

ಎನ್.ಆರ್.ಪುರ: ತಾಲೂಕಿನಲ್ಲಿ 142 ಜನರು ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ. ನಾವು ದಿನನಿತ್ಯ ಸೇವಿಸುವ ಆಹಾರ, ಮಾನಸಿಕ ಒತ್ತಡ ಸಮತೋಲನದಲ್ಲಿ ಇಡುವುದರಿಂದ ಕ್ಯಾನ್ಸರ್ ತಡೆಗಟ್ಟಬಹುದು. ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದರೆ ಕಾಲ ಕಾಲಕ್ಕೆ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಪಿ.ಪಿ.ಬೇಬಿ ತಿಳಿಸಿದರು.
ಮಂಗಳವಾರ ಅರಳಿಕೊಪ್ಪ ಗ್ರಾಮದಲ್ಲಿ ಸೋಷಿಯಲ್ ವೆಲ್ಫೇರ್ ಸೊಸೈಟಿ, ಆರೋಗ್ಯ ಇಲಾಖೆಯಿಂದ ನಡೆದ ಮಾಹಿತಿ ಕಾರ್ಯಕ್ರಮದಲ್ಲಿ ಕ್ಯಾನ್ಸರ್ ಕುರಿತು ಮಾಹಿತಿ ನೀಡಿ, ಫೆ.4 ವಿಶ್ವ ಕ್ಯಾನ್ಸರ್ ದಿನವಾಗಿದೆ. ಹೆಣ್ಣು ಮಕ್ಕಳಲ್ಲಿ ಸ್ತನ ಕ್ಯಾನ್ಸರ್, ಗರ್ಭಕೋಶದ ಕ್ಯಾನ್ಸರ್ ಹೆಚ್ಚಾಗಿ ಕಂಡುಬರುತ್ತಿದೆ. ಆದ್ದರಿಂದ ಮಹಿಳೆಯರು ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದರು.
ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ರೋಹಿತ್ ಮಾತನಾಡಿ, ತೋಟಗಾರಿಕೆ ಇಲಾಖೆಯಿಂದ ಜೇನು ಸಾಕಣೆ, ಅಣಬೆ ಬೆಳೆಯಲು ತರಬೇತಿ ಹಾಗೂ ಸಬ್ಸಿಡಿ ಸಿಗಲಿದೆ. ಅಡಕೆ ಬೆಳೆಗೆ ಹನಿ ನೀರಾವರಿ ಅಳವಡಿಸಿಕೊಳ್ಳಲು, ಕಾಳುಮೆಣಸು ಬೆಳೆಗೂ ಸಹಾಯಧನ ನೀಡುತ್ತೇವೆ. ವರ್ಷವಿಡೀ ತಾಳೆ ಬೆಳೆಯಬಹುದು. ತಾಳೆ ಬೆಳೆಗೂ ಸಹಾಯಧನ ನೀಡುತ್ತೇವೆ. ಬಿಪಿಎಲ್ ಕಾರ್ಡ್ ಹೊಂದಿರುವ ಸಣ್ಣ ರೈತರಿಗೆ ತೋಟಗಾರಿಕೆ ಇಲಾಖೆಯಿಂದ ವಿವಿಧ ಸೌಲಭ್ಯಗಳಿದ್ದು ಇದನ್ನು ಉಪಯೋಗಿಸಿಕೊಳ್ಳಿ ಎಂದು ತಿಳಿಸಿದರು.
ಸೋಷಿಯಲ್ ವೆಲ್ಫೇರ್ ಸೊಸೈಟಿ ಕಾರ್ಯಕ್ರಮ ಸಂಯೋಜಕ ಪ್ರಭಾಕರ್ ಮಾತನಾಡಿ, ನಮ್ಮ ಸಂಸ್ಥೆಯಿಂದ ಸ್ವಸಹಾಯ ಸಂಘದವರಿಗಾಗಿ 30 ವರ್ಷಗಳಿಂದಲೂ ಹಲವಾರು ಸಮಾಜಮುಖಿ ಕಾರ್ಯಕ್ರಮ ನಡೆಸುತ್ತ ಬಂದಿದ್ದೇವೆ. ವಿಶೇಷವಾಗಿ ಮಹಿಳೆಯರಿಗೆ ಉದ್ಯೋಗ ತರಬೇತಿ, ಆರ್ಥಿಕ ಸ್ವಾವಲಂಬನೆಗಾಗಿ ಕಾರ್ಯಕ್ರಮ ರೂಪಿಸಿದ್ದೇವೆ ಎಂದರು.
ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರದ ಆಪ್ತ ಸಮಾಲೋಚಕಿ ಶಶಿಕಲಾ ಮಾತನಾಡಿ, ಮಹಿಳೆಯರು ಸಮಸ್ಯೆ ಇದ್ದಾಗ ಉಚಿತವಾಗಿ ಮಹಿಳಾ ಸಾಂತ್ವನ ಕೇಂದ್ರದ ಸಹಾಯವಾಣಿ ಸಂಖ್ಯೆ 181ಕ್ಕೆ ಕರೆ ಮಾಡಬಹುದು. ಕೆಲಸದ ಸಮಯದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ತಡೆಗಟ್ಟಲು ಮತ್ತು ಪರಿಹರಿಸಲು ಕಾಯ್ದೆಗಳಿವೆ. ಉಚಿತ ಕಾನೂನು ಸೇವಾ ಪ್ರಾಧಿಕಾರಕ್ಕೆ ದೂರು ನೀಡಿದರೆ ಕಾನೂನು ಸೇವೆ ನೀಡುತ್ತಾರೆ ಎಂದರು.
ಸರ್ಕಾರಿ ಆಸ್ಪತ್ರೆಯ ಮಂಜಳಾ ಆಯುಷ್ಮಾನ್ ಭಾರತ್ ಯೋಜನೆ ಮಾಹಿತಿ ನೀಡಿದರು. ಗುಬ್ಬಿಗಾ ಗ್ರಾಪಂ ಸದಸ್ಯೆ ಜಯಂತಿ, ಆರೋಗ್ಯ ಇಲಾಖೆಯ ನಾಗಲತಾ, ದೀಕ್ಷಾ, ಅರುಣಾಕ್ಷಿ, ಶಿಲ್ಪಾ ಇದ್ದರು.