ಆಹಾರದಲ್ಲಿ ಸಿರಿ ಧಾನ್ಯಗಳ ಬಳಕೆಯಿಂದ ಆರೋಗ್ಯ ವೃದ್ಧಿ

16 ckm 12
ಚಿಕ್ಕಮಗಳೂರಿನ ತಾಲೂಕು ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ನಡೆದ ಸಿರಿಧಾನ್ಯ ನಡಿಗೆ ಜಾಥದಲ್ಲಿ ಶಾಸಕ ಎಚ್.ಡಿ.ತಮ್ಮಯ್ಯ ಎತ್ತಿನ ಗಾಡಿಯಲ್ಲಿ ತೆರಳುವ ಮೂಲಕ ಗಮನ ಸೆಳೆದರು. ಡಿಸಿ ಮೀನಾ ನಾಗರಾಜ್, ಸಿಇಒ ಎಚ್.ಎಸ್.ಕೀರ್ತನಾ, ಕರ್ನಾಟಕ ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮ ಅಧ್ಯಕ್ಷ ಬಿ.ಎಚ್.ಹರೀಶ್, ಜಂಟಿ ಕೃಷಿ ನಿರ್ದೇಶಕಿ ಸುಜಾತ ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ದಿನನಿತ್ಯದ ಆಹಾರ ಪದ್ಧತಿಯಲ್ಲಿ ಹೆಚ್ಚು ಸಿರಿಧಾನ್ಯ ಪದಾರ್ಥಗಳನ್ನು ಬಳಸುವುದರಿಂದ ಅನೇಕ ರೋಗ ರುಜಿನಗಳಿಂದ ಮುಕ್ತರಾಗಿ ಆರೋಗ್ಯವಾಗಿರಲು ಸಾಧ್ಯ ಎಂದು ಶಾಸಕ ಎಚ್.ಡಿ.ತಮ್ಮಯ್ಯ ತಿಳಿಸಿದರು.

ಜಿಲ್ಲಾಡಳಿತ, ಜಿಪಂ, ಕೃಷಿ ಇಲಾಖೆ ಆಶ್ರಯದಲ್ಲಿ ಶನಿವಾರ ನಗರದ ತಾಲೂಕು ಕಚೇರಿಯಿಂದ ಜಿಲ್ಲಾಧಿಕಾರಿ ಕಛೇರಿ ಆವರಣದವರೆಗೆ ಆಯೋಜಿಸಿದ ಸಿರಿಧಾನ್ಯ ಮತ್ತು ಸಾವಯವ ಉತ್ಪನ್ನ ಕುರಿತು ಗ್ರಾಹಕರಲ್ಲಿ ಅರಿವು ಮೂಡಿಸುವ ಪ್ರಯುಕ್ತ ಸಿರಿಧಾನ್ಯ ನಡಿಗೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ವರ್ಷದಿಂದ ವರ್ಷಕ್ಕೆ ದೇಶದಲ್ಲಿ ಸಿರಿಧಾನ್ಯದ ಮಹತ್ವ ಹೆಚ್ಚುತ್ತಿದೆ. ಭಾರತವು ಸಿರಿಧಾನ್ಯಗಳ ತವರೂರಾಗಿದೆ. ಜಗತ್ತಿನಲ್ಲಿ ಬೆಳೆಯುವ ಸಿರಿಧಾನ್ಯಗಳ ಪೈಕಿ ಶೇ. ೪೨ರಷ್ಟು ಸಿರಿಧಾನ್ಯವನ್ನು ನಮ್ಮ ದೇಶದಲ್ಲೇ ಬೆಳೆಯಲಾಗುತ್ತಿದೆ. ಸಿರಿಧಾನ್ಯ ಬೆಳೆಯುವಲ್ಲಿ ನಮ್ಮ ರಾಜ್ಯ ಮುಂದಿದೆ ಎಂದು ತಿಳಿಸಿದರು.

ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವವರಿಗೆ ಸಿರಿಧಾನ್ಯ ಅತ್ಯುತ್ತಮ ಔಷಧಿಯಾಗಿದೆ. ಬಹಳ ಕಡಿಮೆ ನೀರಿನಲ್ಲೂ ಸಿರಿಧಾನ್ಯವನ್ನು ಬೆಳೆಯಬಹುದಾಗಿದೆ. ರೋಗಮುಕ್ತ ಜೀವನಕ್ಕಾಗಿ ಎಲ್ಲರೂ ಸಿರಿ ಧಾನ್ಯಗಳ ಬಳಕೆಗೆ ಮುಂದಾಗಬೇಕು. ಸಿರಿಧಾನ್ಯಗಳು ಭೂಮಿಗೂ ವರದಾನ, ಆರೋಗ್ಯಕ್ಕೂ ವರದಾನ ಎಂದು ಹೇಳಿದರು.

ಅತ್ಯಧಿಕವಾದ ನಾರಿನ ಅಂಶ ಸೇರಿದಂತೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಸತ್ವಗಳು, ಪ್ರೋಟೀನ್, ಕ್ಯಾಲ್ಶಿಯಂ ಮತ್ತು ಕಬ್ಬಿಣದ ಅಂಶಗಳು, ಶಕ್ಕರ, ಪಿಸ್ತಗಳನ್ನು ಯಥೇಚ್ಛವಾಗಿ ಸಿರಿಧಾನ್ಯಗಳು ಹೊಂದಿರುತ್ತದೆ. ಜೀವನಶೈಲಿ ಆಧಾರಿತ ಕೆಲವು ರೋಗಗಳಿಗೂ ಇದು ಉತ್ತಮ ಮದ್ದಾಗಿದೆ. ಆಹಾರದಲ್ಲಿ ಹೆಚ್ಚಾಗಿ ಸಿರಿಧಾನ್ಯವನ್ನು ಬಳಸಬೇಕು. ಸಿರಿಧಾನ್ಯವನ್ನು ಜನಪ್ರಿಯಗೊಳಿಸಲು ಸರ್ಕಾರ ಹಲವು ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ. ನಮ್ಮ ರೈತರು ಸಾವಯವ ಹಾಗೂ ಮಿಶ್ರ ಬೇಸಾಯ ಪದ್ಧತಿಯನ್ನು ರೂಢಿಸಿಕೊಂಡು ಸಿರಿಧಾನ್ಯವನ್ನು ಹೆಚ್ಚು ಬೆಳೆಯಬೇಕು ಎಂದು ಕಿವಿಮಾತು ಹೇಳಿದರು.

ನಗರಸಭೆ ಅಧ್ಯಕ್ಷೆ ಸುಜಾತ ಶಿವಕುಮಾರ್ ಮಾತನಾಡಿ, ಇತ್ತಿಚಿನ ದಿನಗಳಲ್ಲಿ ಸಾರ್ವಜನಿಕರು ಪಾಶ್ಚಾತ್ಯ ಆಹಾರ ಪದ್ಧತಿಗಳಿಗೆ ಮರುಳಾಗಿ ನಮ್ಮ ನಾಡಿನ ಆಹಾರ ಪದ್ಧತಿಯನ್ನು ದೂರ ಮಾಡಿ ಆರೋಗ್ಯವನ್ನು ಹದಗೆಟ್ಟಿಸಿಕೊಳ್ಳುತ್ತಿದ್ದಾರೆ. ಸಾವಯವ ಕೃಷಿ ಮೂಲಕ ಬೆಳೆಯುವ ನವಣೆ, ಸಜ್ಜೆ, ರಾಗಿ ಹಾಗೂ ದ್ವಿದಳ ಧಾನ್ಯಗಳು ನಮ್ಮ ಆರೋಗ್ಯವನ್ನು ಉತ್ತಮವಾಗಿರಿಸಿಕೊಳ್ಳಲು ಸಹಕಾರಿಯಾಗಿವೆ. ಇವುಗಳ ಉಪಯೋಗದಿಂದ ರೈತರ ಬೆಳೆಗೂ ಉತ್ತಮ ಲಾಭದಾಯಕ ಬೆಲೆ ದೊರಕುತ್ತದೆ. ತಮ್ಮ ದಿನನಿತ್ಯದ ಆಹಾರದಲ್ಲಿ ಸಿರಿಧಾನ್ಯಗಳಿಂದ ಮಾಡಿದ ಆಹಾರವನ್ನು ಹೆಚ್ಚಾಗಿ ಬಳಸಿ ತಮ್ಮ ಆರೋಗ್ಯವನ್ನು ಸುಸ್ಥಿತಿಯಲ್ಲಿರಿಸಿಕೊಳ್ಳಿ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಮೀನಾ ನಾಗರಾಜ್, ಜಿಪಂ ಸಿಇಒ ಎಚ್.ಎಸ್.ಕೀರ್ತನಾ, ಜಂಟಿ ಕೃಷಿ ನಿರ್ದೇಶಕಿ ಸುಜಾತ, ಕರ್ನಾಟಕ ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮ ಅಧ್ಯಕ್ಷ ಬಿ.ಎಚ್.ಹರೀಶ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net