

ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಚಿಕ್ಕಜಂಬೂರು ಗ್ರಾಮದ ಮೆಹಬೂಬ್ ಅಲಿ(38) ಎಚ್1ಎನ್1ನಿಂದ ಮೃತರಾಗಿರುವುದು ದೃಢಪಟ್ಟಿದ್ದು ಜಿಲ್ಲೆಯಲ್ಲಿ ಪ್ರಸಕ್ತ ಬಾರಿ ಎನ್1ಎನ್1ಗೆ ಬಲಿಯಾದ ಮೊದಲ ಪ್ರಕರಣ ಇದಾಗಿದೆ.
ಎಚ್1ಎನ್ ಜ್ವರದಿಂದ ತೀವ್ರ ತುತ್ತಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಾದರೂ ಚಿಕಿತ್ಸೆಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಕರೆತರುವಾಗ ಮಂಗಳವಾರ ಮೆಹಬೂಬ್ ಅಲಿ ಮೃತಪಟ್ಟಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ 10 ದಿನ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಆನಂತರ ಜ್ವರ ಕಾಣಿಸಿಕೊಂಡಿದ್ದರಿಂದ ಕಳೆದ ಶನಿವಾರ ಚಿಕ್ಕಜಂಬೂರಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳಿದ್ದರು. ಈ ಸಂದರ್ಭ ತಪಾಸಣೆ ನಡೆಸಿದ ವೈದ್ಯಾಧಿಕಾರಿ ಡಾ. ಗಿರಿರಾಜ್ ಇಸ್ಲೂರ್ ಮೇಲ್ನೊಟಕ್ಕೆ ಎಚ್1ಎನ್1 ಲಕ್ಷಣ ಕಂಡುಬಂದ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ಕಳಿಸಿದ್ದರು.
ಮಣಿಪಾಲದಲ್ಲಿ ಪರೀಕ್ಷೆ ಬಳಿಕ ಎಚ್1ಎನ್1 ಇರುವುದು ದೃಢಪಟ್ಟಿತ್ತು. ಆದರೆ, ಅವರ ದೇಹ ಚಿಕಿತ್ಸೆಗೆ ಸ್ಪಂದಿಸಲಿಲ್ಲ. ಕಿಡ್ನಿ ವೈಫಲ್ಯಕ್ಕೆ ಒಳಗಾದವರು ಮತ್ತು ರೋಗ ನಿರೋಧಕ ಶಕ್ತಿ ಕಡಿಮೆ ಇರುವವರು ಸೋಂಕು ಇರುವ ಪ್ರದೇಶದಲ್ಲಿದ್ದಾಗ ತಗಲುವ ಸಾಧ್ಯತೆ ಇದೆ. ಮೆಹಬೂಬ್ಗೂ ಅದೇ ರೀತಿ ಆಗಿರಬಹುದು ಎಂದು ವೈದ್ಯರು ಶಂಕಿಸಿದ್ದಾರೆ.
ಮೆಹಬೂಬ್ ಅಲಿ ಕುಟುಂಬದವರು ಮತ್ತು ಅಕ್ಕಪಕ್ಕದ ಮನೆಯವರಿಗೆ ಈಗಾಗಲೇ ಮುನ್ನೆಚ್ಚರಿಕೆ ನೀಡಲಾಗಿದೆ. ಜ್ವರ ಬಂದಲ್ಲಿ ನಿರ್ಲಕ್ಷ್ಯ ಮಾಡದೆ ತಕ್ಷಣ ಚಿಕಿತ್ಸೆ ಪಡೆಯುವಂತೆ ಸೂಚಿಸಲಾಗಿದೆ. ಅಲ್ಲದೆ ಅಲ್ಲಿನ ಪರಿಸ್ಥಿತಿ ಬಗ್ಗೆ ನಿಗಾ ವಹಿಸುವಂತೆ ಚಿಕ್ಕಜಂಬೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗೆ ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಶಿವಮೊಗ್ಗ ಡಿಎಚ್ಒ ಡಾ. ರಾಜೇಶ್ ಸುರಗಿಹಳ್ಳಿ ಮಾತನಾಡಿ, ಮೆಹಬೂಬ್ ಅಲಿ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಾಗ ಎಚ್1ಎನ್1 ತಗುಲಿದೆ. ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಭದ್ರಾವತಿಯಲ್ಲಿ ಒಬ್ಬರಿಗೆ ಮಾತ್ರ ಕಾಯಿಲೆ ಕಾಣಿಸಿಕೊಂಡಿತ್ತು. ಚಿಕ್ಕಜಂಬೂರು ಸೇರಿ ಜಿಲ್ಲೆಯಾದ್ಯಂತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.