

ಭಾಲ್ಕಿ: ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ತೋರಲು ತಮ್ಮಲ್ಲಿರುವ ಬುದ್ಧಿವಂತಿಕೆ ಪ್ರದರ್ಶಿಸಬೇಕು ಎಂದು ಪದ್ಮಶ್ರೀ ಪುರಸ್ಕೃತ ಡಾ.ಕೆ.ಎಸ್.ರಾಜಣ್ಣ ಹೇಳಿದರು.
ಕರಡ್ಯಾಳ ಚನ್ನಬಸವೇಶ್ವರ ಗುರುಕುಲದ ಅನುಭವ ಮಂಟಪದಲ್ಲಿ ಭಾನುವಾರ ಆಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳಲ್ಲಿ ಸ್ವಲ್ಪ ವಿದ್ಯೆ ಕಡಿಮೆ ಆದರೂ ಪರವಾಗಿಲ್ಲ, ಆದರೆ ಬುದ್ಧಿವಂತಿಕೆ ಬೆಳೆಸಿಕೊಳ್ಳುವುದು ಅವಶ್ಯಕವಾಗಿದೆ. ಬುದ್ಧಿವಂತಿಕೆ ಇದ್ದರೆ ಎಲ್ಲವನ್ನು ಮೀರಿ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಎಲ್ಲರಿಗೂ ಪದ್ಮಭೂಷಣ, ಪದ್ಮಶ್ರೀ ಸೇರಿ ದೇಶದ ಅತ್ಯುನ್ನತ ಪ್ರಶಸ್ತಿ ಪಡೆಯುವ ಅರ್ಹತೆ ಇದೆ. ಆ ನಿಟ್ಟಿನಲ್ಲಿ ಪ್ರಯತ್ನ ಆಗಬೇಕು ಎಂದರು.
ತಂದೆ ತಾಯಿಗಳನ್ನು ದೇವರ ಸ್ವರೂಪದಲ್ಲಿ ಕಾಣಬೇಕು. ಇನ್ನೊಬ್ಬರ ನೋವು ಅರ್ಥೈಸಿಕೊಂಡು ಕೆಲಸ ಮಾಡುವರು ನಿಜವಾದ ಶರಣರು. ಈ ಭಾಗದಲ್ಲಿ ನಾಡೋಜ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು ಶಿಕ್ಷಣದ ಜತೆಗೆ ಎಲ್ಲರಲ್ಲಿ ಮಾನವೀಯ ಮೌಲ್ಯಗಳನ್ನು ತುಂಬುವ ಪ್ರಯತ್ನ ಮಾಡುತ್ತಿದ್ದಾರೆ. ಎಲ್ಲೆಡೆ ವಿದ್ಯೆ ಮಾರ್ಕೆಟ್ ಆಗಿ ಪರಿವರ್ತನೆ ಆಗಿದೆ. ಆದರೆ ಪೂಜ್ಯರು ಮಕ್ಕಳಿಗೆ ಗುಣಾತ್ಮಕ ಶಿಕ್ಷಣ, ಸಂಸ್ಕಾರ ಕಲ್ಪಿಸಿ ದೇಶದ ಉತ್ತಮ ನಾಗರಿಕರನ್ನಾಗಿ ರೂಪಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಪ್ರಾಚಾರ್ಯ ಬಸವರಾಜ ಮೊಳಕೀರೆ ಪ್ರಾಸ್ತಾವಿಕ ಮಾತನಾಡಿದರು.
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಚಂದ್ರಶೇಖರ ಬನ್ನಾಳೆ, ಗುತ್ತಿಗೆದಾರ ಜೋತಿಷ ಹಲಬರ್ಗೆ, ವಕೀಲ ನೀಲಕಂಠ ಬಿರಾದಾರ್, ಭಾಗ್ಯಲಕ್ಷ್ಮಿ ರಾಜಣ್ಣ, ಮನು ಪ್ರಸಾದ, ಸಿಬಿಎಸ್‌ಇ ಪ್ರಾಚಾರ್ಯ ರಾಜು, ಎಸ್ಸೆಸ್ಸೆಲ್ಸಿ ಸಂಯೋಜಕ ಪ್ರವೀಣ ಖಂಡಾಳೆ, ಪ್ರಾಥಮಿಕ ವಿಭಾಗದ ಮುಖ್ಯಗುರು ಮಹೇಶ ಕುಲಕರ್ಣಿ ಇತರರಿದ್ದರು. ಮಧುಕರ ಗಾಂವಕರ್ ನಿರೂಪಣೆ ಮಾಡಿದರು. ಉಪಪ್ರಾಚಾರ್ಯ ಸಿದ್ರಾಮ ಗೊಗ್ಗಾ ವಂದಿಸಿದರು.