ಉತ್ತಮ ಕ್ರೀಡಾಪಟುಗಳು ದೇಶದ ಆಸ್ತಿ

08 krp-02
Published on

ಕೆ.ಆರ್.ಪೇಟೆ: ಉತ್ತಮ ಕ್ರೀಡಾಪಟುಗಳು ದೇಶದ ಆಸ್ತಿಯಾಗಿದ್ದು, ಹೆಚ್ಚು ಕ್ರೀಡಾಪಟುಗಳನ್ನು ತಯಾರು ಮಾಡುವ ಕೆಲಸವನ್ನು ಶಾಲಾ ಹಂತದಿಂದಲೇ ಮಾಡಬೇಕು ಎಂದು ಶಾಸಕ ಎಚ್.ಟಿ.ಮಂಜು ಅಭಿಪ್ರಾಯಪಟ್ಟರು.


ತಾಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಆಲೇನಹಳ್ಳಿ ಗ್ರಾಮದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳ ಹೋಬಳಿ ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.


ಭಾರತ ದೇಶ ಇಂದು ಕ್ರೀಡೆಯಲ್ಲಿ ಸಾಕಷ್ಟು ಪ್ರಗತಿ ಸಾಧಿಸುವತ್ತ ಹೆಜ್ಜೆ ಇಡುತ್ತಿದೆ. ಭಾರತದ ಜನಸಂಖ್ಯೆಗೆ ಹೋಲಿಸಿದಲ್ಲಿ ನಮ್ಮ ದೇಶದಲ್ಲಿ ಕ್ರೀಡಾಪಟುಗಳ ಕೊರತೆ ಸಾಕಷ್ಟಿದೆ. ಎಲ್ಲ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಒಬ್ಬರು ದೈಹಿಕ ಶಿಕ್ಷಣ ಶಿಕ್ಷಕರನ್ನು ನೇಮಿಸುವ ಮೂಲಕ ವಿದ್ಯಾರ್ಥಿಗಳಿಗೆ ತಮ್ಮ ವ್ಯಾಸಂಗದ ಅವಧಿಯಲ್ಲಿ ಕ್ರೀಡೆಯ ಬಗ್ಗೆ ಆಸಕ್ತಿ ಹೆಚ್ಚುವಂತೆ ಮಾಡಬೇಕು. ಮಕ್ಕಳ ಆಸಕ್ತಿಗೆ ಅನುಗುಣವಾಗಿ ಅವರನ್ನು ಆಯಾ ಕ್ರೀಡೆಗಳಲ್ಲಿ ತರಬೇತುಗೊಳಿಸುವ ಮೂಲಕ ಅವರನ್ನು ಉತ್ತಮ ಕ್ರೀಡಾಪಟುಗಳನ್ನಾಗಿ ಮಾಡಬೇಕು. ಪಠ್ಯದ ಜತೆಗೆ ಕ್ರೀಡೆಯೂ ಸೇರಿದಾಗ ಮಕ್ಕಳು ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾಗುತ್ತಾರೆ ಎಂದರು.


ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್.ಸೀತಾರಾಮು ಮಾತನಾಡಿದರು. ಕ್ಷೇತ್ರ ಸಮನ್ವಯಾಧಿಕಾರಿ ಎಚ್.ಕೆ.ಮಂಜುನಾಥ್, ಅಕ್ಷರದಾಸೋಹ ಸಹಾಯಕ ನಿರ್ದೇಶಕ ಸಿ.ಎನ್.ಯತೀಶ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಕೆ.ಶಿವರಾಮೇಗೌಡ, ಉಪಾಧ್ಯಕ್ಷ ಎಸ್.ಆರ್. ಆನಂದ್‌ಕುಮಾರ್, ದೈಹಿಕ ಶಿಕ್ಷಣ ಪರಿವೀಕ್ಷಕ ಪ್ರಭುಕುಮಾರ್, ಶಿಕ್ಷಣ ಸಂಯೋಜಕ ಜ್ಞಾನೇಶ್, ಕೃಷ್ಣನಾಯಕ್, ವೇಣುಗೋಪಾಲ್‌ವಿವಿಧ ಶಾಲೆಗಳ ವಿದ್ಯಾರ್ಥಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net