ಉಗ್ರರ ಕೃತ್ಯ ಖಂಡಿಸಿ ಪ್ರತಿಭಟನೆ

BJP
Published on

ಬೆಳಗಾವಿ: ಕಾಶ್ಮೀರದ ಪಹಲ್ಗಾಮ್ ಬಳಿ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ಗುಂಡಿನ ದಾಳಿ ಖಂಡಿಸಿ ಗುರುವಾರ ನಗರದಲ್ಲಿ ಬಿಜೆಪಿ ಕಾರ್ಯಕರ್ತರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಮಹಿಳಾ ಸಂಘಟನೆಯ ಕಾರ್ಯಕರ್ತರು ಮೇಣದ ಬತ್ತಿ ಹಿಡಿದು ಪ್ರತಿಭಟನೆ ನಡೆಸಿದರು.

ಗುರುವಾರ ರಾತ್ರಿ ನಗರದ ನಾಥ್‌ಪೈ ವೃತ್ತದಿಂದ ಆರಂಭವಾದ ಮೇಣದ ಬತ್ತಿ ಹಿಡಿದು ಮೆರವಣಿಗೆ ಕಪಿಲೇಶ್ವರ ದೇವಸ್ಥಾನ ಬಳಿ ಸಮಾಪ್ತಿಗೊಂಡಿತು. ಬಿಜೆಪಿ ಶಾಸಕ ಅಭಯ ಪಾಟೀಲ, ಮೇಯರ್ ಮಂಗೇಶ ಪವಾರ, ಉಪಮೇಯರ್ ವಾಣಿ ಜೋಶಿ, ಮಾಜಿ ಶಾಸಕ ಅನಿಲ ಬೆನಕೆ, ಹಾಲಿ, ಪಾಲಿಕೆ ಸದಸ್ಯರು, ಪದಾಧಿಕಾರಿಗಳು, ಉದ್ಯಮಿಗಳು, ವ್ಯಾಪಾರಸ್ಥರು ಮೇಣದ ಬತ್ತಿ ಹಿಡಿದು ಪ್ರತಿಭಟಿಸಿದರು.

ಇದೇ ಸಂದರ್ಭದಲ್ಲಿ ಶಾಸಕ ಅಭಯ ಪಾಟೀಲ ಮಾತನಾಡಿ, ಕಾಶ್ಮೀರದ ಪಹಲ್ಗಾಮ್ ಬಳಿ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ಗುಂಡಿನ ದಾಳಿ ಖಂಡನೀಯ. ಅಮಾಯಕ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿರುವ ಉಗ್ರರನ್ನು ಬೇರು ಸಮೇತ ಸೆದೆಬಡಿಯಬೇಕು. ಉಗ್ರರನ್ನು ಪೋಷಿಸಿ ಬೆಳೆಸುತ್ತಿರುವ ಪಾಕಿಸ್ತಾನ ದೇಶಕ್ಕೆ ತಕ್ಕ ಪಾಠ ಕಲಿಸಲು ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಮಾಜಿ ಶಾಸಕ ಅನಿಲ ಬೆನಕೆ ಮಾತನಾಡಿ, ನೆರೆ ಪಾಕಿಸ್ತಾನಕ್ಕೆ ನೇರವಾಗಿ ಭಾರತದ ವಿರುದ್ಧ ಯುದ್ಧ ಮಾಡಲು ಸಾಧ್ಯವಾಗದೇ ಪರೋಕ್ಷವಾಗಿ ಉಗ್ರರ ಮುಂದಿಟ್ಟುಕೊಂಡು ದಾಳಿ ನಡೆಸುತ್ತಿದ್ದಾರೆ. ಇದೀಗ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸುವ ಸಮಯ ಬಂದಿದೆ. ಕೂಡಲೇ ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net