

ದಾವಣಗೆರೆ: ಬ್ರಹ್ಮಶ್ರೀ ನಾರಾಯಣ ಗುರು ಈಡಿಗ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ರೂ. ಅನುದಾನ ಸೇರಿದಂತೆ ಹಲವು ಬೇಡಿಕೆ ಈಡೇರಿಸಬೇಕು ಎಂದು ಆರ್ಯ ಈಡಿಗ ಸಮಾಜದ ರಾಜ್ಯ ಗೌರವಾಧ್ಯಕ್ಷ ಎಚ್.ವೈ. ಆನಂದ್ ಸರ್ಕಾರವನ್ನು ಒತ್ತಾಯಿಸಿದರು.
ರಾಜ್ಯದಲ್ಲಿ ಈಡಿಗ, ಬಿಲ್ಲವ, ನಾಮಧಾರಿ ಸೇರಿ 26 ಸಮಾಜದ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಶ್ರೀ ಪ್ರಣವಾನಂದ ಸ್ವಾಮೀಜಿ ನೇತೃತ್ವದಲ್ಲಿ ಹೋರಾಟ ನಡೆಸುತ್ತಿದ್ದರೂ ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.
ಹಿಂದಿನ ಸರ್ಕಾರ ಘೋಷಣೆ ಮಾಡಿದಂತೆ ಈಡಿಗ ಅಭಿವೃದ್ಧಿ ನಿಗಮಕ್ಕೆ ಕೂಡಲೇ 500 ಕೋಟಿ ರೂ. ಅನುದಾನ ಬಿಡುಗಡೆ ಮಾಡಬೇಕು, ಈಡಿಗ ಸಮಾಜದ ಕುಲಶಾಸ್ತ್ರ ಅಧ್ಯಯನಕ್ಕೆ ಘೋಷಣೆ ಮಾಡಿರುವ 25 ಲಕ್ಷ ಅನುದಾನ ಉಪಯೋಗಿಸುವ ಮೂಲಕ ಕುಲಶಾಸ್ತ್ರ ಅಧ್ಯಯನ ಪೂರ್ಣಗೊಳಿಸಿ ಸಮಾಜವನ್ನು ಪ.ಪಂಗಡಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಒತ್ತಾಯಿಸಿದರು.
ಕುಲಕಸುಬು ಕಳೆದುಕೊಂಡ ಈಡಿಗ ಸಮಾಜಕ್ಕೆ ಮರಳಿ ಕಸುಬು ನೀಡಬೇಕು. ಇಲ್ಲವಾದಲ್ಲಿ ಪ್ರತಿ ಕುಟುಂಬಕ್ಕೆ ಎರಡು ಎಕರೆ ಜಮೀನು ನೀಡಬೇಕು, ವಿಧಾನಸೌಧದ ಎದುರು ಬ್ರಹ್ಮಶ್ರೀ ನಾರಾಯಣ ಗುರುಗಳ ಪುತ್ಥಳಿ ಸ್ಥಾಪನೆ ಮಾಡಬೇಕು. ಸರ್ಕಾರದಿಂದ ಹೆಂಡದ ಮಾರಯ್ಯನವರ ಜಯಂತಿ ಆಚರಣೆ ಒಳಗೊಂಡಂತೆ ಎಲ್ಲ 16 ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿದರು.
ಸರ್ಕಾರ ಸಮಾಜದ ಬೇಡಿಕೆ ಈಡೇರಿಸದಿದ್ದಲ್ಲಿ ಗಂಗಾವತಿಯಲ್ಲಿ ಡಿ.10ರಂದು ಬೆಳಗ್ಗೆ 10ರಿಂದ ಸಂಜೆ 7ರ ವರೆಗೆ ಪ್ರಣವಾನಂದ ಸ್ವಾಮೀಜಿ ಅವರ ನೇತೃತ್ವದಲ್ಲಿ ನಡೆಯುವ ಉಪವಾಸ ಸತ್ಯಾಗ್ರಹದಲ್ಲಿ ಮುಂದಿನ ಹೋರಾಟದ ರೂಪುರೇಷೆ ಬಗ್ಗೆ ನಿರ್ಧರಿಸಲಾಗುವುದು ಎಂದು ತಿಳಿಸಿದರು.
ಗಂಗಾವತಿಯಲ್ಲಿ ನಡೆಯುವ ಉಪವಾಸ ಸತ್ಯಾಗ್ರಹ ದಿನದಂದೇ ಬೆಂಗಳೂರಿನಲ್ಲೂ ಕಾರ್ಯಕ್ರಮ ಇದೆ. ಅದಕ್ಕೂ ನಮಗೂ ಯಾವುದೇ ಸಂಬಂಧ ಇಲ್ಲ ಎಂದರು.
ಜಿಲ್ಲಾಧ್ಯಕ್ಷ ಆರ್. ಪ್ರತಾಪ್, ಯುವ ಘಟಕ ಅಧ್ಯಕ್ಷ ಎಸ್.ಎಂ. ಸಂತೋಷ್, ಹಾಲೇಶಪ್ಪ, ರಾಜೇಶ್, ಮಹಾಂತೇಶ್ ಸುದ್ದಿಗೋಷ್ಠಿಯಲ್ಲಿದ್ದರು.