ಉತ್ತಮ ಪರಿಸರ ನಿರ್ಮಾಣದ ಹೊಣೆ ನಮ್ಮದು

06Kush02
Published on

ಕುಶಾಲನಗರ: ಉತ್ತಮ ಪರಿಸರ ನಿರ್ಮಾಣ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಹೊಣೆಗಾರಿಕೆ ನಮ್ಮದಾಗಬೇಕು ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಅಶೋಕ.ಸಂ. ಆಲೂರ ಅಭಿಪ್ರಾಯಪಟ್ಟರು.


ಕೊಡಗು ವಿಶ್ವವಿದ್ಯಾಲಯದ ಸೂಕ್ಷ್ಮಾಣುಜೀವ ವಿಜ್ಞಾನ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಂಶೋಧನಾ ವಿದ್ಯಾರ್ಥಿಗಳು ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಮಂಗಳವಾರ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಪರಿಸರದ ಅರಿವು ಮತ್ತು ಕಾಳಜಿ ಮೊದಲು ನಮ್ಮ ಮನೆಯಿಂದಲೇ ಆರಂಭವಾಗಬೇಕು. ಪ್ಲಾಸ್ಟಿಕ್ ಬಳಕೆ ಮಾಡುವುದನ್ನು ಕಡಿಮೆ ಮಾಡಬೇಕು. ಅತಿಯಾದ ಪ್ಲಾಸ್ಟಿಕ್ ಬಳಕೆ ಜಲಚರ, ವನ್ಯಜೀವಿಗಳು ಮತ್ತು ಮಾನವ ಸಂಕುಲಕ್ಕೆ ಕಂಟಕವಾಗಲಿದೆ. ನಿತ್ಯ ಬಳಸುವ ಪ್ಲಾಸ್ಟಿಕ್ ತ್ಯಾಜ್ಯ ಹಲವು ಸಮಸ್ಯೆ ತಂದೊಡ್ಡುತ್ತವೆ. ಪರಿಸರ ಹದಗೆಡದಂತೆ ತ್ಯಾಜ್ಯ ವಿಲೇವಾರಿ ಕಾಲಕಾಲಕ್ಕೆ ಸಮರ್ಪಕವಾಗಿ ನಡೆಯಬೇಕು. ಆ ನಿಟ್ಟಿನಲ್ಲಿ ಪರ್ಯಾಯ ವಿಧಾನಗಳನ್ನು ಕಂಡುಕೊಳ್ಳಬೇಕು ಎಂದರು.


ಮುಖ್ಯ ಅತಿಥಿ ಹಾಸನ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಟಿ.ಸಿ.ತಾರನಾಥ್ ಮಾತನಾಡಿ, ಮಾಲಿನ್ಯರಹಿತ ವಾತಾವರಣವು ಸಿಗುವುದು ತುಂಬಾ ವಿರಳ. ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ತಿಳಿಸಿದರು.

ಪ್ರೊ.ಅಶೋಕ.ಸಂ.ಆಲೂರ ಪರಿಸರ ಸಂರಕ್ಷಣೆ ಕುರಿತ ಪ್ರತಿಜ್ಞಾವಿಧಿ ಬೋಧಿದರು. ವಿಶ್ವ ಪರಿಸರ ದಿನದ ಅಂಗವಾಗಿ ಏರ್ಪಡಿಸಿ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು. ಕೊಡಗು ಜಿಲ್ಲಾ ಅರಣ್ಯ ಉಪಸಂರಕ್ಷಣಾಧಿಕಾರಿ ಎ.ಟಿ. ಪೂವಯ್ಯ, ಎಫ್‌ಎಂಸಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.ಜಗತ್ ತಿಮ್ಮಯ್ಯ, ಕೊಡಗು ವಿವಿ ಕುಲಸಚಿವ ಡಾ.ಸೀನಪ್ಪ, ಸೂಕ್ಷ್ಮಾಣುಜೀವ ವಿಜ್ಞಾನ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಅಧ್ಯಕ್ಷ ಪ್ರೊ.ಎಂ.ಜಯಶಂಕರ್, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ಸೂಕ್ಷ್ಮಾಣುಜೀವ ವಿಜ್ಞಾನ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಂಶೋಧನಾ ಮತ್ತು ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net