

ಹನೂರು: ಬಿಜೆಪಿ ಸರ್ಕಾರದಿಂದ ಜನರು ತುಂಬಾ ತೊಂದರೆ ಅನುಭವಿಸಿದ್ದಾರೆ. ಹಾಗಾಗಿ ಈ ಬಾರಿ ರಾಜ್ಯದಲ್ಲಿ ಸ್ಪಷ್ಟ ಬಹುಮತದಿಂದ ಕಾಂಗ್ರೆಸ್ ಅಧಿಕಾರ ಪಡೆಯಲಿದ್ದು, ಶಾಸಕ ಆರ್.ನರೇಂದ್ರ ಸಚಿವರಾಗಲಿದ್ದಾರೆ ಎಂದು ಮಾಜಿ ಸಚಿವ ಎಂ.ಆರ್.ಸೀತಾರಾಮ್ ವಿಶ್ವಾಸ ವ್ಯಕ್ತಪಡಿಸಿದರು.
ತಾಲೂಕಿನ ಎಲ್ಲೇಮಾಳ ಗ್ರಾಮದಲ್ಲಿ ಮಲೆನಾಡು ಪ್ರದೇಶಾಭಿವೃದ್ಧಿ ಯೋಜನೆಯಡಿ 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಶ್ರೀ ಯೋಗಿ ನಾರೇಯಣ ಬಣಜಿಗ (ಬಲಿಜ) ಸಮುದಾಯ ಭವನವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು. ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದು, ಉತ್ತಮ ಆಡಳಿತ ನೀಡಲು ಸಾಧ್ಯವಾಗಲಿಲ್ಲ. ಜನಪರ ಯೋಜನೆಗಳನ್ನು ಜಾರಿಗೊಳಿಸಲಿಲ್ಲ. ಬದಲಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನ ಸಾಮಾನ್ಯರನ್ನು ಕಷ್ಟಕ್ಕೆ ನೂಕಿದೆ ಎಂದು ಆರೋಪಿಸಿದರು.
ಬಿಜೆಪಿ ಸರ್ಕಾರದ ಆಡಳಿತದ ಅವಧಿಯಲ್ಲಿ ಹಲವು ಪ್ರಕರಣಗಳು ನಡೆದಿವೆ. ಬಿಜೆಪಿ ಶಾಸಕನ ಪುತ್ರ ಅವ್ಯವಹಾರದಲ್ಲಿ ಭಾಗಿಯಾಗಿರುವುದು ಇದಕ್ಕೆ ಸಾಕ್ಷಿಯಾಗಿದೆ. ಇಂತಹ ಸರ್ಕಾರ ಬೇಕಾ? ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಬಡವರು, ದೀನ ದಲಿತರು, ಹಿಂದುಳಿದವರು, ಮಹಿಳೆಯರು ಹಾಗೂ ರೈತರಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿತ್ತು. ಇಂದಿಗೂ ಜನತೆ ಯೋಜನೆಗಳ ಪ್ರಯೋಜನ ಪಡೆಯುತ್ತಿದ್ದಾರೆ. ಸದ್ಯ ಬಿಜೆಪಿ ಸರ್ಕಾರದ ಬಗ್ಗೆ ಜನರು ಬೇಸತ್ತಿದ್ದು, ಕಾಂಗ್ರೆಸ್ ಪರ ಒಲವು ವ್ಯಕ್ತಪಡಿಸುತ್ತಿದ್ದಾರೆ. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯುವುದು ಖಚಿತ ಎಂದು ತಿಳಿಸಿದರು.
ಶಾಸಕ ಆರ್.ನರೇಂದ್ರ ಮಾತನಾಡಿ, ತಾಲೂಕಿನ ಕುರಟ್ಟಿ ಹೊಸೂರು, ಶೆಟ್ಟಳ್ಳಿ ಹಾಗೂ ಎಲ್ಲೇಮಾಳ ಭಾಗದಲ್ಲಿ ಬಲಿಜ ಸಮುದಾಯದ ಜನರು ಹೆಚ್ಚು ವಾಸಿಸುತ್ತಿದ್ದಾರೆ. ಆದರೆ ಸಮುದಾಯ ಭವನ ಇರಲಿಲ್ಲ. ಇದೀಗ ಶೆಟ್ಟಳ್ಳಿಯಲ್ಲಿ 60 ಲಕ್ಷ ರೂ. ಹಾಗೂ ಎಲ್ಲೇಮಾಳದಲ್ಲಿ 50 ಲಕ್ಷ ರೂ. ಅನುದಾನದಲ್ಲಿ ಭವನ ನಿರ್ಮಿಸಿದ್ದು, ಸೇವೆಗೆ ಅರ್ಪಿಸಲಾಗುತ್ತಿದೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ದೊರೆತ್ತಿತ್ತು. ಈ ಹಣದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳು ಸೇರಿದಂತೆ 160 ಸಮುದಾಯ ಭವನ ನಿರ್ಮಿಸಲಾಗಿದೆ. ಆದರೆ ಕಳೆದ ಮೂರೂವರೆ ವರ್ಷದ ಅವಧಿಯಲ್ಲಿ ಬಿಜೆಪಿ ಸರ್ಕಾರ ಕ್ಷೇತ್ರಕ್ಕೆ ಒಂದೇ ಒಂದು ಸಮುದಾಯ ಭವನ ನೀಡಲಿಲ್ಲ. ಹೀಗಾಗಿ ಜನತೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಕೋರಿದರು.
ಗ್ರಾಪಂ ಅಧ್ಯಕ್ಷೆ ಜಯಲಕ್ಷ್ಮೀ, ಅರಗು ಮತ್ತು ಬಣ್ಣ ಕಾರ್ಖಾನೆ ಮಾಜಿ ಅಧ್ಯಕ್ಷ ವೆಂಕಟೇಶ್, ತಾಲೂಕು ಬಣಜಿಗ ಸಂಘದ ಗೌರವಾಧ್ಯಕ್ಷ ಗೋಪಾಲ್‌ಕೃಷ್ಣ, ಅಧ್ಯಕ್ಷ ರಂಗಸ್ವಾಮಿ, ಕಾರ್ಯದರ್ಶಿ ಬಾಲಾಜಿ, ಮಂಡ್ಯ ಸಂಘದ ಅಧ್ಯಕ್ಷ ವೆಂಕಟೇಶ್‌ಬಾಬು, ಮೈಸೂರು ಸಂಘದ ಕಾರ್ಯದರ್ಶಿ ಎಚ್.ಆರ್.ಗೋಪಾಲ್ ಕೃಷ್ಣ, ಸೆಸ್ಕ್ ಜೆಇ ರಂಗಸ್ವಾಮಿ, ಯೂತ್ ಕಾಂಗ್ರೆಸ್ ಕಾರ್ಯದರ್ಶಿ ಚೇತನ್ ದೊರೆರಾಜು, ಮುಖಂಡರಾದ ಮಹದೇವ್, ನಾಗೇಂದ್ರ, ಸಿದ್ದಪ್ಪ, ಮುನಿಯಪ್ಪ, ಪುಟ್ಟಯ್ಯ ಇತರರು ಇದ್ದರು.