ಇತರರಿಗೂ ಮತದಾನದ ಅರಿವು ಮೂಡಿಸಿ

Published on

ಹನೂರು: ಮತದಾನ ಪ್ರತಿಯೊಬ್ಬ ಪ್ರಜೆಯ ಹಕ್ಕು, ಆದ್ದರಿಂದ ಈ ಬಗ್ಗೆ ಪ್ರತಿಯೊಬ್ಬರೂ ಅರಿವನ್ನು ಹೊಂದುವ ಮೂಲಕ ಇತರರಿಗೂ ತಿಳಿಸಬೇಕು ಎಂದು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಎಂ.ಮಹಾದೇವ ತಿಳಿಸಿದರು.

ಪಟ್ಟಣದ ಕ್ಷೇತ್ರ ಸಮೂಹ ಸಂಪನ್ಮೂಲ ಕೇಂದ್ರದಲ್ಲಿ ಗುರುವಾರ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಅಂತಾರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ತಾಲೂಕು ಮಟ್ಟದ ಸ್ಪರ್ಧಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ದೇಶದಲ್ಲಿ ಪ್ರಜಾಪ್ರಭುತ್ವವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಚುನಾವಣೆ ಆಯೋಗವು ಮತದಾನದ ಕುರಿತು ಜನರಲ್ಲಿ ಅರಿವು ಮೂಡಿಸಲು ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಅಲ್ಲದೆ 2011ರಿಂದ ಮತದಾರರ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದ್ದು, ಮತದಾನದ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಇದರಿಂದ ಪ್ರತಿ ವರ್ಷವೂ ಧನಾತ್ಮಕತೆಯನ್ನು ಪಡೆಯುತ್ತಿದೆ. ಈ ದೆಸೆಯಲ್ಲಿ ಶಾಲಾ ವಿದ್ಯಾರ್ಥಿಗಳಿಗಾಗಿ ತಾಲೂಕು ಮಟ್ಟದ ಪ್ರಬಂಧ, ರಸಪ್ರಶ್ನೆ ಹಾಗೂ ಚಿತ್ರಕಲೆಯನ್ನು ಆಯೋಜಿಸಲಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಇದರಲ್ಲಿ ಭಾಗವಹಿಸುವ ಮೂಲಕ ಸೃಜನಶೀಲತೆಯನ್ನು ಅಭಿವ್ಯಕ್ತಪಡಿಸಬೇಕು ಎಂದು ತಿಳಿಸಿದರು.

ಬಳಿಕ ತಾಲೂಕಿನ ವಿವಿಧ ಶಾಲೆಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳಿಗೆ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಶಿಕ್ಷಣ ಸಂಯೋಜಕರಾದ ಚಿನ್ನಪ್ಪಯ್ಯ, ಮಹೇಶ್, ಶಿಕ್ಷಕ ಚಂದ್ರುಶೇಖರ್ ಹಾಗೂ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net