶ್ರೀರಾಂಪುರ, ಒಂಟಿಕೊಪ್ಪಲು, ಇಲವಾಲ, ಹೂಟಗಳ್ಳಿ, ಹಿನಕಲ್, ಆಲನಹಳ್ಳಿ, ಹೆಬ್ಬಾಳ, ಕುಂಬಾರಕೊಪ್ಪಲು ಸೇರಿದಂತೆ ನಗರದ ಹಲವೆಡೆ ಪ್ರಸಾದ ವಿತರಣೆ ಮಾಡಲಾಯಿತು. ಸಾರ್ವಜನಿಕರು ಸಾಲಿನಲ್ಲಿ ಪ್ರಸಾದ ಸ್ವೀಕರಿಸಿದರು.
ಸುತ್ತೂರು ಶ್ರೀಗಳಿಂದ ವಿತರಣೆ
ಆಷಾಢ ಮಾಸದ ಕೊನೆಯ ಶುಕ್ರವಾರದ ಹಿನ್ನಲೆಯಲ್ಲಿ ಚಾಮುಂಡಿಬೆಟ್ಟ ತಪ್ಪಲಿನ ಸುತ್ತೂರು ಶಾಖಾ ಮಠದಲ್ಲಿ ಪ್ರತಿ ವರ್ಷದಿಂದ ಈ ಬಾರಿಯೂ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.ಮೆಟ್ಟಿಲುಗಳ ಮೂಲಕ ಬೆಟ್ಟಕ್ಕೆ ಹೋಗುವ ಸಾವಿರಾರು ಭಕ್ತರು ಮಠಕ್ಕೆ ತೆರಳಿ ಪ್ರಸಾದ ಸ್ವೀಕರಿಸಿದರು. ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಪ್ರಸಾದ ವಿತರಣೆಗೆ ಚಾಲನೆ ನೀಡಿದರು.