

ಹಾಸನ: ಯುದ್ಧಪೀಡಿತ ಇಸ್ರೆಲ್ ದೇಶದಲ್ಲಿ ಜಿಲ್ಲೆಯ 20 ಜನರು ಸೇರಿ ರಾಜ್ಯದ 2 ಸಾವಿರ ಕನ್ನಡಿಗರು ಸಿಲುಕಿದ್ದಾರೆ ಎಂಬ ಮಾಹಿತಿ ಇದೆ. ಕೂಡಲೇ ರಾಜ್ಯ ಮತ್ತು ಕೇಂದ್ರ ಸರ್ಕಾರ ಅವರನ್ನು ಸುರಕ್ಷಿತವಾಗಿ ತಾಯ್ನಡಿಗೆ ಕರೆತರುವ ಕೆಲಸ ಮಾಡಬೇಕು ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಒತ್ತಾಯಿಸಿದರು.
ಸೋಮವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಇಸ್ರೇಲ್‌ನಲ್ಲಿ ಕೆಲಸ ಮಾಡುತ್ತಿರುವ ರಾಜ್ಯದ ಎರಡು ಸಾವಿರ ಜನರು ಸಮಸ್ಯೆಗೆ ಸಿಲುಕಿದ್ದಾರೆ. ಅವರನ್ನು ರಕ್ಷಣೆ ಮಾಡಿ ತಾಯ್ನಡಿಗೆ ಕರೆ ತರಲು ಕೇಂದ್ರ ಸರ್ಕಾರ ಯುದ್ಧ ವಿಮಾನಗಳನ್ನು ಬಳಕೆ ಮಾಡಿಕೊಳ್ಳಬೇಕು. ಈ ಹಿಂದೆ ರಷ್ಯಾ-ಉಕ್ರೇನ್ ಯುದ್ಧದ ಸಮಯದಲ್ಲಿ ಹೇಗೆ ಜನರನ್ನು ಕರೆ ತರಲಾಯಿತೋ ಅದೇ ಮಾದರಿಯಲ್ಲಿ ಇಸ್ರೇಲ್‌ನಲ್ಲಿ ಸಿಲುಕಿರುವವರನ್ನು ಕರೆತರುವ ಕೆಲಸವಾಗಬೇಕು ಎಂದು ಹೇಳಿದರು.
ಕೇವಲ ಕನ್ನಡಿಗರಷ್ಟೇ ಅಲ್ಲ. ಇಸ್ರೇಲ್‌ನಲ್ಲಿ ಸಿಲುಕಿರುವ ಭಾರತದ ಎಲ್ಲ ಪ್ರಜೆಗಳನ್ನು ರಕ್ಷಣೆ ಮಾಡಬೇಕಾಗಿರುವುದು ಕೇಂದ್ರ ಸರ್ಕಾರದ ಜವಾಬ್ದಾರಿ. ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮೊದಲ ಆದ್ಯತೆ ನೀಡಬೇಕು. ಜಿಲ್ಲೆಯ ಸಕಲೇಶಪುರ, ಚನ್ನರಾಯಪಟ್ಟಣ, ಬೇಲೂರಿನ ಜನರು ಇಸ್ರೇಲ್‌ನಲ್ಲಿ ಇದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿಯೊಂದಿಗೂ ಮಾತನಾಡುತ್ತೇನೆ ಎಂದು ತಿಳಿಸಿದರು.
ಕೊಬ್ಬರಿ ಬೆಲೆ ಹೆಚ್ಚಿಸಲು ಒತ್ತಾಯ
ಶಾಸಕ ಸಿ.ಎನ್.ಬಾಲಕೃಷ್ಣ ಮಾತನಾಡಿ, 16 ಸಾವಿರ ರೂ. ಇದ್ದ ಕೊಬ್ಬರಿ ಬೆಲೆ ಈಗ 8500 ರೂ.ಗೆ ಕುಸಿದಿರುವುದರಿಂದ ತೆಂಗು ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದ್ದರಿಂದ ಕಾಂಗ್ರೆಸ್ ಸರ್ಕಾರ ಚುನಾವಣಾಪೂರ್ವ ನೀಡಿದ್ದ ಭರವಸೆಯಂತೆ ಕೊಬ್ಬರಿಗೆ ಉತ್ತಮ ಬೆಲೆ ನಿಗದಿ ಮಾಡಬೇಕು. ರಾಜ್ಯ ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಸಂಸದ ಪ್ರಜ್ವಲ್ ರೇವಣ್ಣ ಅವರ ನೇತೃತ್ವದಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಲಾಗುವುದು ಎಂದು ತಿಳಿಸಿದರು.
ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡದೆ ಗ್ರಾಮೀಣ ಭಾಗದ ಜನರು ನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ. ಸಂಜೆ 6 ಗಂಟೆಯಿಂದ ರಾತ್ರಿ 9 ಗಂಟೆವರೆಗೂ ವಿದ್ಯುತ್ ಕಡಿತಗೊಳಿಸುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಓದಲು ಸಮಸ್ಯೆಯಾಗುತ್ತಿದೆ. ಬೆಳೆಗಳಿಗೆ ನೀರು ಹಾಯಿಸಲು ಸಾಧ್ಯವಾಗುತ್ತಿಲ್ಲ. ಸರ್ಕಾರ ಈ ಬಗ್ಗೆ ಗಮನ ಹರಿಸಿ ಸಮಸ್ಯೆಯನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದರು.