ಇಂದಿನಿಂದ ಅಂತರ್ ಜಿಲ್ಲೆಗಳಿಗೆ ಬಸ್ ಸಂಚಾರ

18-hvr-12
Published on

ಹಾವೇರಿ: ಕರೊನಾ ವೈರಸ್ ಹರಡದಂತೆ ತಡೆಯಲು ಮುಂಜಾಗ್ರತೆ ಕ್ರಮವಾಗಿ ಜಿಲ್ಲೆಯಲ್ಲಿ ಈ ಹಿಂದೆ ಮೇ 4ರಿಂದ ಜಾರಿಗೊಳಿಸಿದ್ದ ನಿಷೇಧಾಜ್ಞೆಯನ್ನು ಮೇ 19ರವರೆಗೆ ಮುಂದುವರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೈ ತಿಳಿಸಿದ್ದಾರೆ.

ಕೋವಿಡ್-19 ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪರಸ್ಪರ ಅಂತರ ಕಾಯ್ದುಕೊಳ್ಳುವಿಕೆ ಮತ್ತು ಪ್ರತ್ಯೇಕತೆ ಅಳವಡಿಸಿಕೊಳ್ಳುವುದು ಮುಖ್ಯವಾಗಿರುವುದರಿಂದ ನಿಷೇಧಾಜ್ಞೆ ವಿಸ್ತರಿಸಲಾಗಿದೆ. ನಿಷೇಧಾಜ್ಞೆ ಅವಧಿಯಲ್ಲಿ ಹಿಂದೆ ಹೊರಡಿಸಿದ ಮಾರ್ಗಸೂಚಿಗಳು ಮೇ 19ರ ಮಧ್ಯರಾತ್ರಿವರೆಗೆ ಜಾರಿಯಲ್ಲಿರುತ್ತವೆ ಎಂದು ತಿಳಿಸಿದ್ದಾರೆ.

ಜಿಲ್ಲೆಯಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಇಂದಿನಿಂದ (ಮೇ 19) ಬಸ್​ಸಂಚಾರ ಆರಂಭಗೊಳಿಸಲಾಗುವುದು ಎಂದು ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ಹಾವೇರಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಜಗದೀಶ ತಿಳಿಸಿದ್ದಾರೆ.

ಜಿಲ್ಲೆಯ ಎಲ್ಲ ಬಸ್ ಡಿಪೋಗಳಿಂದ ವಿವಿಧ ಜಿಲ್ಲೆಗಳಿಗೆ ಸರ್ಕಾರದ ಮಾರ್ಗಸೂಚಿಯಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ ಬಸ್ ಓಡಾಟ ಆರಂಭಿಸಲಾಗುವುದು. ಈಗಾಗಲೇ ಜಿಲ್ಲೆಯೊಳಗೆ 78 ಬಸ್​ಗಳು ನಿತ್ಯ ಓಡಾಟ ಆರಂಭಿಸಿವೆ. ಹೊರ ಜಿಲ್ಲೆಗಳಿಗೆ ಅಂದಾಜು 200 ಬಸ್​ಗಳನ್ನು ಓಡಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ದಾವಣಗೆರೆ, ಹುಬ್ಬಳ್ಳಿ, ಶಿವಮೊಗ್ಗ, ಗದಗ, ಶಿರಸಿ, ಕಾರವಾರ, ಧಾರವಾಡ ಸೇರಿ ದೂರದ ಬೆಂಗಳೂರು, ಮೈಸೂರಿಗೂ ಸಹ ಬಸ್ ಸಂಚಾರ ಆರಂಭಗೊಳ್ಳಲಿದೆ. ಸರ್ಕಾರದ ಮಾರ್ಗಸೂಚಿಯಂತೆ ಒಂದು ಬಸ್​ನಲ್ಲಿ 30 ಜನರಿಗೆ ಮಾತ್ರ ಅವಕಾಶ. ಬಸ್ಸಿನೊಳಗೆ ಜನರು ಕುಳಿತುಕೊಳ್ಳಬೇಕಾದ ಸ್ಥಳವನ್ನು ನಿಗದಿಪಡಿಸಿ ಮಾರ್ಕಿಂಗ್ ಹಾಗೂ ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗುವುದು. ಪ್ರತಿಯೊಬ್ಬರೂ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಬಸ್ ದರದಲ್ಲಿ ಯಾವುದೇ ಏರಿಕೆಯಿಲ್ಲ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net