ಉತ್ತಮ ಸಮಾಜಕ್ಕೆ ಹಿರಿಯರ ನಾಗರಿಕರೂ ಅಗತ್ಯ

Hiriya Nagarika
Published on

ಚಿತ್ರದುರ್ಗ: ಹಿರಿಯ ನಾಗರಿಕರ ಜೀವನಾನುಭವ ಯುವಪೀಳಿಗೆ, ವಿದ್ಯಾರ್ಥಿಗಳು ಅಳವಡಿಸಿಕೊಂಡಲ್ಲಿ ಅತ್ಯುತ್ತಮ ಸಮಾಜ ನಿರ್ಮಿಸಲು ಸಾಧ್ಯವಿದೆ ಎಂದು ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಸಲಹೆ ನೀಡಿದರು.

ತರಾಸು ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಜ್ಯ ಸರ್ಕಾರಿ ನಿವೃತ್ತ ನೌಕರರ ಜಿಲ್ಲಾ ಸಂಘ, ಹಿರಿಯ ನಾಗರಿಕರ ಕ್ಷೇತ್ರದ ಸ್ವಯಂ ಸೇವಾ ಸಂಸ್ಥೆಗಳಿಂದ ಮಂಗಳವಾರ ಹಮ್ಮಿಕೊಂಡಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಹಿರಿಯ ನಾಗರಿಕರಿಗೆ ಆರೋಗ್ಯ ಮತ್ತು ಬೆಂಬಲವನ್ನು ಸದೃಢವಾಗಿ ಒದಗಿಸುವುದು ನಮ್ಮೆಲ್ಲರ ಕರ್ತವ್ಯ. ತಮ್ಮ ಮಕ್ಕಳು ಸರಿಯಾಗಿ ನೋಡಿಕೊಳ್ಳದಿದ್ದರೆ, ಮಾನಸಿಕ, ದೈಹಿಕ ತೊಂದರೆ ನೀಡಿದಲ್ಲಿ ಆತಂಕ ಬೇಡ. ಕಾಯ್ದೆಯಡಿ ದಾವೆ ಹೂಡಿ ಉಪವಿಭಾಗಾಧಿಕಾರಿ ಹಂತದಲ್ಲಿ ಸಮಸ್ಯೆ ಪರಿಹರಿಸಿಕೊಳ್ಳಬಹುದು ಎಂದರು.

ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಆರ್.ರಂಗಪ್ಪರೆಡ್ಡಿ ಮಾತನಾಡಿ, ಹಿರಿಯ ನಾಗರಿಕರಿಗಾಗಿ ಸರ್ಕಾರ ಇನ್ನಷ್ಟು ಯೋಜನೆಗಳನ್ನು ರೂಪಿಸಬೇಕು. ಯುವಪೀಳಿಗೆ ಹಿರಿಯರ ಕುರಿತು ಗೌರವ ಮನೋಭಾವ ಹೊಂದಿರಬೇಕು. ಸರ್ಕಾರಿ ಕಚೇರಿಗಳಲ್ಲೂ ಆತ್ಮೀಯತೆಯಿಂದ ಕಾಣಲು ಮುಂದಾಗಿ ಎಂದು ಮನವಿ ಮಾಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ಮಾತನಾಡಿ, ಹಿರಿಯ ನಾಗರಿಕರು ಕುಟುಂಬ, ಸಮಾಜ, ಸಮುದಾಯಕ್ಕೆ ನೀಡಿದ ಕೊಡುಗೆಗಳ ಪ್ರತೀಕವಾಗಿ 1991 ರಿಂದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಆಚರಿಸುತ್ತ ಬರಲಾಗಿದೆ ಎಂದರು.

ಈಚೆಗೆ ನಡೆದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನದೊಂದಿಗೆ ವಿಜೇತರಾದವರಿಗೆ ಪ್ರಶಸ್ತಿ ಪತ್ರ, ಪಾರಿತೋಷಕ ನೀಡಿ ಗೌರವಿಸಲಾಯಿತು.

ಎಎಸ್‌ಪಿ ಎಸ್.ಜೆ.ಕುಮಾರಸ್ವಾಮಿ, ಜಿಪಂ ಸಹ ಕಾರ್ಯದರ್ಶಿ ರವಿ, ಜಿಲ್ಲಾ ನಿರೂಪಣಾಧಿಕಾರಿ ವಿಜಯ್‌ಕುಮಾರ್, ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಡಿ.ಸಿ.ಸೋಮಶೇಖರಯ್ಯ, ಸಿಡಿಪಿಒಗಳಾದ ವೀಣಾ, ಎನ್.ಸುಧಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net