

ಅರಸೀಕೆರೆ : ರಾಜ್ಯದಲ್ಲಿ ನಡೆಯುತ್ತಿರುವ ಮೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಮಾಜಿ ಸಚಿವ ಬಿ.ಶಿವರಾಮ್ ಹೇಳಿದರು.
ಖಾಸಗಿ ಕಾರ್ಯಕ್ರಮ ನಿಮಿತ್ತ ಸೋಮವಾರ ನಗರಕ್ಕೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಕಾಂಗ್ರೆಸ್ ಸರ್ಕಾರ ನೀಡುತ್ತಿರುವ ಗ್ಯಾರಂಟಿ ಯೋಜನೆಗಳು ಎಲ್ಲರನ್ನು ತಲುಪುತ್ತಿವೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಜನಪರ ಕೆಲಸಗಳು ಅನುಷ್ಠಾನಗೊಳ್ಳುತ್ತಿವೆ.
ಇದು ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ವರವಾಗಲಿದೆ ಎಂದರು. ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾಂವಿ ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ನಿರೀಕ್ಷೆಗೂ ಮೀರಿ ಗೆಲುವು ದಾಖಲಿಸಲಿದ್ದಾರೆ. ಹಳೆಯ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಹಿಡಿತ ಬಲವಾಗಿದೆ ಎಂಬುದು ಚನ್ನಪಟ್ಟಣ ಪ್ರಚಾರದ ವೇಳೆ ನನ್ನ ಅನುಭವಕ್ಕೆ ಬಂದಿದೆ. ಬಿಜೆಪಿ ಮುಖಂಡರ ರಾಜಕೀಯ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ ಎಂದು ಶಿವರಾಮ್ ಹೇಳಿದರು.