ಪಾಂಡವಪುರ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಘಟಕದಿಂದ ಮೇ 23ರಂದು ಪಟ್ಟಣದ ಟಿಎಪಿಸಿಎಂಎಸ್ ಆವರಣದಲ್ಲಿ ಶ್ರೀ ಜಗಜ್ಯೋತಿ ಬಸವೇಶ್ವರರ 892ನೇ ಜಯಂತ್ಯುತ್ಸವವನ್ನು ಆಯೋಜಿಸಲಾಗಿದೆ ಎಂದು ಚಂದ್ರವನ ಆಶ್ರಮದ ಡಾ.ಶ್ರೀ ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ ತಿಳಿಸಿದರು.
ಅಂದು ಬೆಳಗ್ಗೆ 10 ಗಂಟೆಗೆ ಪಟ್ಟಣದ ಶ್ರೀ ಬನ್ನಾರಮ್ಮ ದೇವಸ್ಥಾನದಿಂದ ಬಸವೇಶ್ವರರ ಉತ್ಸವ ಮೂರ್ತಿಯೊಂದಿಗೆ ವಿವಿಧ ಜಾನಪದ ಕಲಾತಂಡಗಳೊಂದಿಗೆ ಮೆರವಣಿಗೆ ಆರಂಭವಾಗಲಿದೆ. ಪ್ರಮುಖ ಬೀದಿಗಳಲ್ಲಿ ಉತ್ಸವದ ಮೆರವಣಿಗೆ ಸಾಗಿ ಟಿಎಪಿಸಿಎಂಎಸ್ ಕಲ್ಯಾಣ ಮಂಟಪದಲ್ಲಿ ಸಮಾವೇಶಗೊಳ್ಳಲಿದೆ. ವೇದಿಕೆ ಕಾರ್ಯಕ್ರಮದಲ್ಲಿ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ತುಮಕೂರು ಸಿದ್ಧಗಂಗಾ ಮಠದ ಪೀಠಾಧಿಪತಿ ಶ್ರೀ ಸಿದ್ಧಲಿಂಗ ಸ್ವಾಮೀಜಿ, ಬೇಬಿಬೆಟ್ಟದ ರಾಮಯೋಗೀಶ್ವರ ಮಠದ ಶ್ರೀ ಶಿವಬಸವ ಸ್ವಾಮೀಜಿ, ಮಲೆಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ, ಕುಂದೂರು ಮಠದ ಶ್ರೀ ಶರತ್‌ಚಂದ್ರ ಸ್ವಾಮೀಜಿ ಉಪಸ್ಥಿತರಿರುವರು. ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ ಉಪಸ್ಥಿತಿಯಲ್ಲಿ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ದರ್ಶನ್ ಪುಟ್ಟಣ್ಣಯ್ಯ ಅಧ್ಯಕ್ಷತೆ ವಹಿಸುವರು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಶಾಸಕರಾದ ವಿಜಯಾನಂದ ಕಾಶಪ್ಪನವರ್, ಎಚ್.ಎಂ.ಗಣೇಶ್‌ಪ್ರಸಾದ್, ಬಿಜೆಪಿ ಜಿಲ್ಲಾಧ್ಯಕ್ಷ ಡಾನ್.ಎಸ್.ಇಂದ್ರೇಶ್, ಬಿ.ಜೆ.ಪಿ.ಮುಂಖಡ ಸಚ್ಚಿದಾನಂದ, ಸೇರಿದಂತೆ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಪ್ರಸಾದ ವಿನಿಯೋಗ ವ್ಯವಸ್ಥೆ ನೆರವೇರಲಿದೆ. ಕಾರ್ಯಕ್ರಮಕ್ಕೆ ಜಿಲ್ಲೆಯ ಜನತೆ ಪಕ್ಷಾತೀತ, ಜಾತ್ಯತೀತವಾಗಿ ಆಗಮಿಸುವಂತೆ ಮನವಿ ಮಾಡಿದರು.